ಹೊಸದಿಗಂತ ಡಿಜಿಟಲ್ ಡೆಸ್ಕ್:
ಅನುಮತಿಯಿಲ್ಲದೆ ನಗರದಲ್ಲಿ ರಸ್ತೆ ಅಗೆಯುವವರಿಗೆ ದಂಡ ವಿಧಿಸುವಂತೆ ಅಧಿಕಾರಿಗಳಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಮುಖ್ಯ ಆಯುಕ್ತ ಮಹೇಶ್ವರ ರಾವ್ ಅವರು ಖಡಕ್ ಸೂಚನೆ ನೀಡಿದ್ದಾರೆ.
ಐದು ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ರಸ್ತೆ ಕತ್ತರಿಸುವಿಕೆಗೆ ಮಾರ್ಕ್ಸ್ ತಂತ್ರಾಂಶದ ಮೂಲಕ ಬಂದಿರುವ ಅರ್ಜಿಗಳನ್ನು ಪರಿಶೀಲಿಸಿ, ನಿಯಮಾನುಸಾರ ಏಕ ಗವಾಕ್ಷಿ ಪದ್ಧತಿಯಲ್ಲಿ ಅನುಮತಿ ನೀಡಬೇಕು ಎಂದು ಸೂಚನೆ ನೀಡಿದರು.
ಇದೇ ವೇಳೆ ಆಸ್ತಿ ತೆರಿಗೆಯನ್ನು ಸಮಯಕ್ಕೆ ಸರಿಯಾಗಿ ಸಂಗ್ರಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಾಕಿ ಇರುವ ತೆರಿಗೆ ಬಾಕಿಗಳನ್ನು ಸಂಗ್ರಹಿಸಲು ಕ್ರಮ ಕೈಗೊಳ್ಳಿ. ತೆರಿಗೆ ಪಾವತಿಸದೆ ವಂಚಿಸುವವರಿಗೆ ನೋಟಿಸ್ ನೀಡಿ, ನೋಟಿಸ್’ಗೂ ಪ್ರತಿಕ್ರಿಯಿಸದಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಹೇಳಿದರು.
ಖಾತಾ ಪರಿವರ್ತನೆ ಕುರಿತು ಮಾತನಾಡಿ, ಬಿ-ಖಾತಾದಿಂದ ಎ-ಖಾತಾ ಪರಿವರ್ತನೆಗೆ ಬಂದಿರುವ ಅರ್ಜಿಗಳನ್ನು ಪಾಲಿಕೆವಾರು ಪರಿಶೀಲಿಸಿ, ನಿಯಮಾನುಸಾರ ಇತ್ಯರ್ಥಪಡಿಸಬೇಕು. ಜೊತೆಗೆ ಇ-ಖಾತಾ ಪಡೆಯಲು ಬಂದಿರುವ ಅರ್ಜಿಗಳನ್ನು ಕಾಲಮಿತಿಯೊಳಗಾಗಿ ವಿಲೇವಾರಿ ಮಾಡಲು ಹೇಳಿದರು.

