Wednesday, August 10, 2022

Latest Posts

ಬೀದರ್| ಹಾಳಾಗಿರುವ ರಸ್ತೆ, ಸೇತುವೆ ಸರಿಪಡಿಸಲು ಅಧಿಕಾರಿಗಳಿಗೆ ಸೂಚನೆ: ಸಚಿವ ಪ್ರಭು ಚವ್ಹಾಣ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ಬೀದರ್:

ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಕೆಲವೆಡೆ ರಸ್ತೆ ಹಾಗೂ ಸೇತುವೆಗಳು ಹಾಳಾಗಿರುವ ಬಗ್ಗೆ ದೂರುಗಳು ಬರುತ್ತಿದ್ದು, ತಕ್ಷಣ ದುರಸ್ತಿಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಪಶು ಸಂಗೋಪನೆ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಚವ್ಹಾಣ್ ಅವರು ಲೋಕೋಪಯೋಗಿ ಇಲಾಖೆ, ಪಂಚಾಯತ್ ರಾಜ್, ಸಣ್ಣ ನೀರಾವರಿ, ಪಿಎಂಜಿಎಸ್‍ವೈ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಕೆಲವು ಕಡೆಗಳಲ್ಲಿ ರಸ್ತೆ ಮೇಲೆ ಮಳೆ ನೀರು ನಿಂತು ರಸ್ತೆಯೇ ಕಾಣದಂತ ಸ್ಥಿತಿಯಿದೆ. ರಸ್ತೆಗಳ ಮೇಲೆ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ರಸ್ತೆಗಳಲ್ಲಿ ಉರುಳಿ ಬಿದ್ದ ಮರಗಳನ್ನು ತೆರವುಗೊಳಿಸಿ, ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು. ಅಲ್ಲಲ್ಲಿ ಕಾಲುವೆಗಳು ಒಡೆದು ರೈತರ ಹೊಲಕ್ಕೆ ನೀರು ನುಗ್ಗುತ್ತಿರುವುದು ಗಮನಕ್ಕೆ ಬಂದಿದೆ.
ಲೋಕೋಪಯೋಗಿ ಇಲಾಖೆ, ಪಂಚಾಯತ್ ರಾಜ್, ಸಣ್ಣ ನೀರಾವರಿ, ಪಿಎಂಜಿಎಸ್‍ವೈ ಹಾಗೂ ಮತ್ತಿತರೆ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಹಾಗೂ ಜೂನಿಯರ್ ಇಂಜಿನೀಯರ್‍ಗಳು ಸ್ಥಳಕ್ಕೆ ಭೇಟಿ ನೀಡಿ ಕ್ಯಾನೆಲ್ ಮತ್ತು ಸೇತುವೆಗಳನ್ನು ಪರಿಶೀಲಿಸಬೇಕು. ಎಲ್ಲಿಯಾದರೂ ಸಮಸ್ಯೆ ಕಾಣಿಸಿದಲ್ಲಿ ತಕ್ಷಣ ಸರಿಪಡಿಸಬೇಕು. ಮುಂದಿನ ದಿನಗಳಲ್ಲಿ ಇನ್ನು ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ತಿಳಿಸಿರುವುದರಿಂದ ಅಧಿಕಾರಿಗಳು ಇನ್ನಷ್ಟು ಜವಾಬ್ದಾರಿಯುತವಾಗಿ ಕೆಲಸ ನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದ್ದಾರೆ.
ಗಾಳಿ-ಮಳೆಯಿಂದಾಗಿ ಕೆಲವೆಡೆ ವಿದ್ಯುತ್ ತಂತಿಗಳ ಮೇಲೆ ಗಿಡಗಳು ಉರುಳಿ, ವಿದ್ಯುತ್ ಸಂಪರ್ಕ ಕಡಿತಗೊಂಡಿರುವ ಬಗ್ಗೆ ಜನತೆ ದೂರು ನೀಡುತ್ತಿದ್ದಾರೆ, ಜೆಸ್ಕಾಂ ಅಧಿಕಾರಿಗಳು ಅಂತಹ ಕಡೆಗಳಿಗೆ ಭೇಟಿ ನೀಡಿ ವಿದ್ಯುತ್ ತಂತಿಗಳನ್ನು ಸರಿಪಡಿಸಬೇಕು. ಅನೇಕ ಗ್ರಾಮಗಳಲ್ಲಿ ವಿದ್ಯುತ್ ಟ್ರಾನ್ಸ್‍ಫಾರ್ಮರ್‍ಗಳು ಹಾಳಾಗಿವೆ. ತಕ್ಷಣ ಕೆಟ್ಟಿರುವ ಟ್ರಾನ್ಸ್‍ಫಾರ್ಮರ್‍ಗಳನ್ನು ದುರಸ್ತಿಗೊಳಿಸಿ ರೈತರಿಗೆ ವಿದ್ಯುತ್ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು ಜೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಅಧಿಕಾರಿಗಳು ಸರಿಯಾಗಿ ಕೆಲಸ ನಿರ್ವಹಿಸುತ್ತಿಲ್ಲ ಎನ್ನುವ ದೂರುಗಳು ಸಾರ್ವಜನಿಕರಿಂದ ಪದೇ ಪದೇ ಕೇಳಿಬರುತ್ತಿದ್ದು, ಎಲ್ಲ ಅಧಿಕಾರಿಗಳು ತಮ್ಮ ಜವಾಬ್ದಾರಿಗಳನ್ನು ಅರಿತು ಕೆಲಸ ಮಾಡಬೇಕು. ಇನ್ನು ಮುಂದೆ ಯಾವುದೇ ರೀತಿಯ ದೂರುಗಳು ಬಾರದಂತೆ ಎಚ್ಚರಿಕೆ ವಹಿಸಬೇಕು. ಕರ್ತವ್ಯ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss