ಪ್ರಧಾನಿ ಮೋದಿ ಮುಂದೆ ಕಾಂಗ್ರೆಸ್ಸಿನ ಗ್ಯಾರಂಟಿ ಯೋಜನೆಗಳೆಲ್ಲವೂ ಗೌಣ: ಯಡಿಯೂರಪ್ಪ

ಹೊಸದಿಗಂತ ವರದಿ,ದಾವಣಗೆರೆ :

ಪ್ರಧಾನಿ ನರೇಂದ್ರ ಮೋದಿಯವರ ಮುಂದೆ ಕಾಂಗ್ರೆಸ್ಸಿನ ಗ್ಯಾರಂಟಿ ಯೋಜನೆಗಳೆಲ್ಲವೂ ಗೌಣವಾಗಿದ್ದು, ರಾಜ್ಯದ ಎಲ್ಲಾ 28 ಲೋಕಸಭಾ ಕ್ಷೇತ್ರಗಳಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ನಗರದ ಜಿಎಂಐಟಿ ಅತಿಥಿಗೃಹದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಗೆಲುವಿಗೆ ಕಾಂಗ್ರೆಸ್ ಪಂಚ ಗ್ಯಾರಂಟಿಗಳನ್ನೇ ನಂಬಿಕೊಂಡಿದೆ. ಆದರೆ ಮೋದಿ ಅಲೆಯ ಮುಂದೆ ಇದ್ಯಾವುದೂ ನಡೆಯುವುದಿಲ್ಲ. ಗ್ಯಾರಂಟಿಗಳು ಬಿಜೆಪಿ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ದೇಶದಲ್ಲಿ ನರೇಂದ್ರ ಮೋದಿಯವರು ಮಾಡಿರುವ ಕೆಲಸ-ಕಾರ್ಯಗಳನ್ನು ಜನರು ಮೆಚ್ಚಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ಸಿನ ಗ್ಯಾರಂಟಿಗಳಿಗೆ ಜನ ಮನ್ನಣೆ ನೀಡುವುದಿಲ್ಲ ಎಂದರು.

ಪ್ರಧಾನಿ ನರೇಂದ್ರ ಮೋದಿ ಮತ್ತು ಹೆಚ್.ಡಿ.ದೇವೇಗೌಡರ ನಿರ್ಧಾರದಂತೆ ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಗೊಳಪಟ್ಟು ಲೋಕಸಭಾ ಚುನಾವಣೆಯನ್ನು ಎದುರಿಸುತ್ತಿದ್ದೇವೆ. ದೇವೇಗೌಡರ ಅನುಭವ, ಬಿಜೆಪಿಯ ಮೋದಿ ಅಲೆಯಿಂದ ಎಲ್ಲಾ ಕ್ಷೇತ್ರಗಳಲ್ಲೂ ಗೆಲ್ಲುತ್ತೇವೆ. ಮೈತ್ರಿಯಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳಿಗೆ ಅವಕಾಶ ನೀಡದೆ, ಲೋಕಸಭಾ ಚುನಾವಣೆ ಸೇರಿದಂತೆ ಮುಂಬರುವ ಸ್ಥಳೀಯ ಚುನಾವಣೆಗಳನ್ನು ಒಟ್ಟಾಗಿ ಎದುರಿಸುತ್ತೇವೆ ಎಂದು ಅವರು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ರಾಜನಾಥ್ ಸಿಂಗ್ ನೇತೃತ್ವದಲ್ಲಿ ಮುಂದಿನ ಐದು ವರ್ಷಗಳಲ್ಲಿ ಕೈಗೊಳ್ಳಬೇಕಾದ ಅಭಿವೃದ್ಧಿ ಕಾರ್ಯಕ್ರಮ, ಯೋಜನೆಗಳನ್ನು ಈಗಾಗಲೇ ರೂಪಿಸಲಾಗಿದೆ. ನರೇಂದ್ರ ಮೋದಿಯವರು ಮೂರನೇ ಬಾರಿ ಪ್ರಧಾನಿ ಆಗುತ್ತಾರೆ. ಈ ಬಾರಿ ಲೋಕಸಭೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ. ದಿನನಿತ್ಯ ಪ್ರಧಾನಿ ನರೇಂದ್ರ ಮೋದಿಯವರ ಜನಪರ ಆಡಳಿತದ ವಿರುದ್ಧ ಟೀಕೆ ಮಾಡುತ್ತಿರುವ ಕಾಂಗ್ರೆಸ್ಸಿಗರು ಮೊದಲು ತಮ್ಮ ಐ.ಎನ್.ಡಿ.ಐ ಒಕ್ಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂಬುದನ್ನು ಘೋಷಣೆ ಮಾಡಲಿ ಎಂದು ಅವರು ಸವಾಲು ಹಾಕಿದರು.

ಕಾಂಗ್ರೆಸ್ ಪಕ್ಷವು ಮೊದಲಿನಿಂದಲೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿರೋಧಿ ಧೋರಣೆ ಅನುಸರಿಸುತ್ತಿದೆ. ನೆಹರೂ ಕುಟುಂಬದವರೆಲ್ಲರಿಗೂ ಭಾರತರತ್ನ ಕೊಡಲಾಗಿದೆ. ಆದರೆ ಸಂವಿಧಾನಶಿಲ್ಪಿ ಅಂಬೇಡ್ಕರ್ ಅವರಿಗೆ ಭಾರತರತ್ನ ಕೊಡಲಿಲ್ಲ. ದೆಹಲಿಯಲ್ಲಿ ಜವಾಹರಲಾಲ್ ನೆಹರೂ, ಇಂದಿರಾ ಗಾಂಧಿ, ರಾಜೀವ್ ಗಾಂಧಿ ಸಮಾಧಿಗೆ ಹತ್ತಾರು ಎಕರೆ ಜಾಗ ಕೊಟ್ಟರೂ, ಅಂಬೇಡ್ಕರ್ ಅಂತ್ಯಸಂಸ್ಕಾರಕ್ಕೆ ದೇಶದ ರಾಜಧಾನಿ ದೆಹಲಿಯಲ್ಲಿ 6*3 ಅಡಿ ಜಾಗ ಕೊಡಲಿಲ್ಲ. ಹೀಗಾಗಿ ಮುಂಬೈನ ದಾದರ್ ನಲ್ಲಿ ಅಂಬೇಡ್ಕರ್ ಅಂತ್ಯ ಸಂಸ್ಕಾರ ಮಾಡಬೇಕಾಯಿತು ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಂಬೇಡ್ಕರ್ ಊರು, ಮನೆ, ನಾಗಪುರದಲ್ಲಿ ಬೌದ್ಧ ಧರ್ಮ ಸ್ವೀಕರಿಸಿದ ದೀಕ್ಷಾಭೂಮಿ, ಲಂಡನ್ ನಲ್ಲಿ ಶಿಕ್ಷಣ ಪಡೆದ ಜಾಗ, ದೆಹಲಿಯಲ್ಲಿದ್ದ ಮನೆ ಹೀಗೆ ಅಂಬೇಡ್ಕರ್ ಗೆ ಸಂಬಂಧಿಸಿದ ಸ್ಥಳಗಳನ್ನು ತೀರ್ಥಕ್ಷೇತ್ರಗಳಾಗಿ ಅಭಿವೃದ್ಧಿ ಪಡಿಸಲಾಗಿದೆ. ಆದರೆ ಕಾಂಗ್ರೆಸ್ ಎರಡು ಚುನಾವಣೆಗಳಲ್ಲಿ ಅಂಬೇಡ್ಕರ್ ಅವರನ್ನು ಸೋಲಿಸಿ ಅಪಮಾನ ಮಾಡಿತು. ಇದೀಗ ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರವು ಎಸ್ಸಿ-ಎಸ್ಟಿ ಅಭಿವೃದ್ಧಿಗೆ ಮೀಸಲಿಟ್ಟಿದ್ದ 11 ಸಾವಿರ ಕೋಟಿ ರೂ. ಅನುಧಾನವನ್ನು ಬೇರೆ ಉದ್ದೇಶಕ್ಕೆ ಬಳಸಿಕೊಂಡು, ದಲಿತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಅವರು ವಾಗ್ದಾಳಿ ನಡೆಸಿದರು.

ಮಾಜಿ ಸಚಿವ ಮುರುಗೇಶ್ ನಿರಾಣಿ, ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್, ಸಂಸದ ಡಾ.ಜಿ.ಎಂ.ಸಿದ್ದೇಶ್ವರ, ಬಿಜೆಪಿ ಜಿಲ್ಲಾಧ್ಯಕ್ಷ ಎನ್.ರಾಜಶೇಖರ್, ಹರಿಹರ ಶಾಸಕ ಬಿ.ಪಿ.ಹರೀಶ್, ಹರಿಹರ ಮಾಜಿ ಶಾಸಕ ಹೆಚ್.ಎಸ್.ಶಿವಶಂಕರ್ ಮತ್ತಿತರರು ಹಾಜರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!