ಪಂತ್, ಪಟೇಲ್ ಸ್ಪೋಟಕ ಅರ್ಧಶತಕ: ಗುಜರಾತ್ ಗೆಲುವಿಗೆ ಕಠಿಣ ಗುರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 
 
ನಾಯಕ ರಿಷಭ್ ಪಂತ್ ಹಾಗೂ ಅಕ್ಷರ್ ಪಟೇಲ್ ಸ್ಪೋಟಕ ಅರ್ಧಶತಕಗಳ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ 4 ವಿಕೆಟ್ ಕಳೆದುಕೊಂಡು 224 ರನ್ ಬಾರಿಸಿದ್ದು, ಗುಜರಾತ್ ಟೈಟಾನ್ಸ್ ತಂಡಕ್ಕೆ ಕಠಿಣ ಗುರಿ ನೀಡಿದೆ.

ಅರುಣ್ ಜೇಟ್ಲಿ ಮೈದಾನದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಲಿಳಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಉತ್ತಮ ಆರಂಭ ಪಡೆಯಲು ಮತ್ತೊಮ್ಮೆ ವಿಫಲವಾಯಿತು. ಸ್ಪೋಟಕ ಆರಂಭಿಕ ಬ್ಯಾಟರ್ ಜೇಕ್ ಫೇಸರ್ 14 ಎಸೆತಗಳಲ್ಲಿ 23 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಇನ್ನು ಇದರ ಬೆನ್ನಲ್ಲೇ ಮತ್ತೋರ್ವ ಆರಂಭಿಕ ಬ್ಯಾಟರ್ ಪೃಥ್ವಿ ಶಾ ಕೂಡಾ 11 ರನ್ ಗಳಿಸಿ ಸಂದೀಪ್ ವಾರಿಯರ್‌ಗೆ ಎರಡನೇ ಬಲಿಯಾದರು. ಇನ್ನು ಡೇವಿಡ್ ವಾರ್ನರ್ ಬದಲು ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆದ ಶಾಯ್ ಹೋಪ್ ಕೇವಲ 5 ರನ್ ಗಳಿಸಿ ಮೂರನೇ ಬಲಿಯಾದರು.

ಪವರ್‌ಪ್ಲೇನೊಳಗೆ ಅಗ್ರಕ್ರಮಾಂಕದ ಮೂರು ವಿಕೆಟ್ ಕಳೆದುಕೊಂಡು ಕಂಗಾಲಾಗಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ 4ನೇ ವಿಕೆಟ್‌ಗೆ ನಾಯಕ ರಿಷಭ್ ಪಂತ್ ಹಾಗೂ ಆಲ್ರೌಂಡರ್ ಅಕ್ಷರ್ ಪಟೇಲ್ ಶತಕದ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ಆರಂಭದಲ್ಲಿ ಎಚ್ಚರಿಕೆಯ ಬ್ಯಾಟಿಂಗ್ ನಡೆಸಿದ ಈ ಜೋಡಿ ಪಿಚ್‌ಗೆ ಹೊಂದಿಕೊಳ್ಳುತ್ತಿದ್ದಂತೆಯೇ ಮೈಚಳಿ ಬಿಟ್ಟು ಬ್ಯಾಟ್ ಬೀಸುವ ಮೂಲಕ ಗುಜರಾತ್ ಬೌಲರ್‌ಗಳನ್ನು ಕಾಡಿದರು.

ಅಕ್ಷರ್ ಪಟೇಲ್ 43 ಎಸೆತಗಳನ್ನು ಎದುರಿಸಿ 5 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ ಆಕರ್ಷಕ 66 ರನ್ ಬಾರಿಸಿ ನೂರ್ ಅಹಮ್ಮದ್‌ಗೆ ವಿಕೆಟ್‌ ಒಪ್ಪಿಸಿದರು.

ಇನ್ನು ಅಕ್ಷರ್ ಪಟೇಲ್‌ಗೆ ಉತ್ತಮ ಸಾಥ್ ನೀಡಿದ ನಾಯಕ ರಿಷಭ್ ಪಂತ್, ಈ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ 4ನೇ ಅರ್ಧಶತಕ ಚಚ್ಚಿದರು. ಕೇವಲ 43 ಎಸೆತಗಳನ್ನು ಎದುರಿಸಿ ಅಜೇಯ 88 ರನ್ ಸಿಡಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!