ಹೊಸದಿಗಂತ ಡಿಜಿಟಲ್ ಡೆಸ್ಕ್:
ಮರಾಠರಿಗೆ ಶೇಕಡಾ 10 ರಷ್ಟು ಮೀಸಲಾತಿ ಕಲ್ಪಿಸುವ ಮಸೂದೆಯನ್ನು ಮಹಾರಾಷ್ಟ್ರ ವಿಧಾನಸಭೆಯು ಮಂಗಳವಾರ ಸರ್ವಾನುಮತದಿಂದ ಅಂಗೀಕರಿಸಿದೆ.
ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ಮಂಡಿಸಿದ ಕೆಲವೇ ನಿಮಿಷಗಳಲ್ಲಿ ಮಸೂದೆಯನ್ನು ಅಂಗೀಕರಿಸಲಾಯಿತು.
ಮಹಾರಾಷ್ಟ್ರ ಸರ್ಕಾರ ಇಂದು ರಾಜ್ಯ ವಿಧಾನಸಭೆಯಲ್ಲಿ ಮಸೂದೆಯನ್ನು ಮಂಡಿಸಿ ಅಂಗೀಕರಿಸಿದ್ದು, ಶೇ. 50 ಮೀಸಲಾತಿ ಮಿತಿಯನ್ನು ಮೀರಿ ಮರಾಠರಿಗೆ ಶೇಕಡಾ 10 ರಷ್ಟು ಮೀಸಲಾತಿ ವಿಸ್ತರಿಸಿದೆ.
2018ರಲ್ಲಿ ಅಂದಿನ ರಾಜ್ಯ ಸರ್ಕಾರ ನೀಡಿದಂತೆಯೇ ಶಿಕ್ಷಣ ಮತ್ತು ಉದ್ಯೋಗಗಳಲ್ಲಿ ಮರಾಠರಿಗೆ ಶೇಕಡಾ 10ರಷ್ಟು ಮೀಸಲಾತಿ ವಿಸ್ತರಿಸುವ ಮಸೂದೆಯನ್ನು ಮಂಡಿಸಿದರು. ಸುನಿಲ್ ಶುಕ್ರೆ ನೇತೃತ್ವದ ಮಹಾರಾಷ್ಟ್ರ ಹಿಂದುಳಿದ ವರ್ಗಗಳ ಆಯೋಗ (ಎಂಬಿಸಿಸಿ) ರಾಜ್ಯ ಸರ್ಕಾರಕ್ಕೆ ಸಲ್ಲಿಸಿದ ವರದಿಯ ಆಧಾರದ ಮೇಲೆ ಮೀಸಲಾತಿಯನ್ನು ವಿಸ್ತರಿಸಲಾಗಿದೆ.
ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಈಗ ವಿಧೇಯಕವನ್ನು ವಿಧಾನ ಪರಿಷತ್ತಿನಲ್ಲಿ ಮಂಡಿಸಿ ಒಪ್ಪಿಗೆ ಪಡೆಯಲಿದ್ದು, ಬಳಿಕ ಅದು ಕಾನೂನಾಗಿ ರೂಪುಗೊಳ್ಳಲಿದೆ. ಫೆ.17ರಂದು ಶಿಂಧೆ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಮರಾಠಾ ಮೀಸಲಾತಿ ಹೋರಾಟಗಾರ ಮನೋಜ್ ಜಾರಂಗೆ-ಪಾಟೀಲ್ ಅವರಿಗೆ ಫೆ.20ರಂದು ವಿಧಾನಸಭೆಯ ವಿಶೇಷ ಅಧಿವೇಶನ ಕರೆದು ಸಮುದಾಯಕ್ಕೆ ಮೀಸಲಾತಿ ನೀಡಲು ವಿಧಿವಿಧಾನಗಳನ್ನು ಪೂರ್ಣಗೊಳಿಸುವುದಾಗಿ ಭರವಸೆ ನೀಡಿದ್ದರು.