ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಮಧ್ಯಪ್ರದೇಶಕ್ಕೆ ಭೇಟಿ ನೀಡಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ರಾಷ್ಟ್ರಪತಿಗಳ ಭೇಟಿಯ ವೇಳೆ ಮೊದಲು ಮಹಾರಾಜ ಸರ್ ಜೀವಾಜಿರಾವ್ ಸಿಂಧಿಯಾ ಮ್ಯೂಸಿಯಂ, ಜೈ ವಿಲಾಸ್ ಅರಮನೆಗೆ ಭೇಟಿ ನೀಡಲಿದ್ದಾರೆ. ದರ್ಬಾರ್ ಹಾಲ್ ಸೇರಿದಂತೆ ವಸ್ತುಸಂಗ್ರಹಾಲಯದ ವಿವಿಧ ಗ್ಯಾಲರಿಗಳು ಮತ್ತು ಪ್ರದರ್ಶನಗಳಿಗೆ ರಾಷ್ಟ್ರಪತಿಗಳು ಭೇಟಿ ನೀಡಲಿದ್ದಾರೆ.
ಮಧ್ಯಾಹ್ನ 2.45ರ ಸುಮಾರಿಗೆ ಅಟಲ್ ಬಿಹಾರಿ ವಾಜಪೇಯಿ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಇನ್‌ಫರ್ಮೇಷನ್ ಟೆಕ್ನಾಲಜಿ ಅಂಡ್ ಮ್ಯಾನೇಜ್‌ಮೆಂಟ್‌ನ ನಾಲ್ಕನೇ ಘಟಿಕೋತ್ಸವ ಸಮಾರಂಭದಲ್ಲಿ ರಾಷ್ಟ್ರಪತಿಗಳು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಘಟಿಕೋತ್ಸವ ಸಮಾರಂಭದಲ್ಲಿ ರಾಷ್ಟ್ರಪತಿಗಳು ಅಣುಶಕ್ತಿ ಆಯೋಗದ ಮಾಜಿ ಅಧ್ಯಕ್ಷ ಪದ್ಮವಿಭೂಷಣ ಡಾ.ಅನಿಲ್ ಕಾಕೋಡ್ಕರ್ ಅವರಿಗೆ ಡಾಕ್ಟರ್ ಆಫ್ ಸೈನ್ಸ್ ಗೌರವ ಪದವಿಯನ್ನು ಪ್ರದಾನ ಮಾಡಲಿದ್ದಾರೆ. ಇದಲ್ಲದೇ ಏಳು ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಹಾಗೂ 283 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುವುದು.
ಕೇಂದ್ರ ಸಚಿವರಾದ ನರೇಂದ್ರ ಸಿಂಗ್ ತೋಮರ್ ಮತ್ತು ಜ್ಯೋತಿರಾದಿತ್ಯ ಸಿಂಧಿಯಾ ಹಾಗೂ ಮಧ್ಯಪ್ರದೇಶದ ರಾಜ್ಯಪಾಲ ಮಂಗುಭಾಯ್ ಪಟೇಲ್ ಮತ್ತು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.