ಹೊಸದಿಗಂತ ಡಿಜಿಟಲ್ ಡೆಸ್ಕ್:
2023ರ ಸಂಸತ್ ಭದ್ರತಾ ಲೋಪ ಪ್ರಕರಣದ ಆರೋಪಿಗಳಾದ ಸಾಗರ್ ಶರ್ಮಾ ಹಾಗೂ ಮನೋರಂಜನ್ ಡಿ. ಸಲ್ಲಿಸಿದ್ದ ಜಾಮೀನು ಅರ್ಜಿಗಳನ್ನು ದೆಹಲಿ ನ್ಯಾಯಾಲಯ ತಿರಸ್ಕರಿಸಿದೆ.
ವಿಚಾರಣೆ ವೇಳೆ, ಆರೋಪಿಗಳ ವಿರುದ್ಧದ ಆರೋಪಗಳು ಮೇಲ್ನೋಟಕ್ಕೆ ಸತ್ಯವೆಂದು ನಂಬಲು ಸಮಂಜಸವಾದ ಆಧಾರಗಳಿವೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಅಲ್ಲದೆ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಜಾಮೀನು ನೀಡುವುದಕ್ಕೆ ಇರುವ ಕಾನೂನು ನಿರ್ಬಂಧಗಳು ಈ ಪ್ರಕರಣಕ್ಕೂ ಅನ್ವಯಿಸುತ್ತವೆ ಎಂದು ನ್ಯಾಯಾಲಯ ಹೇಳಿದೆ.
ಆರೋಪಿಗಳ ವಿರುದ್ಧದ ಆರೋಪಗಳು ಅತ್ಯಂತ ಗಂಭೀರ ಮತ್ತು ಸೂಕ್ಷ್ಮ ಸ್ವರೂಪದ್ದಾಗಿವೆ ಎಂದು ನ್ಯಾಯಾಲಯ ಗಮನಿಸಿದೆ. ಆರೋಪಿಗಳ ಕೃತ್ಯಗಳಿಂದ ಸಂಸತ್ತಿನ ಕಲಾಪಗಳಿಗೆ ಅಡ್ಡಿಯುಂಟಾಗಿದ್ದು, ಲೋಕಸಭೆಯ ಒಳಗಿದ್ದವರಲ್ಲಿ ಭಯದ ವಾತಾವರಣ ನಿರ್ಮಾಣವಾಗಿತ್ತು ಎಂದು ಅಭಿಪ್ರಾಯಪಟ್ಟಿದೆ. ಪ್ರಾಸಿಕ್ಯೂಷನ್ ಮಂಡಿಸಿರುವ ಆರೋಪಗಳ ಪ್ರಾಥಮಿಕ ಆಧಾರಗಳನ್ನು ಪರಿಗಣಿಸಿದ ನ್ಯಾಯಾಲಯ, ಆರೋಪಿಗಳ ಕೃತ್ಯಗಳು ಭಾರತದ ಸಾರ್ವಭೌಮತ್ವ ಮತ್ತು ಸಮಗ್ರತೆಗೆ ಬೆದರಿಕೆ ಒಡ್ಡಿವೆ ಎಂಬ ಅಂಶವನ್ನೂ ಉಲ್ಲೇಖಿಸಿದೆ. ಈ ಎಲ್ಲ ಅಂಶಗಳನ್ನು ಪರಿಗಣಿಸಿ ಸಾಗರ್ ಶರ್ಮಾ ಮತ್ತು ಮನೋರಂಜನ್ ಡಿ ಅವರ ಜಾಮೀನು ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿದೆ.



