ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ರಾಷ್ಟ್ರೀಯ ತನಿಖಾ ಸಂಸ್ಥೆಯ ಮೋಸ್ಟ್ ವಾಂಟೆಡ್ ಆರೋಪಿ ಉಮರ್ ಫಾರೂಕ್ ಎಂ. ಆರ್‌ರನ್ನು ಕೊಚ್ಚಿಯಲ್ಲಿ ಬಂಧಿಸಲಾಗಿದೆ.
ಎನ್‌ಐಎ ಅಧಿಕಾರಿಗಳು ಕೇರಳದ ಕೊಚ್ಚಿಯಲ್ಲಿ ಉಮರ್ ಫಾರೂಕ್‌ನನ್ನು ಬಂಧಿಸಿದ್ದು, ಈವರೆಗೂ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಆರೋಪಿಗಳ ಸಂಖ್ಯೆ 25ಕ್ಕೆ ಏರಿಕೆಯಾಗಿದೆ.
ನಾಲ್ಕು ಲಕ್ಷ ರೂಪಾಯಿ ಬಹುಮಾನ ಘೋಷಣೆ
ಉಮ್ಮರ್ ಫಾರೂಕ್ ವಿರುದ್ಧ ಈ ಹಿಂದೆ ರೆಡ್ ಕಾರ್ನರ್ ನೋಟಿಸ್ ಹಾಗೂ ಜಾಮೀನು ರಹಿತ ಬಂಧನ ವಾರಂಟ್ ಜಾರಿಯಾಗಿತ್ತು. ಅಲ್ಲದೆ, ಆತನ ಬಂಧನಕ್ಕೆ ರೂ.4 ಲಕ್ಷ ಬಹುಮಾನವನ್ನೂ ಘೋಷಿಸಲಾಗಿತ್ತು. ಎನ್‌ಐಎ ತನಿಖೆಯ ಪ್ರಕಾರ, ಉಮರ್ ಫಾರೂಕ್ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ಕಚೇರಿಯಲ್ಲಿ ನಡೆದಿದೆ ಎನ್ನಲಾದ ಸಂಚು ಸಭೆಯಲ್ಲಿ ಭಾಗಿಯಾಗಿದ್ದ ಆರೋಪ ಎದುರಿಸುತ್ತಿದ್ದಾನೆ.
ಪ್ರವೀಣ್ ಹತ್ಯೆ ಮಾಡಲು ಆರೋಪಿಗಳಿಗೆ ಬೇಕಿದ್ದ ಬೈಕ್ ಒದಗಿಸಿದ್ದು ಹಾಗೂ ಸಾಕ್ಷ್ಯವನ್ನು ನಾಶ ಮಾಡಲು ಯತ್ನಿಸಿದ್ದು ಫಾರೂಕ್ ಎಂದು ಆರೋಪಿಸಲಾಗಿದೆ. ತನಿಖೆಯ ಪ್ರಕಾರ, ಪಿಎಫ್‌ಐ ಸಂಘಟನೆಯ ಕೆಲವು ಸದಸ್ಯರು ಆತನಿಗೆ ಆಶ್ರಯ ಕಲ್ಪಿಸಿದ್ದು, ಸುಮಾರು ನಾಲ್ಕು ವರ್ಷಗಳ ಕಾಲ ಹೊರ ಜಗತ್ತಿನ ಸಂಪರ್ಕವಿಲ್ಲದಂತೆ ರಹಸ್ಯ ಸ್ಥಳದಲ್ಲಿ ಇರಿಸಲಾಗಿತ್ತು ಎನ್ನಲಾಗಿದೆ.
ಈ ಪ್ರಕರಣದಲ್ಲಿ ಇನ್ನೂ ಇಬ್ಬರು ಆರೋಪಿಗಳ ಬಂಧನವಾಗಬೇಕಿದೆ.
ಹಿನ್ನೆಲೆ ಏನು?
2022ರ ಜುಲೈ 26ರಂದು, ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು (32) ಅವರು ತಮ್ಮ ಅಂಗಡಿ ಮುಚ್ಚಿ ಮನೆಗೆ ತೆರಳುತ್ತಿದ್ದ ವೇಳೆ ಬೈಕ್‌ನಲ್ಲಿ ಬಂದಿದ್ದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ್ದರು. ಈ ಘಟನೆ ರಾಜ್ಯಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು.



