Thursday, September 11, 2025

ಫ್ರಾನ್ಸ್ ಅಧ್ಯಕ್ಷರ ಜೊತೆ ಪ್ರಧಾನಿ ಮೋದಿ ಮಾತುಕತೆ: ಉಕ್ರೇನ್ ಸಂಘರ್ಷಗಳ ಶಾಂತಿಯುತ ಪರಿಹಾರದ ಚರ್ಚೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಧಾನಿ ನರೇಂದ್ರ ಮೋದಿ ಇಂದು ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ.

ಎಕ್ಸ್​ ಪೋಸ್ಟ್​​ನಲ್ಲಿ ತಮ್ಮಿಬ್ಬರ ಸಂವಾದದ ವಿವರಗಳನ್ನು ಹಂಚಿಕೊಂಡ ಪ್ರಧಾನಿ ಮೋದಿ,’ನನ್ನ ಸ್ನೇಹಿತರಾದ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ ಅವರೊಂದಿಗೆ ಉತ್ತಮ ಮಾತುಕತೆ ನಡೆಸಿದ್ದೇನೆ. ಉಕ್ರೇನ್ ಮತ್ತು ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷಗಳ ಶಾಂತಿಯುತ ಪರಿಹಾರಕ್ಕಾಗಿ ಪ್ರಯತ್ನಗಳ ಕುರಿತು ನಾವು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡಿದ್ದೇವೆ’ ಎಂದು ಹೇಳಿದ್ದಾರೆ.

ಉಕ್ರೇನ್‌ನಲ್ಲಿನ ಸಂಘರ್ಷ ಮತ್ತು ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಗಳು ಅಂತಾರಾಷ್ಟ್ರೀಯ ಸ್ಥಿರತೆಗೆ ಬೆದರಿಕೆಯನ್ನುಂಟುಮಾಡುತ್ತಿರುವುದರಿಂದ, ಶಾಶ್ವತ ಶಾಂತಿಯನ್ನು ಸಾಧಿಸಲು ಸಂವಾದ ಮತ್ತು ರಾಜತಾಂತ್ರಿಕತೆ ಅತ್ಯಗತ್ಯ ಎಂದು ಪ್ರಧಾನಿ ಮೋದಿ ಮತ್ತು ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ ಇಬ್ಬರೂ ಅಭಿಪ್ರಾಯಪಟ್ಟಿದ್ದಾರೆ. ಜಗತ್ತಿನಲ್ಲಿ ನಡೆಯುತ್ತಿರುವ ಭೌಗೋಳಿಕ ರಾಜಕೀಯ ಬಿಕ್ಕಟ್ಟುಗಳ ಬಗ್ಗೆ ಇಬ್ಬರೂ ನಾಯಕರ ಕಳವಳಗಳನ್ನು ವ್ಯಕ್ತಪಡಿಸಿದ್ದಾರೆ.

ಇಬ್ಬರೂ ನಾಯಕರು ಭಾರತ-ಫ್ರಾನ್ಸ್ ಕಾರ್ಯತಂತ್ರದ ಪಾಲುದಾರಿಕೆಯನ್ನು ಗಾಢಗೊಳಿಸುವ ಬದ್ಧತೆಯನ್ನು ಪುನರುಚ್ಚರಿಸಿದರು. ರಕ್ಷಣೆ, ಬಾಹ್ಯಾಕಾಶ, ಇಂಧನ ಪರಿವರ್ತನೆ ಮತ್ತು ಜಾಗತಿಕ ಆಡಳಿತದಲ್ಲಿ ಸಹಕಾರವು ಈ ಸಂಬಂಧದ ಬೆನ್ನೆಲುಬಾಗಿ ಮುಂದುವರೆದಿದೆ. ಇದನ್ನು ಭಾರತ ಮತ್ತು ಫ್ರಾನ್ಸ್ ಎರಡೂ ದೇಶಗಳು ಮತ್ತಷ್ಟು ವಿಸ್ತರಿಸಲು ಸಿದ್ಧತೆಯನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ