Thursday, October 2, 2025

ಹಿಮಾಚಲ ಪ್ರದೇಶಕ್ಕೆ ಪ್ರಧಾನಿ ಮೋದಿ ಭೇಟಿ: ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಿಮಾಚಲ ಪ್ರದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದು, ಪ್ರವಾಹ ಮತ್ತು ಭೂಕುಸಿತಗಳಿಂದ ಉಂಟಾದ ಹಾನಿಯನ್ನು ಪರಿಶೀಲಿಸಿದರು.

ಕಾಂಗ್ರಾ ಜಿಲ್ಲೆಯ ಗಗ್ಗಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮೋದಿಯನ್ನು ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಹಾಗೂ ಅಧಿಕಾರಿಗಳು ಬರಮಾಡಿಕೊಂಡರು.

ವಿಮಾನ ನಿಲ್ದಾಣದಲ್ಲಿ ಇಳಿಯುವ ಮೊದಲು ಪ್ರಧಾನಿ ಮೋದಿ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿ, ಮನೆಗಳು, ರಸ್ತೆಗಳು ಮತ್ತು ಮೂಲಸೌಕರ್ಯಗಳಿಗೆ ಆಗಿರುವ ವ್ಯಾಪಕ ಹಾನಿಯನ್ನು ಅವಲೋಕಿಸಿದರು. ಬಳಿಕ ಪ್ರವಾಹದಿಂದ ಹಾನಿಗೊಳಗಾದ ನಿವಾಸಿಗಳೊಂದಿಗೆ ಸಂವಹನ ನಡೆಸಿ ಅವರ ಸಮಸ್ಯೆಗಳನ್ನು ಆಲಿಸಿದರು.

https://x.com/narendramodi/status/1965347533905166386

ತಮ್ಮ ಭೇಟಿಯ ಸಮಯದಲ್ಲಿ ಮೋದಿ ರಾಜ್ಯಾದ್ಯಂತ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಸಿಬ್ಬಂದಿಯನ್ನು ಭೇಟಿಯಾದರು.

ಹಿಮಾಚಲ ಪ್ರದೇಶ ಭೇಟಿಗೂ ಮುನ್ನ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮೋದಿ ಪೋಸ್ಟ್ ಮಾಡಿದ್ದು, ಈ ಸಂಕಷ್ಟದ ಸಮಯದಲ್ಲಿ ಪ್ರವಾಹ ಪೀಡಿತರೊಂದಿಗೆ ಕೇಂದ್ರ ಸರ್ಕಾರ ಹೆಗಲು ಕೊಟ್ಟು ನಿಲ್ಲಲಿದೆ ಎಂದು ತಿಳಿಸಿದ್ದರು. ಪ್ರಧಾನಿ ಮೋದಿ ಅವರು ಎರಡೂ ರಾಜ್ಯಗಳ ಅಧಿಕಾರಿಗಳೊಂದಿಗೆ ಈಗಾಗಲೇ ಉನ್ನತ ಮಟ್ಟದ ಚರ್ಚೆ ನಡೆಸಿದ್ದು, ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ.

https://x.com/narendramodi/status/1965350212496699577

ಮೇಘಸ್ಫೋಟ, ದಿಢೀರ್ ಪ್ರವಾಹ ಮತ್ತು ಭೂಕುಸಿತಗಳಿಂದಾಗಿ ಹಿಮಾಚಲ ಪ್ರದೇಶವು 4,122 ಕೋಟಿ ರೂ.ಗಳಷ್ಟು ನಷ್ಟವನ್ನು ಅನುಭವಿಸಿದೆ. ರಾಜ್ಯದಲ್ಲಿ ಮಳೆ ಸಂಬಂಧಿತ ಘಟನೆಗಳು ಮತ್ತು ರಸ್ತೆ ಅಪಘಾತಗಳಲ್ಲಿ 370 ಜನರು ಸಾವನ್ನಪ್ಪಿದ್ದಾರೆ ಎಂದು ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ ತಿಳಿಸಿದೆ.