ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಂಸದ ಸ್ಥಾನದಿಂದ ಅನರ್ಹಗೊಂಡ ಪ್ರಜ್ವಲ್ ರೇವಣ್ಣ ಹೈಕೋರ್ಟ್‌ನ ಅಸಿಂಧು ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದು, ಶುಕ್ರವಾರ ಅಥವಾ ಮುಂದಿನ ಸೋಮವಾರ ವಿಚಾರಣೆಗೆ ಬರುವ ಸಾಧ್ಯತೆಯಿದೆ.
ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಡೆದ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಅವರು ಕೇಂದ್ರ ಚುನಾವಣಾ ಆಯೋಗಕ್ಕೆ ಸುಳ್ಳು ಮಾಹಿತಿಗಳನ್ನು ನೀಡಿ ಸ್ಪರ್ಧೆ ಮಾಡಿದ್ದಾರೆ. ಅವರ ಸಂಸದ ಸ್ಥಾನವನ್ನು ಅಸಿಂಧುಗೊಳಿಸಿ ತಮ್ಮನ್ನು ಸಂಸದನಾಗಿ ಘೋಷಣೆ ಮಾಡಬೇಕು ಎಂದು ಬಿಜೆಪಿಯಿಂದ ಸ್ಪರ್ಧಿಸಿ ಪರಾಜಿತಗೊಂಡ ಅಭ್ಯರ್ಥಿ ಎ.ಮಂಜು ಹಾಗೂ ಬಿಜೆಪಿ ಮುಖಂಡ ದೇವರಾಜಗೌಡ ದೂರು ದಾಖಲಿಸಿದ್ದರು.
ಈ ದೂರನ್ನು ಆಧರಿಸಿ ಚುನಾವಣಾ ಆಯೋಗವು ವರದಿ ಸಲ್ಲಿಸಿದಿತ್ತು. ನ್ಯಾಯಾಲಯ ಮೆಟ್ಟಿಲೇರಿದ ಪ್ರಕರಣವು ಹೈಕೋರ್ಟ್‌ನಲ್ಲಿ ಹಲವು ವಿಚಾರಣೆಗಳು ನಡೆದಿದ್ದವು. ಸೆ.1ರಂದು ಪ್ರಜ್ವಲ್ ರೇವಣ್ಣ ಅವರು ಚುನಾವಣಾ ಆಯೋಗಕ್ಕೆ ಸುಳ್ಳು ದಾಖಲೆ ಕೊಟ್ಟಿದ್ದಾರೆಂಬ ಆರೋಪ ಸಾಬೀತಾಗಿದ್ದರಿಂದ ಅವರನ್ನು ಸಂಸದ ಸ್ಥಾನದಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿತ್ತು.
ಪ್ರಜ್ವಲ್ ರೇವಣ್ಣ ಈ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಲಿದ್ದೇವೆ. ಲವು ದಿನಗಳ ಕಾಲಾವಕಾಶ ಬೇಕೆಂದು ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಆದರೆ, ಈ ಅರ್ಜಿಯನ್ನು ಮಾನ್ಯ ಮಾಡದ ಹೈಕೋರ್ಟ್ ಅಸಿಂಧು ಆದೇಶಕ್ಕೆ ತಡೆಯನ್ನು ನೀಡದೇ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿತ್ತು.
ಇದೀಗ ಸುಪ್ರೀಂ ಕೋರ್ಟ್ ಕದ ತಟ್ಟಿದ್ದಾರೆ. ಅಸಿಂಧು ಆದೇಶಕ್ಕೆ ತಡೆ ನೀಡುವಂತೆ ಅರ್ಜಿ ಸಲ್ಲಿಕೆ ಮಾಡಿದ್ದು, ಶುಕ್ರವಾರ ಅಥವಾ ಸೋಮವಾರ ಪ್ರಕರಣ ವಿಚಾರಣೆ ಗೆ ಬರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.