ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 18ನೇ ವಾರ್ಷಿಕ ಘಟಿಕೋತ್ಸವದಲ್ಲಿ ದೇಶದ ಪ್ರಥಮ ಪ್ರಜೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಮೂವರಿಗೆ ಗೌರವ ಡಾಕ್ಟರೇಟ್ ನೀಡಲಾಗುವುದು ಎಂದು ಕುಲಪತಿ ಪ್ರೊ.ಶರಣಪ್ಪ ಹಲಸೆ ತಿಳಿಸಿದರು.
ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,”ದೇಶದ ಪ್ರಥಮ ಪ್ರಜೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಎನ್. ರಾಮಚಂದ್ರಯ್ಯ, ಶ್ರೀ ವೆಂಕಟಲಕ್ಷ್ಮೀ ನರಸಿಂಹರಾಜು ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗುತ್ತಿದೆ” ಎಂದರು.
ವಿವಿಯ 18ನೇ ವಾರ್ಷಿಕ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಡಾಕ್ಟರೇಟ್ ಪ್ರಧಾನ ಮಾಡಲಾಗುತ್ತದೆ. 1 ಪಿಎಚ್ಡಿ, 44 ಚಿನ್ನದ ಪದಕ ಮತ್ತು 27 ನಗದು ಬಹುಮಾನ ವಿತರಣೆ ಮಾಡಲಾಗುತ್ತದೆ. ರಾಜ್ಯಪಾಲ ಥಾವರ ಚಂದ್ ಗೆಹಲೊಟ್ ರಿಂದ ಪ್ರಧಾನ ನಡೆಯಲಿದೆ ಎಂದು ಅವರು ತಿಳಿಸಿದರು.
ಒಟ್ಟು 8,722 ಅಭ್ಯರ್ಥಿಗಳು ವಿವಿಧ ಪದವಿ ಪಡೆಯಲು ಅರ್ಹರಾಗಿದ್ದಾರೆ. ಇವರಲ್ಲಿ 5,241 ಮಹಿಳೆಯರು ಹಾಗೂ 3,481 ಪುರುಷರಿದ್ದಾರೆ ಎಂದು ಕುಲಪತಿ ಪ್ರೊ.ಶರಣಪ್ಪ ಹಲಸೆ ಮಾಹಿತಿ ನೀಡಿದರು.