ಹೊಸದಿಗಂತ ವರದಿ ರಾಮನಗರ:
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆರನೇ ಸಾಲಿನಲ್ಲಿ ಆಸನ ಕಲ್ಪಿಸಿರುವ ವಿಚಾರ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ. ಬಿಜೆಪಿ ಟೀಕೆಗೆ ಸಚಿವ ಹೆಚ್.ಸಿ. ಬಾಲಕೃಷ್ಣ ತಿರುಗೇಟು ನೀಡಿದರು.
ಬಿಡದಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ನಮ್ಮ ಪಕ್ಷದಲ್ಲಿ ಅತ್ಯಂತ ಹೆಚ್ಚು ಗೌರವ ಹೊಂದಿರುವ ವ್ಯಕ್ತಿ. ಅವರ ವರ್ಚಸ್ಸು ಎಂದಿಗೂ ಕಡಿಮೆಯಾಗುವುದಿಲ್ಲ. ಅವರು ರಾಜ್ಯದ ಸುದೀರ್ಘ ಅವಧಿಯ ಮುಖ್ಯಮಂತ್ರಿಯಾಗಿದ್ದು, ಕಾಂಗ್ರೆಸ್ ಪಕ್ಷಕ್ಕೆ ಭದ್ರ ಬುನಾದಿ ಹಾಕಿರುವ ನಾಯಕ ಎಂದು ತಿಳಿಸಿದರು.
ಇದು ರಾಷ್ಟ್ರಮಟ್ಟದ ಕಾರ್ಯಕ್ರಮವಾಗಿದ್ದು, ಅಲ್ಲಿ ಯಾವ ರೀತಿಯ ವ್ಯವಸ್ಥೆ ಮಾಡಲಾಗಿತ್ತು ಎಂಬುದು ತಮಗೆ ತಿಳಿದಿಲ್ಲ. ಕಾರ್ಯಕ್ರಮಕ್ಕೆ ಆಗಮಿಸಿದ್ದವರೆಲ್ಲರೂ ರಾಷ್ಟ್ರೀಯ ನಾಯಕರು. ಮೊದಲು ಬಂದು ಆಸನದಲ್ಲಿ ಕುಳಿತವರನ್ನು ಎದ್ದು ಬೇರೆಡೆ ಕೂರಿಸಲು ಸಾಧ್ಯವಿಲ್ಲ. ಕೆಲವೊಂದು ಕಾರ್ಯಕ್ರಮಗಳಲ್ಲಿ ಇಂತಹ ಸಣ್ಣಪುಟ್ಟ ವ್ಯತ್ಯಾಸಗಳು ಸಹಜ ಎಂದು ಸಮರ್ಥಿಸಿಕೊಂಡರು.
ಬಿಜೆಪಿಯವರಿಗೆ ಟೀಕೆ ಮಾಡುವುದೇ ಕೆಲಸ ಇಲ್ಲ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಯಾವ ಸ್ಥಾನಮಾನ ನೀಡಲಾಗಿತ್ತು ಎಂಬುದನ್ನು ಬಿಜೆಪಿ ನಾಯಕರು ಮೊದಲು ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ತಿರುಗೇಟು ನೀಡಿದರು.
ಇದೇ ವೇಳೆ, ಸಿದ್ದರಾಮಯ್ಯ ಅವರಿಗೆ ಹಿಂದೆ ಕೇಂದ್ರ ರಾಜಕಾರಣಕ್ಕೆ ಬರುವಂತೆ ಹಾಗೂ ರಾಜ್ಯಸಭೆಗೆ ಆಯ್ಕೆಯಾಗುವಂತೆ ಆಹ್ವಾನ ನೀಡಲಾಗಿತ್ತು. ಆದರೆ ಹಿಂದಿ ಭಾಷೆ ಬರುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದರು. ನಮ್ಮ ರಾಷ್ಟ್ರೀಯ ನಾಯಕರಿಗೆ ಅವರ ಮೇಲೆ ಅಪಾರ ಗೌರವವಿದೆ ಎಂದು ತಿಳಿಸಿದರು.
ಬೆಂಗಳೂರು ಕಸ ವಿಲೇವಾರಿಗೆ ಎಐ ಬಳಕೆ
ಬೆಂಗಳೂರಿನ ಕಸ ವಿಲೇವಾರಿ ವ್ಯವಸ್ಥೆಯಲ್ಲಿ ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನ ಬಳಸುವ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವರು, ಬೆಂಗಳೂರಿನಲ್ಲಿ ಕಸ ವಿಲೇವಾರಿ ದೊಡ್ಡ ಸವಾಲಿನ ಕೆಲಸವಾಗಿದೆ. ಈ ನಿಟ್ಟಿನಲ್ಲಿ ವಿಶೇಷ ರೀತಿಯ ಆಲೋಚನೆಗಳನ್ನು ಮಾಡುತ್ತಿದ್ದು, ಶೀಘ್ರದಲ್ಲೇ ಅಂತಿಮ ರೂಪ ನೀಡಲಾಗುವುದು ಎಂದು ತಿಳಿಸಿದರು.
ಇದನ್ನೂ ಓದಿ:
ಇನ್ನು ಗೌರವಧನ ಹೆಚ್ಚಳಕ್ಕೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನೆ ಕುರಿತು ಮಾತನಾಡಿದ ಅವರು, ಗೌರವಧನ ಹೆಚ್ಚಳಕ್ಕಾಗಿ ಹೋರಾಟ ಮಾಡುತ್ತಿರುವುದು ಅವರ ಹಕ್ಕು. ಇದರಲ್ಲಿ ತಪ್ಪೇನಿಲ್ಲ. ಈ ವಿಚಾರವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇವೆ. ಮುಂದಿನ ಕ್ರಮ ಏನಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ ಎಂದು ತಿಳಿಸಿದರು.



