ಹೊಸದಿಗಂತ ವರದಿ ಅಂಕೋಲಾ:
ಇಡೀ ದೇಶದಲ್ಲಿ ಕಾಂಗ್ರೆಸ್ ಜನತೆಯ ವಿಶ್ವಾಸ ಕಳೆದುಕೊಂಡಿದೆ ಎಂಬುದು ಇತ್ತೀಚೆಗೆ ಪ್ರಕಟವಾದ ವಿಧಾನಸಭಾ ಚುನಾವಣೆ ಫಲಿತಾಂಶಗಳಿಂದ ಸಾಬೀತಾಗಿದ್ದು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರುವುದು ಖಚಿತ ಎಂದು ಮಾಜಿ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಹೇಳಿದರು.
ಭಾರತೀಯ ಜನತಾ ಪಕ್ಷದ ಕುರಿತಂತೆ ಜನರ ವಿಶ್ವಾಸ ದಿನೇ ದಿನ ಹೆಚ್ಚುತ್ತಿದೆ ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸಗಡಗಳ ಗೆಲುವು ಜನರ ವಿಶ್ವಾಸದ ಪ್ರತೀಕವಾಗಿದೆ,ತೆಲಂಗಾಣದಲ್ಲೂ ಬಿಜೆಪಿ ಶಾಸಕರ ಸಂಖ್ಯೆ ಮತ ಗಳಿಕೆ ಪ್ರಮಾಣ ಹೆಚ್ಚಿದೆ ಜನ ನಿರೀಕ್ಷಿಸಿರುವ ಉತ್ತಮ ಆಡಳಿತ ಬಿಜೆಪಿ ನೀಡುತ್ತಾ ಬಂದಿದ್ದು ಜನರು ತೋರಿರುವ ವಿಶ್ವಾಸ ನಮ್ಮ ಜವಾಬ್ದಾರಿಯನ್ನು ಇನ್ನಷ್ಟು ಹೆಚ್ಚಿಸಿದೆ ಎಂದ ಅವರು ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿರುವುದನ್ನು ರಾಜ್ಯದ ಕಾಂಗ್ರೆಸ್ ಪಕ್ಷದವರು ಇಡೀ ದೇಶವನ್ನು ಗೆದ್ದ ಹಾಗೆ ಸಂಭ್ರಮಿಸುತ್ತಿದ್ದು ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲುವು ಬಿಜೆಪಿಯ ಸೋಲಲ್ಲ ಎಂಬುದನ್ನು ಕಾಂಗ್ರೆಸ್ಸಿಗರು ಅರಿಯಬೇಕಿದೆ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲಾ ಸ್ಥಾನಗಳಲ್ಲಿ ಬಿಜೆಪಿ ಮತ್ತು ಮಿತ್ರ ಪಕ್ಷಗಳು ಗೆಲುವು ಸಾಧಿಸಲಿದ್ದಾರೆ ಎಂದರು.
ರಾಷ್ಟ್ರ ರಾಜಕಾರಣಕ್ಕೆ ಪ್ರವೇಶ ಮಾಡುವ ಸಾಧ್ಯತೆಗಳಿವೆಯೇ ಎನ್ನುವ ಕುರಿತು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಅವರು ಪ್ರತಿಕ್ರಿಯಿಸಿದ ಕಾಗೇರಿ ಸುದೀರ್ಘವಾಗಿ ರಾಜ್ಯ ರಾಜಕಾರಣದಲ್ಲಿ ಇದ್ದು ಹಲವಾರು ರೀತಿಯ ಜವಾಬ್ದಾರಿಗಳನ್ನು ನಿರ್ವಹಿಸಿದ್ದೇನೆ ಮುಂದೆ ಏನು ಮಾಡಬೇಕು ಎಂಬುದನ್ನು ಪಕ್ಷದ ವರಿಷ್ಠರು ತೀರ್ಮಾನ ತೆಗೆದುಕೊಳ್ಳಲಿದ್ದು ಅವರ ತೀರ್ಮಾನಕ್ಕೆ ಬದ್ಧರಾಗಿ ನಡೆಯುವುದಾಗಿ ತಿಳಿಸಿದರು.