ಹೊಸದಿಗಂತ ಡಿಜಿಟಲ್ ಡೆಸ್ಕ್
ಪಂಚಾಯತಿ ರಾಜ್ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 24ರಂದು ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದೇ ದಿನ ಮೋದಿ ಶಿವಮೊಗ್ಗದ ಹೊಳಲೂರಿಗೆ ಭೇಟಿ ನೀಡುವ ಕಾರ್ಯಕ್ರಮ ನಿಗದಿಯಾಗಿತ್ತು. ಕೊನೇ ಕ್ಷಣದಲ್ಲಿ ಇದು ರದ್ದಾಗಿದೆ ಎನ್ನಲಾಗಿದೆ.
ಕಾಶ್ಮೀರ ಭೇಟಿ ವೇಳೆ ಪ್ರಧಾನಿ ಮೋದಿ ಜಮ್ಮು ಹಾಗೂ ಕಾಶ್ಮೀರದ ಪಂಚಾಯತಿ ರಾಜ್ ಸಂಸ್ಥೆಯ ಸದಸ್ಯರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಅಲ್ಲಿನ ಜಿಲ್ಲಾ ಅಭಿವೃದ್ಧಿ ಮಂಡಳಿ, ಬ್ಲಾಕ್ ಅಭಿವೃದ್ಧಿ ಮಂಡಳಿ, ಪಂಚಾಯತಿಯ ಸರಪಂಚ ಹಾಗೂ ಪಂಚರೊಂದಿಗೆ ಸಂವಾದ ನಡೆಸಲಿದ್ದಾರೆ. ಕೈಗಾರಿಕಾ ಹೂಡಿಕೆಗೆ ಚಾಲನೆ ಸೇರಿದಂತೆ ಹಲವಾರು ಅಭಿವೃದ್ಧಿ ಯೋಜನೆಗಳ ಶಂಕು ಸ್ಥಾಪನೆ ನೆರವೇರಿಸುವ ಸಾಧ್ಯತೆಗಳಿವೆ.
ಏಪ್ರಿಲ್ 24 ರಂದು ದೇಶದಲ್ಲಿ ಪಂಚಾಯತಿ ರಾಜ್ ದಿನವನ್ನು ಆಚರಿಸಲಾಗುತ್ತದೆ. ಪ್ರತಿ ವರ್ಷವೂ ಈ ದಿನದಂದು ಪ್ರಧಾನಿ ದೇಶದ ವಿವಿಧ ರಾಜ್ಯಗಳಿಗೆ ಭೇಟಿ ನೀಡಿ ಅಲ್ಲಿನ ಪಂಚಾಯತಿ ಸದಸ್ಯರೊಂದಿಗೆ ಮಾತುಕತೆ ನಡೆಸುತ್ತಾರೆ.