ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಆಫ್ರಿಕಾ ಪ್ರವಾಸದ ಬಳಿಕ ಇಂದು ಗ್ರೀಸ್ ದೇಶಕ್ಕೆ ಪ್ರಧಾನಿ ಮೋದಿ ಭೇಟಿ ನೀಡುತ್ತಿದ್ದಾರೆ. ಈ ಮೂಲಕ ನಲವತ್ತು ವರ್ಷಗಳ ನಂತರ ಗ್ರೀಸ್ ದೇಶಕ್ಕೆ ಭೇಟಿ ನೀಡುತ್ತಿರುವ ಭಾರತದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ.
1983ರ ಸೆಪ್ಟೆಂಬರ್ ನಲ್ಲಿ ಆಗಿನ ಪ್ರಧಾನಿ ಇಂದಿರಾ ಗಾಂಧಿ ಗ್ರೀಸ್ ಗೆ ಭೇಟಿ ನೀಡಿದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಥೆನ್ಸ್‌ಗೆ ಭೇಟಿ ನೀಡುತ್ತಿರುವುದು ಹೆಚ್ಚು ಮಹತ್ವದ್ದಾಗಿದೆ.
ಗ್ರೀಕ್ ಪ್ರಧಾನಿ ಕಿರಿಯಾಕೋಸ್ ಮಿತ್ಸೋಟಾಕಿಸ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಇಂದು ಗ್ರೀಸ್‌ಗೆ ಭೇಟಿ ನೀಡಿದ್ದಾರೆ. ಅವರ ಭೇಟಿಯ ವೇಳೆ ಅಲ್ಲಿನ ಪ್ರಧಾನಿ ಮಿತ್ಸೋಟಾಕಿಸ್ ಅವರನ್ನು ಭೇಟಿ ಮಾಡಲಿದ್ದು, ಉಭಯ ದೇಶಗಳ ನಡುವಿನ ಸಂಬಂಧಗಳನ್ನು ಮತ್ತಷ್ಟು ಗಟ್ಟಿಗೊಳಿಸುವ ಕುರಿತಾಗಿ ಮಹತ್ವದ ಮಾತುಕತೆ ನಡೆಸಲಿದ್ದಾರೆ. ಪ್ರಧಾನಮಂತ್ರಿ ಮೋದಿಯವರು ಎರಡೂ ದೇಶಗಳ ನಡುವಣ ವ್ಯಾಪಾರ ವಹಿವಾಟುಗಳ ಬಗ್ಗೆ ಚರ್ಚೆ ಕೈಗೊಳ್ಳಲಿದ್ದಾರೆ. ಅಷ್ಟೇ ಅಲ್ಲ ಗ್ರೀಸ್‌ನಲ್ಲಿರುವ ಭಾರತೀಯ ಸಮುದಾಯದೊಂದಿಗೆ ಪ್ರಧಾನಿ ಮೋದಿ ಸಂವಾದ ನಡೆಸಲಿದ್ದಾರೆ.
ಪ್ರಧಾನಿ ಮೋದಿಯವರನ್ನು ಸ್ವಾಗತಿಸಲು ಭರ್ಜರಿ ಸಿದ್ದತೆಯನ್ನು ಮಾಡಿಕೊಳ್ಳಲಾಗಿದ್ದು, ಅಲ್ಲಿನ ವಿದ್ಯಾರ್ಥಿಗಳು, ಬಾಲಿವುಡ್ ನೃತ್ಯ ಅಕಾಡೆಮಿಯಲ್ಲಿ ನೃತ್ಯಾಭ್ಯಾಸ ನಡೆಸಿದ್ದಾರೆ. ಭಾರತೀಯ ಡಯಾಸ್ಪರಾ ಕಾರ್ಯಕ್ರಮದಲ್ಲಿ ಪ್ರದರ್ಶನ ನೀಡಲು ಸಜ್ಜಾಗಿದ್ದಾರೆ.