ಪಾಟೀದಾರ್ ಭರ್ಜರಿ ಅರ್ಧಶತಕ: ಡೆಲ್ಲಿ ಗೆಲುವಿಗೆ 188 ರನ್ ಟಾರ್ಗೆಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಜತ್ ಪಾಟೀದಾರ್ ಭರ್ಜರಿ ಅರ್ಧಶತಕ ಹಾಗೂ ವಿಲ್ ಜ್ಯಾಕ್ಸ್, ವಿರಾಟ್ ಕೊಹ್ಲಿ ಸ್ಪೋಟಕ ಬ್ಯಾಟಿಂಗ್ ನೆರವಿನಿಂದ ಬೆಂಗಳೂರು ತಂಡವು 9 ವಿಕೆಟ್ ಕಳೆದುಕೊಂಡು 187 ರನ್ ಬಾರಿಸಿದ್ದು, ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಕಠಿಣ ಗುರಿ ನೀಡಿದೆ.

ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಲಿಳಿದ ಬೆಂಗಳೂರು ತಂಡವು ಉತ್ತಮ ಆರಂಭ ಪಡೆಯಲು ವಿಫಲವಾಯಿತು. ನಾಯಕ ಫಾಫ್ ಡು ಪ್ಲೆಸಿಸ್ ಕೇವಲ 6 ರನ್ ಗಳಿಸಿ ಮುಕೇಶ್ ಕುಮಾರ್‌ಗೆ ವಿಕೆಟ್ ಒಪ್ಪಿಸಿದರು. 27 ರನ್ ಸಿಡಿಸಿದ ವಿರಾಟ್ ಕೊಹ್ಲಿ, ಇಶಾಂತ್ ಶರ್ಮಾಗೆ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿದರು.

ಕೇವಲ 36 ರನ್‌ಗಳಿಗೆ ಎರಡು ವಿಕೆಟ್ ಕಳೆದುಕೊಂಡು ಕಂಗಾಲಾಗಿದ್ದ ಆರ್‌ಸಿಬಿ ತಂಡಕ್ಕೆ ಮೂರನೇ ವಿಕೆಟ್‌ಗೆ ರಜತ್ ಪಾಟೀದಾರ್ ಹಾಗೂ ವಿಲ್ ಜ್ಯಾಕ್ಸ್ ಕೇವಲ 53 ಎಸೆತಗಳಲ್ಲಿ 88 ರನ್‌ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು.ಪಾಟೀದಾರ್ ಕೇವಲ 29 ಎಸೆತಗಳನ್ನು ಎದುರಿಸಿ ಈ ಆವೃತ್ತಿಯ 5ನೇ ಅರ್ಧಶತಕ ಸಿಡಿಸಿದರು. ಅಂತಿಮವಾಗಿ 52 ರನ್ ಬಾರಿಸಿ ರಸಿಕ್ ಸಲಾಮ್‌ಗೆ ವಿಕೆಟ್ ಒಪ್ಪಿಸಿದರು.

ವಿಲ್ ಜ್ಯಾಕ್ಸ್‌ 29 ಎಸೆತಗಳನ್ನು ಎದುರಿಸಿ 3 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 41 ರನ್ ಬಾರಿಸಿ ಕುಲ್ದೀಪ್ ಯಾದವ್‌ಗೆ ವಿಕೆಟ್ ಒಪ್ಪಿಸಿದರು.

ಪಾಟೀದಾರ್ ವಿಕೆಟ್ ಪತನದ ಬಳಿಕ ಕ್ರೀಸ್‌ಗಿಳಿದ ಕ್ಯಾಮರೋನ್ ಗ್ರೀನ್ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಿದರು. ಗ್ರೀನ್ 31 ಎಸೆತಗಳನ್ನು ಎದುರಿಸಿ 1 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ ಅಜೇಯ 32 ರನ್ ಬಾರಿಸಿದರು

ಇನ್ನು ಮಧ್ಯಮ ಕ್ರಮಾಂಕದಲ್ಲಿ ಆರ್‌ಸಿಬಿ ಭರ್ಜರಿಯಾಗಿ ರನ್ ಗಳಿಸಿತಾದರೂ ಉತ್ತಮವಾಗಿ ಫಿನೀಶ್ ಮಾಡಲು ಸಾಧ್ಯವಾಗಲಿಲ್ಲ. ಮಹಿಪಾಲ್ ಲೋಮ್ರಾರ್ ಕೇವಲ 13 ರನ್ ಬಾರಿಸಿ ವಿಕೆಟ್ ಒಪ್ಪಿಸಿದರೆ, ನಿರ್ಣಾಯಕ ಘಟ್ಟದಲ್ಲಿ ದಿನೇಶ್ ಕಾರ್ತಿಕ್ ಶೂನ್ಯ ಸುತ್ತಿ ಪೆವಿಲಿಯನ್ ಸೇರಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!