ಹೊಸದಿಗಂತ ಡಿಜಿಟಲ್ ಡೆಸ್ಕ್:
ನೇಪಾಳದಲ್ಲಿ ಸುಶೀಲಾ ಕರ್ಕಿ ಅವರು ಹಂಗಾಮಿ ಪ್ರಧಾನಿಯಾಗಿ ಶುಕ್ರವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇದರ ಬೆನ್ನಲ್ಲೇ ಶನಿವಾರ ನೇಪಾಳ ಸಂಸತ್ತಿಗೆ ಚುನಾವಣೆ ಘೋಷಣೆಯಾಗಿದೆ.
ಮುಂದಿನ ವರ್ಷ ಮಾರ್ಚ್ 5 ರಂದು ಸಾರ್ವತ್ರಿಕ ಚುನಾವಣೆ ನಡೆಯಲಿದೆ ಎಂದು ನೇಪಾಳ ಅಧ್ಯಕ್ಷ ರಾಮಚಂದ್ರ ಪೌಡೆಲ್ ಅವರ ಕಚೇರಿ ಘೋಷಿಸಿದೆ.
ಹೊಸದಾಗಿ ನೇಮಕಗೊಂಡ ಪ್ರಧಾನಿಯ ಶಿಫಾರಸಿನ ಮೇರೆಗೆ ಪ್ರತಿನಿಧಿಗಳ ಸಭೆಯನ್ನು ಶುಕ್ರವಾರ ವಿಸರ್ಜಿಸಿದ್ದು, 2026ರ ಮಾರ್ಚ್ 5 ರಂದು ಮುಂದಿನ ಸಂಸತ್ ಚುನಾವಣೆ ನಡೆಯಲಿದೆ ಎಂದು ಅಧ್ಯಕ್ಷ ಪೌಡೆಲ್ ಹೇಳಿದ್ದಾರೆ.
ಸಾಮಾಜಿಕ ಮಾಧ್ಯಮ ನಿಷೇಧ ಮತ್ತು ಭ್ರಷ್ಟಾಚಾರದ ಆರೋಪದ ವಿರುದ್ಧ ವ್ಯಾಪಕ ಪ್ರತಿಭಟನೆಗಳ ನಂತರ ಈ ವಾರ ಓಲಿ ಅವರು ಪ್ರಧಾನಿ ಸ್ಥಾನಕ್ಕೆ ಹಠಾತ್ ರಾಜೀನಾಮೆ ನೀಡಿದ್ದರು. ನಂತರ ರಾಜಕೀಯ ಅನಿಶ್ಚಿತತೆಯ ದಿನಗಳನ್ನು ಕೊನೆಗೊಳಿಸಲು ಮಾಜಿ ಮುಖ್ಯ ನ್ಯಾಯಮೂರ್ತಿ ಕರ್ಕಿ(73) ಅವರು ದೇಶದ ಮೊದಲ ಮಹಿಳಾ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು.