ಹೊಸದಿಗಂತ ಡಿಜಿಟಲ್ ಡೆಸ್ಕ್:
ಜನವರಿ 28 ರಿಂದ ಆರಂಭವಾಗಲಿರುವ ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಕರ್ನಾಟಕದ ಪ್ರಮುಖ ಬೇಡಿಕೆಗಳನ್ನು ಪ್ರಸ್ತಾಪಿಸುವ ಕುರಿತು ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸುದೀರ್ಘ ಚರ್ಚೆ ನಡೆಸಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಸಚಿವ ಶರಣು ಪ್ರಕಾಶ್ ಪಾಟೀಲ್ ಮಾಹಿತಿ ನೀಡಿದ್ದಾರೆ.
ಮೈಸೂರು ವಿಮಾನ ನಿಲ್ದಾಣದಲ್ಲಿ ನಡೆದ ಈ ಅನಿರೀಕ್ಷಿತ ಭೇಟಿಯು ಕೇವಲ ಸೌಜನ್ಯಯುತವಾಗಿರದೆ, ರಾಜ್ಯದ ಹಿತದೃಷ್ಟಿಯಿಂದ ಮಹತ್ವ ಪಡೆದುಕೊಂಡಿದೆ. ಚರ್ಚೆಯಲ್ಲಿ ಮುಖ್ಯವಾಗಿ ಈ ಕೆಳಗಿನ ವಿಷಯಗಳು ಮುನ್ನೆಲೆಗೆ ಬಂದಿವೆ:
ಮನರೇಗಾ ಯೋಜನೆಗೆ ಬಾಕಿ ಇರುವ ಅನುದಾನ ಮತ್ತು ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕಾಗುತ್ತಿರುವ ಅನ್ಯಾಯ.
ರಾಜ್ಯಕ್ಕೆ ಬಹುಕಾಲದಿಂದ ಬಾಕಿ ಇರುವ ‘ಏಮ್ಸ್’ ಮಂಜೂರಾತಿ.
ಉತ್ತರ ಕರ್ನಾಟಕದ ಜೀವನದಿ ಎನಿಸಿರುವ ಯುಕೆಪಿ (ಮೇಲ್ದಂಡೆ ಕೃಷ್ಣಾ ಯೋಜನೆ) ಗೆ ಸಂಬಂಧಿಸಿದ ಪ್ರಮುಖ ವಿಚಾರಗಳು.
ಈ ಭೇಟಿಯ ವೇಳೆ ರಾಜ್ಯ ರಾಜಕಾರಣದ ‘ಪವರ್ ಶೇರಿಂಗ್’ ಕುರಿತು ಮಾತುಕತೆ ನಡೆದಿದೆ ಎಂಬ ವದಂತಿಗಳು ಹರಡಿದ್ದವು. ಆದರೆ ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, “ರಾಜ್ಯದ ಅಭಿವೃದ್ಧಿ ವಿಚಾರವಾಗಿ ರಾಹುಲ್ ಗಾಂಧಿ ಅವರೊಂದಿಗೆ ಚರ್ಚಿಸಲಾಗಿದೆ ಅಷ್ಟೆ. ಅಲ್ಲಿ ಯಾವುದೇ ರಾಜಕೀಯ ಚರ್ಚೆ ನಡೆದಿರುವ ಬಗ್ಗೆ ನನಗೆ ಮಾಹಿತಿಯಿಲ್ಲ” ಎಂದು ಸ್ಪಷ್ಟಪಡಿಸಿದರು.


