ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೇ 31ರಂದು ಭಾರತಕ್ಕೆ ಆಗಮಿಸುವುದಾಗಿ ಸಂಸದ ಪ್ರಜ್ವಲ್ ರೇವಣ್ಣ ಹೇಳಿದ್ದು, ಹೀಗಾಗಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿಯೇ ಅವರನ್ನು ವಶಕ್ಕೆ ಪಡೆಯಲು ಎಸ್‌ಐಟಿ ಅಧಿಕಾರಿಗಳು ಸಿದ್ಧತೆ ನಡೆಸುತ್ತಿದ್ದಾರೆ. ಇತ್ತ ನಿರೀಕ್ಷಣಾ ಜಾಮೀನಿಗಾಗಿ ಪ್ರಜ್ವಲ್ ರೇವಣ್ಣ ಪರ ವಕೀಲರೊಬ್ಬರು ಅರ್ಜಿ ಸಲ್ಲಿಸಿದ್ದಾರೆ.
ಪ್ರಜ್ವಲ್ ರೇವಣ್ಣ ಅವರಿಗೆ ನಿರೀಕ್ಷಣಾ ಜಾಮೀನು ನೀಡಬೇಕು ಎಂಬುದಾಗಿ ವಕೀಲ ಅರುಣ್ ಅವರು ಬೆಂಗಳೂರಿನಲ್ಲಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಹಾಗಾಗಿ, ಪ್ರಕರಣದಲ್ಲಿ ಮತ್ತೊಂದು ಟ್ವಿಸ್ಟ್ ಸಿಕ್ಕಂತಾಗಿದೆ.
ಪ್ರಜ್ವಲ್ ರೇವಣ್ಣ ಭಾರತಕ್ಕೆ ಬರುತ್ತಲೇ ಅವರನ್ನು ಬಂಧಿಸಬಾರದು ಎಂಬ ದೃಷ್ಟಿಯಿಂದ ಅರುಣ್ ಅವರು ಪ್ರಜ್ವಲ್ ರೇವಣ್ಣ ಪರ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಈಗ ನ್ಯಾಯಾಲಯವು ಅರ್ಜಿಯ ಕುರಿತು ಯಾವ ತೀರ್ಪು ನೀಡುತ್ತದೆ ಎಂಬ ಕುತೂಹಲ ಮೂಡಿದೆ.
ಲುಫ್ತಾನ್ಸಾ ಏರ್‌ಲೈನ್ಸ್ ಮೂಲಕ ಫ್ಲೈಟ್ ಟಿಕೆಟ್ ಬುಕ್ ಮಾಡಿರುವ ಪ್ರಜ್ವಲ್ ರೇವಣ್ಣ, ಗುರುವಾರ ಮಧ್ಯಾಹ್ನ 12.05ಕ್ಕೆ ಮ್ಯೂನಿಚ್‌ನಲ್ಲಿ ಫ್ಲೈಟ್ ಹತ್ತಲಿದ್ದಾರೆ. ಮಧ್ಯರಾತ್ರಿ 12.30ಕ್ಕೆ ಬೆಂಗಳೂರು ಏರ್‌ಪೋರ್ಟ್‌ಗೆ ಆಗಮಿಸಲಿದ್ದಾರೆ. ಪ್ರಜ್ವಲ್ ರೇವಣ್ಣ ಅವರು ಆಗಮಿಸುತ್ತಲೇ ವಶಕ್ಕೆ ಪಡೆಯಲು ಎಸ್‌ಐಟಿ ಸಜ್ಜಾಗಿದ ಎಂದು ಈಗಾಗಲೇ ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.