ಹೊಸದಿಗಂತ ಹುಬ್ಬಳ್ಳಿ:
ನಗರದ ಕೆಎಂಸಿಆರ್ ಐ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯಲು ಆಗಮಿಸಿದ್ದ ರೋಗಿಯೊಬ್ಬ ಆಸ್ಪತ್ರೆ ಕಟ್ಟಡದಿಂದ ಕೆಳಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಿಜಾವ ನಡೆದಿದೆ.
ನೇಕಾರನಗರದ ನಿವಾಸಿ ಆದರ್ಶ ಗೊಂದಕರ್ ಎಂಬಾತನೇ ಆತ್ಮಹತ್ಯೆ ಮಾಡಿಕೊಂಡ ಯುವಕ.
ಯುವಕನಿಗೆ ಜ್ವರ ಬಂದ ಹಿನ್ನೆಲೆ ಕಳೆದ ಎರಡು ದಿನಗಳ ಹಿಂದೆ ಕೆಎಂಸಿ ಆರ್ ಐ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ. ಕೆಎಂಸಿಆರ್ ಐ ಆಸ್ಪತ್ರೆಯ ಮುಖ್ಯ ಕಟ್ಟಡ ಮೂರನೇ ಮಹಡಿಯಿಂದ ಕೆಳಗೆ ಬಿದ್ದು ಮೃತಪಟ್ಟಿದ್ದಾನೆ. ಆಗ ಸ್ಥಳದಲ್ಲಿದ್ದ ಜನರು ಆತನನ್ನು ತುರ್ತು ಚಿಕಿತ್ಸಾ ಘಟಕಕ್ಕೆ ಚಿಕಿತ್ಸಗೆ ರವಾನಿಸಿದ್ದಾರೆ. ಅತೀಯಾದ ರಕ್ತಸ್ರಾವ ಆಗಿದ್ದರಿಂದ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಈ ಕುರಿತಂತೆ ವಿದ್ಯಾನಗರ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಈ ಕುರಿತಂತೆ ಕೆಎಂಸಿ ಆರ್ ಐ ನಿರ್ದೇಶಕ ಡಾ. ಎಸ್ ಎಫ್ ಕಮ್ಮಾರ ಮಾಧ್ಯಮದವರೊಂದಿಗೆ ಮಾತನಾಡಿ, ಕಳೆದ ಎರಡು ದಿನಗಳಿಂದ ಆದರ್ಶ ನಮ್ಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಇಂದು ಬೆಳಗಿನ ಜಾವ 3.30 ಸುಮಾರಿಗೆ ಶೌಚಾಲಯಕ್ಕೆ ಹೋಗುವುದಾಗಿ ಹೇಳಿ ಮೂರನೇ ಮಹಡಿಯಿಂದ ಕೆಳಗೆ ಬಿದ್ದಿದ್ದಾನೆ. ತಲೆ ಪೆಟ್ಟು ಬಿದ್ದು ತೀವ್ರ ರಕ್ತಸ್ರಾವ ಆಗಿ ಗಂಭೀರವಾಗಿ ಗಾಯಗೊಂಡಿದ್ದ. ತೀವ್ರ ನೀಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ ಎಂದು ತಿಳಿಸಿದರು.
ಮುಂದೆ ಇಂತ ಘಟನೆಗಳು ಮರಕಳಿಸಬಾರದು ಎಂಬ ದೃಷ್ಟಿಯಿಂದ ಡಾ. ರಾಜಶೇಖರ ದ್ಯಾಬೇರಿ ನೇತೃತ್ವದ ಒಂದು ಸಮಿತಿ ರಚನೆ ಮಾಡಲಾಗಿದೆ. ಈ ಬಗ್ಗೆ ವರದಿ ನೀಡಲು ಸೂಚಿಸಲಾಗಿದೆ ಎಂದು ತಿಳಿಸಿದರು.