ಹೊಸದಿಗಂತ ವರದಿ, ಅಂಕೋಲಾ:
ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ ಆರಂಭವಾಗುತ್ತಿದ್ದು ಉತ್ತರ ಕನ್ನಡ ಜಿಲ್ಲೆಯಲ್ಲಿ ಬೆಟ್ಟಿಂಗ್ ನಂತ ಕಾನೂನು ಬಾಹಿರ ಕೃತ್ಯಗಳಲ್ಲಿ ಯಾರೂ ತೊಡಗಿಕೊಳ್ಳಬಾರದು ಎಂದು ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವತಿಯಿಂದ ಪ್ರಕಟಣೆ ಹೊರಡಿಸಲಾಗಿದೆ.
ಬೆಟ್ಟಿಂಗ್ ನಡೆಯದಂತೆ ಜಿಲ್ಲೆಯ ಪ್ರತಿಯೊಂದು ತಾಲೂಕುಗಳಲ್ಲಿ ಪೊಲೀಸ್ ಇಲಾಖೆ ತೀವ್ರ ನಿಗಾ ವಹಿಸಿದ್ದು , ಯಾರೂ ಸಹ ಬೆಟ್ಟಿಂಗ್ ನಲ್ಲಿ ಭಾಗಿಯಾಗದಂತೆ ಕಟ್ಟು ನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠ ಎಂ ನಾರಾಯಣ ಅವರು ತಿಳಿಸಿದ್ದಾರೆ.
ಬೆಟ್ಟಿಂಗ್ ಭೂತದಿಂದ ಸಾಕಷ್ಟು ಜನರು ಎಲ್ಲವನ್ನೂ ಕಳೆದುಕೊಂಡು ಬೀದಿಗೆ ಬಂದಿದ್ದು ಸಂಸರಾವನ್ನು ಬೀದಿಗೆ ತರುವ ಕೆಲಸ ಮಾಡದಂತೆ ಜಿಲ್ಲಾ ಪೊಲೀಸ್ ವರಿಷ್ಠರು ಸೂಚಿಸಿದ್ದು ಬೆಟ್ಟಿಂಗ್ ಚಟುವಟಿಕೆಗಳ ಕುರಿತು ಮಾಹಿತಿ ಜಿಲ್ಲಾ ಪೊಲೀಸ್ ಕಚೇರಿಯ ಪಬ್ಲಿಕ್ ಐ ವಾಟ್ಸಪ್ ಸಂಖ್ಯೆ 8277988311 ಗೆ ಮಾಹಿತಿ ನೀಡುವಂತೆ ತಿಳಿಸಿದ್ದಾರೆ.
ಐ.ಪಿ.ಎಲ್ ಸಂದರ್ಭದಲ್ಲಿ ಬೆಟ್ಟಿಂಗ್ ನಲ್ಲಿ ತೊಡಗುವವರ ಮೇಲೆ ಪೊಲೀಸ್ ಇಲಾಖೆ ಹದ್ದಿನ ಕಣ್ಣು ಇರಿಸಿದ್ದು ಜಿಲ್ಲೆಯಲ್ಲಿ ಬೆಟ್ಟಿಂಗ್ ನಡೆಯುತ್ತಿರುವುದು ಗಮನಕ್ಕೆ ಬಂದರೆ ಕೃತ್ಯದಲ್ಲಿ ತೊಡಗಿದವರ ಮೇಲೆ ಕಾನೂನಿನಂತೆ ಕಠಿಣ ಕ್ರಮಗಳನ್ನು ಜರುಗಿಸಲಾಗುವುದು ಎಂದು ಎಸ್. ಪಿ.ನಾರಾಯಣ ಅವರು ಎಚ್ಚರಿಕೆ ನೀಡಿದ್ದಾರೆ.