ಹೊಸದಿಗಂತ ಡಿಜಿಟಲ್ ಡೆಸ್ಕ್:
ಹುಬ್ಬಳ್ಳಿಯಲ್ಲಿ ಬಿಜೆಪಿ ಮಹಿಳಾ ಕಾರ್ಯಕರ್ತೆ ಸುಜಾತಾ ಹಂಡಿ ಬಂಧನ ಪ್ರಕರಣ ದೇಶವ್ಯಾಪಿ ಚರ್ಚೆಗೆ ಗ್ರಾಸವಾದ ಬೆನ್ನಲ್ಲೇ ಪೊಲೀಸ್ ಇಲಾಖೆ ಕೊನೆಗೂ ಸ್ಪಷ್ಟ ಕ್ರಮಕ್ಕೆ ಮುಂದಾಗಿದೆ. ಸಾರ್ವಜನಿಕ ಆಕ್ರೋಶ, ರಾಜಕೀಯ ಒತ್ತಡ ಮತ್ತು ವಿರೋಧ ಪಕ್ಷಗಳ ಹೋರಾಟದ ನಡುವೆ ಹುಬ್ಬಳ್ಳಿ–ಧಾರವಾಡ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಪ್ರಕರಣದ ಗಂಭೀರತೆಯನ್ನು ಮನಗಂಡು ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿ ಕೇಶ್ವಾಪುರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಎಸ್.ಕೆ. ಹಟ್ಟಿಯವರನ್ನು ಠಾಣೆಯಿಂದ ತೆರವುಗೊಳಿಸಿ ಕಮಿಷನರ್ ಕಚೇರಿಗೆ ವರ್ಗಾವಣೆ ಮಾಡಲಾಗಿದೆ. ಜೊತೆಗೆ ಘಂಟಿಕೇರಿ ಠಾಣೆಯ ಇನ್ಸ್‌ಪೆಕ್ಟರ್ ಜಾದವ್ ಅವರಿಗೆ ಕೇಶ್ವಾಪುರ ಠಾಣೆಯ ಹೆಚ್ಚುವರಿ ಪ್ರಭಾರ ನೀಡಲಾಗಿದೆ.
ಇದನ್ನೂ ಓದಿ: Rice series 3 | ಆರೋಗ್ಯಕರ ಪಾಲಕ್ ರೈಸ್! ನೀವೂ ಒಮ್ಮೆ ಟ್ರೈ ಮಾಡಿ
ಪ್ರಕರಣದ ಸತ್ಯಾಸತ್ಯತೆ ಪರಿಶೀಲನೆಗಾಗಿ ವಿಶೇಷ ತನಿಖಾ ತಂಡ ರಚಿಸಲಾಗಿದ್ದು, ಸಿಇಎನ್ ವಿಭಾಗದ ಎಸಿಪಿ ಶಿವರಾಜ್ ಕಟಕಬಾವಿ ನೇತೃತ್ವದಲ್ಲಿ ತನಿಖೆ ಆರಂಭವಾಗಿದೆ. ಇತ್ತ ಕಾಂಗ್ರೆಸ್ ಪಾಲಿಕೆ ಸದಸ್ಯೆ ಸುವರ್ಣ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಅನಾರೋಗ್ಯ ಹಿನ್ನೆಲೆಯಲ್ಲಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

