Thursday, October 23, 2025

ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಬಂಧನ ಪ್ರಶ್ನಿಸಿ ಅರ್ಜಿ: ಆದೇಶ ಕಾಯ್ದಿರಿಸಿದ ಹೈಕೋರ್ಟ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಆನ್​ಲೈನ್ ಮತ್ತು ಆಫ್​ಲೈನ್ ಅಕ್ರಮ ಬೆಟ್ಟಿಂಗ್ ಆರೋಪ ಪ್ರಕರಣ ಸಂಬಂಧ ಚಿತ್ರದುರ್ಗದ ಶಾಸಕ ಕೆ.ಸಿ.ವೀರೇಂದ್ರ ಬಂಧನ ಪ್ರಶ್ನಿಸಿ ಪತ್ನಿ ಡಿ.ಆರ್‌.ಚೈತ್ರಾ ಸಲ್ಲಿಸಿರುವ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್, ಆದೇಶವನ್ನು ಕಾಯ್ದಿರಿಸಿದೆ.

ಕೆ.ಸಿ.ವೀರೇಂದ್ರ ಅವರನ್ನು ಪಿಎಂಎಲ್ ಕಾಯ್ದೆಯಡಿ ಜಾರಿ ನಿರ್ದೇಶನಾಲಯವು ಬಂಧಿಸಿರುವ ಕ್ರಮ ಕಾನೂನುಬಾಹಿರ ಎಂದು ಘೋಷಿಸುವಂತೆ ಪತ್ನಿ ಚೈತ್ರಾ ತಮ್ಮ ಅರ್ಜಿಯಲ್ಲಿ ಕೋರಿದ್ದರು. ಅದರ ವಿಚಾರಣೆ ಪೂರ್ಣಗೊಳಿಸಿರುವ ನ್ಯಾಯಮೂರ್ತಿ ಎಂ.ಐ.ಅರುಣ್ ಅವರಿದ್ದ ನ್ಯಾಯಪೀಠ, ತೀರ್ಪು ಕಾಯ್ದಿರಿಸಿತು.

ವಿಚಾರಣೆ ವೇಳೆ, ಶಾಸಕ ವೀರೇಂದ್ರ ಅವರನ್ನು ಬಂಧಿಸಿರುವ ಕ್ರಮವನ್ನು ಸಮರ್ಥಿಸಿಕೊಂಡ ಜಾರಿ ನಿರ್ದೇಶನಾಲಯದ ಪರ ವಾದ ಮಂಡಿಸಿದ ಸಹಾಯಕ ಸಾಲಿಸಿಟರ್‌ ಜನರಲ್‌, ಅರವಿಂದ ಕಾಮತ್‌, ಅರ್ಜಿದಾರರ ಪತಿಯ ವಿರುದ್ಧ 30 ಸಾವಿರ ರೂ.ಗಳನ್ನು ವಂಚನೆ ಮಾಡಿರುವ ಆರೋಪ ಸಂಬಂಧ ಸತೀಶ್‌ ಎಂಬವರು ದೂರು ನೀಡಿದ್ದರು. ಅದಕ್ಕೆ ಸಂಬಂಧಿಸಿದಂತೆ ಮಾತ್ರ ತನಿಖೆ ನಡೆಯುತ್ತಿಲ್ಲ. ಆ ಆರೋಪಕ್ಕೆ ಸಂಬಂಧಿಸಿದಂತೆ ಸುತ್ತಲಿನ ಪ್ರಕರಣಗಳ ತನಿಖೆ ಮತ್ತು ವಿಚಾರಣೆ ನಡೆಯಲಿದೆ ಎಂದರು.

ಇದಕ್ಕೂ ಮುನ್ನ, ವಾದ ಮಂಡಿಸಿದ ಅರ್ಜಿದಾರರ ಪರ ವಕೀಲರು, ‘ವೀರೇಂದ್ರ ವಿರುದ್ಧ 2011ರ ಕ್ರಿಕೆಟ್ ಬೆಟ್ಟಿಂಗ್ ಆರೋಪದಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಆ ಪ್ರಕರಣದ ಆರೋಪಗಳಿಂದ 2014ರಲ್ಲಿ ಅವರು ಖುಲಾಸೆಯಾಗಿದ್ದರು. ಇದೇ ಪ್ರಕರಣ ಸಂಬಂಧ 2015ರ ಮತ್ತೊಂದು ಎಫ್ಐಆರ್​​ನ್ನು ಹೈಕೋರ್ಟ್ ರದ್ದು ಮಾಡಿದೆ. 2016ರಲ್ಲಿ ದಾಖಲಾದ ಪ್ರಕರಣದಲ್ಲಿ ಕೆ.ಸಿ.ವೀರೇಂದ್ರ ಅವರು ಆರೋಪಿಯಾಗಿರಲಿಲ್ಲ. 2022ರ ದಾಖಲಾದ ಪ್ರಕರಣ ಸಂಬಂಧ ಆರೋಪಪಟ್ಟಿಯಲ್ಲಿ ವೀರೇಂದ್ರ ಅವರ ಹೆಸರನ್ನು ಕೈಬಿಡಲಾಗಿತ್ತು. ಮತ್ತೆರಡು ಪ್ರಕರಣಗಳು 2024ರಲ್ಲಿ ಮುಕ್ತಾಯಗೊಂಡಿವೆ. ಮುಕ್ತಾಯಗೊಂಡಿರುವ ಪ್ರಕರಣಗಳನ್ನು ಉಲ್ಲೇಖಿಸಿ ಇ.ಡಿ ಪ್ರಕರಣ (ಇಸಿಐಆರ್‌) ದಾಖಲಿಸಿಕೊಳ್ಳಲಾಗಿದೆ’ ಎಂದು ತಿಳಿಸಿದರು.

error: Content is protected !!