ಹೊಸದಿಗಂತ ಡಿಜಿಟಲ್ ಡೆಸ್ಕ್:
ನಂದಿ ಬೆಟ್ಟಕ್ಕೆ ರೋಪ್ ವೇ ಸೌಲಭ್ಯ ಕಲ್ಪಿಸಲು ಮುಂದಾಗಿರುವ ನಿರ್ಧಾರ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ವಿಶ್ವ ಮಾನವ ಹಕ್ಕುಗಳ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಸಿ.ಡಿ.ಕಿರಣ್ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ, ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆಯನ್ನು ಏಪ್ರಿಲ್ 8ಕ್ಕೆ ಮುಂದೂಡಿತು.
ಪ್ರಕರಣದಲ್ಲಿ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಕಾರ್ಯದರ್ಶಿಯನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.
ರೋಪ್ ವೇ ನಿರ್ಮಾಣಕ್ಕಾಗಿ ನಂದಿ ಬೆಟ್ಟದ ಸರ್ವೇ ನಂಬರ್ 3ರ ಹಾಗೂ ಅರ್ಕಾವತಿ ನದಿಯ ಬಫರ್ ಝೋನ್‌ನಲ್ಲಿರುವ ಎರಡು ಎಕರೆ ಜಮೀನನ್ನು ಸಾರ್ವಜನಿಕ – ಖಾಸಗಿ ಸಹಭಾಗಿತ್ವದಲ್ಲಿ (ಪಿಪಿಪಿ) ಖಾಸಗಿ ಕಂಪನಿಯೊಂದಕ್ಕೆ 30 ವರ್ಷಗಳ ಅವಧಿಕೆ ಗುತ್ತಿಗೆ ನೀಡಲಾಗಿದೆ. ಇದು ಕರ್ನಾಟಕ ಉದ್ಯಾನವನಗಳ ಸಂರಕ್ಷಣಾ ಕಾಯ್ದೆ–1975ಕ್ಕೆ ವಿರುದ್ಧವಾಗಿದೆ. ಜೀವವೈವಿಧ್ಯ, ಪರಿಸರ ವ್ಯವಸ್ಥೆಗೆ ಮಾರಕವಾಗಿರುವ ಈ ಏಕಪಕ್ಷೀಯ ಮತ್ತು ಕಾನೂನಿನ ನಿಯಮಗಳನ್ನು ಉಲ್ಲಂಘಿಸಿದ ಅಧಿಸೂಚನೆಯನ್ನು ರದ್ದುಗೊಳಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.
ಅಲ್ಲದೆ, ಈ ರೋಪ್ ವೇ ನಿರ್ಮಾಣದಿಂದ ಸ್ಥಳೀಯ ಪರಿಸರದ ಮೇಲೆ ಉಂಟಾಗುವ ಪ್ರಭಾವ ಏನೆಂಬುದನ್ನು ಅರಿಯಲು ತಜ್ಞರ ಸಮಿತಿ ರಚಿಸಿ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು. ನದಿಗಳ ಶಾಶ್ವತ ರಕ್ಷಣೆಯನ್ನು ಖಚಿತಪಡಿಸುವ ನಿಟ್ಟಿನಲ್ಲಿ ಮತ್ತು ಪರಿಣಾಮಕಾರಿಯಾದ ಮಾಲಿನ್ಯ ನಿವಾರಣೆ ದೃಷ್ಟಿಯಿಂದ ಅರ್ಕಾವತಿ ಮತ್ತು ಕುಮುದ್ವತಿ ನದಿಗಳ ಸಂರಕ್ಷಣೆ ಮಾಡಬೇಕಿದೆ ಎಂದು ಅರ್ಜಿಯಲ್ಲಿ ನಮೂದಿಸಿದ್ದಾರೆ.