ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಎರಡು ದಿನಗಳ ಫ್ರಾನ್ಸ್ ಪ್ರವಾಸವ ಮುಗಿಸಿ, ಶನಿವಾರ ಯುನೈಟೆಡ್ ಅರಬ್ ಎಮಿರೇಟ್ಸ್ ನತ್ತ ಪ್ರಯಾಣ ಬೆಳೆಸಿದರು. ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ಮೋದಿ ಮಾತುಕತೆ ನಡೆಸಿದರು. ಫ್ರಾನ್ಸ್ಗೆ ಭೇಟಿ ನೀಡಿದ ಸಂದರ್ಭದಲ್ಲಿ ಮೋದಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಮತ್ತು ಮಿಲಿಟರಿ ಗೌರವವಾದ ಗ್ರ್ಯಾಂಡ್ ಕ್ರಾಸ್ ನೀಡಲಾಯಿತು. ಭಾರತ ಮತ್ತು ಫ್ರಾನ್ಸ್ ನಡುವಿನ ಸಂಬಂಧದಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ ಎಂದು ಮೋದಿ ಈ ಸಂದರ್ಭದಲ್ಲಿ ಹೇಳಿದರು.
ಭಾರತ-ಫ್ರಾನ್ಸ್ ಸಂಬಂಧದಲ್ಲಿ ಹೊಸ ಅಧ್ಯಾಯಕ್ಕೆ ನಾಂದಿ ಹಾಡಿರುವ ಮೋದಿ ಅವರು ಮುಂದಿನ ಭೇಟಿಗಾಗಿ ಅಬುಧಾಬಿಗೆ ತೆರಳಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಟ್ವೀಟ್ ಮಾಡಿದ್ದಾರೆ. ಯುಎಇ ಅಧ್ಯಕ್ಷ ಮತ್ತು ಅಬುಧಾಬಿಯ ಆಡಳಿತಗಾರ ಶೇಖ್ ಮೊಹಮ್ಮದ್ ಬಿನ್ ಝಾಯೆದ್ ಅಲ್ ನಹ್ಯಾನ್ ಅವರೊಂದಿಗೆ ಪ್ರಧಾನಿ ಮೋದಿ ಆಹಾರ ಸುರಕ್ಷತೆ ಮತ್ತು ಭದ್ರತೆಯನ್ನು ಕೇಂದ್ರೀಕರಿಸಿ ಚರ್ಚೆ ನಡೆಸಲಿದ್ದಾರೆ.
ಭಾರತ ಮತ್ತು ಫ್ರಾನ್ಸ್ ತಮ್ಮ ಕಾರ್ಯತಂತ್ರದ ಪಾಲುದಾರಿಕೆಯನ್ನು ಗಾಢಗೊಳಿಸಲು 25 ವರ್ಷಗಳ ಮಾರ್ಗಸೂಚಿಯನ್ನು ಅನಾವರಣಗೊಳಿಸಿವೆ. ಸ್ನೇಹಪರ ರಾಷ್ಟ್ರಗಳ ಹಿತಾಸಕ್ತಿ ಸೇರಿದಂತೆ ಪ್ರಮುಖ ಸೇನಾ ವೇದಿಕೆಗಳ ಅಭಿವೃದ್ಧಿಗೆ ಅವಕಾಶಗಳನ್ನು ಅನ್ವೇಷಿಸುತ್ತಿದ್ದೇವೆ ಎಂದು ಭಾರತ ಮತ್ತು ಫ್ರಾನ್ಸ್ ಹೇಳಿವೆ.