ಹೊಸ ದಿಗಂತ ಡಿಜಿಟಲ್ ಡೆಸ್ಕ್: :
ರಾಜ್ಯ ಸರ್ಕಾರದ ಗೃಹಲಕ್ಷ್ಮಿ’ಯೋಜನೆಯಲ್ಲಿ ಮಹತ್ವದ ಬದಲಾವಣೆಯಾಗುವ ಸಾಧ್ಯತೆ ದಟ್ಟವಾಗಿದೆ. ಇನ್ಮುಂದೆ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಪ್ರತಿ ವರ್ಷ ಕಡ್ಡಾಯವಾಗಿ ‘ಜೀವಿತ ಪ್ರಮಾಣ ಪತ್ರ’ ಸಲ್ಲಿಸಬೇಕಾದ ನಿಯಮ ಜಾರಿಗೆ ಬರುವ ಲಕ್ಷಣಗಳು ಗೋಚರಿಸಿವೆ.
ಈ ಸಂಬಂಧ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ದಿನೇಶ್ ಗೂಳಿಗೌಡ ಅವರು ಸಲ್ಲಿಸಿದ ಮನವಿಯನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಈ ಕುರಿತು ಪರಿಶೀಲಿಸಿ ಕೂಡಲೇ ಕ್ರಮ ಕೈಗೊಳ್ಳುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಲಿಖಿತ ಆದೇಶ ನೀಡಿದ್ದಾರೆ.
ರಾಜ್ಯದಲ್ಲಿ ಸುಮಾರು 1.24 ಕೋಟಿಗೂ ಅಧಿಕ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಲಾಭ ಪಡೆಯುತ್ತಿದ್ದು, ಈವರೆಗೆ ಸುಮಾರು 57,300 ಕೋಟಿ ರೂ.ಗಳಿಗೂ ಅಧಿಕ ಆರ್ಥಿಕ ನೆರವನ್ನು ನೀಡಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಯೋಜನೆಯ ಫಲಾನುಭವಿಗಳಲ್ಲಿ ಕೆಲವರು ಮರಣ ಹೊಂದಿದ್ದರೂ, ಅವರ ಮಾಹಿತಿ ಸರ್ಕಾರಕ್ಕೆ ತಲುಪುತ್ತಿಲ್ಲ. ಪರಿಣಾಮವಾಗಿ, ಮೃತಪಟ್ಟ ಮಹಿಳೆಯರ ಖಾತೆಗೂ ಹಣ ಜಮಾವಣೆಯಾಗುತ್ತಿದ್ದು, ಸರ್ಕಾರದ ಬೊಕ್ಕಸಕ್ಕೆ ನಷ್ಟವಾಗುತ್ತಿದೆ .
ಹೀಗಾಗಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ದಿನೇಶ್ ಗೂಳಿಗೌಡ ಅವರು, ‘ಕುಟುಂಬದ ಜೀವನ ನಿರ್ವಹಣೆಗೆ ಆಸರೆಯಾಗಿರುವ ಈ ಯೋಜನೆಯ ಹಣವು ಮರಣ ಹೊಂದಿರುವ ಫಲಾನುಭವಿಗಳಿಗೆ ಪಾವತಿಯಾಗುವುದನ್ನು ತಡೆಗಟ್ಟುವುದು ಅವಶ್ಯಕ ಎಂದು ವಿವರಿಸಿದ್ದಾರೆ.
ಯಾವ ರೀತಿ ಸರ್ಕಾರಿ ನೌಕರರು ನಿವೃತ್ತಿಯ ನಂತರ ಪಿಂಚಣಿ ಪಡೆಯಲು ಹೇಗೆ ಪ್ರತಿ ವರ್ಷ ನವೆಂಬರ್ ಅಥವಾ ಡಿಸೆಂಬರ್ ತಿಂಗಳಲ್ಲಿ ಬ್ಯಾಂಕ್‌ಗಳಿಗೆ ತೆರಳಿ ತಾವು ಬದುಕಿದ್ದೇವೆ ಎಂದು ‘ಜೀವಿತ ಪ್ರಮಾಣ ಪತ್ರ’ವನ್ನು ಸಲ್ಲಿಸುತ್ತಾರೋ, ಅದೇ ಮಾದರಿಯನ್ನು ಗೃಹಲಕ್ಷ್ಮಿ ಯೋಜನೆಗೂ ಅನ್ವಯಿಸಬೇಕು ಎಂದು ಮನವಿಯಲ್ಲಿ ಕೋರಲಾಗಿದೆ. ಈ ವ್ಯವಸ್ಥೆಯನ್ನು ಜಾರಿಗೊಳಿಸುವುದರಿಂದ ಅನರ್ಹರಿಗೆ ಹಣ ವರ್ಗಾವಣೆಯಾಗುವುದನ್ನು ತಪ್ಪಿಸಬಹುದು ಎಂಬುದು ಪ್ರಾಧಿಕಾರದ ಅಭಿಪ್ರಾಯವಾಗಿದೆ.
ಸಿಎಂ ಕಡಕ್ ಸೂಚನೆ:
ದಿನೇಶ್ ಗೂಳಿಗೌಡ ಅವರ ಪತ್ರವನ್ನು ಸ್ವೀಕರಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಪಪರಿಶೀಲಿಸಿ, ಕೂಡಲೇ ಕ್ರಮ ತೆಗೆದುಕೊಳ್ಳುವುದು ಎಂದು ಬರೆದು ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ರವಾನಿಸಿದ್ದಾರೆ .
ಒಂದು ವೇಳೆ ಈ ನಿಯಮ ಜಾರಿಯಾದರೆ, ರಾಜ್ಯದ ಕೋಟ್ಯಂತರ ಗೃಹಲಕ್ಷ್ಮಿ ಫಲಾನುಭವಿಗಳು ವರ್ಷಕ್ಕೊಮ್ಮೆ ತಮ್ಮ ಬ್ಯಾಂಕ್ ಅಥವಾ ಸೇವಾ ಕೇಂದ್ರಗಳಿಗೆ ತೆರಳಿ ಬಯೋಮೆಟ್ರಿಕ್ ಅಥವಾ ಇತರೆ ವಿಧಾನಗಳ ಮೂಲಕ ಲೈಫ್ ಸರ್ಟಿಫಿಕೇಟ್ ಸಲ್ಲಿಸಬೇಕಾಗುತ್ತದೆ.



