Friday, July 1, 2022

Latest Posts

ಪ್ರಾಥಮಿಕ ಆರೋಗ್ಯ ಚಿಕಿತ್ಸಾ ಕೇಂದ್ರಗಳ ಮೇಲ್ದರ್ಜೆಗೇರಿಸಲು ಕ್ರಮ: ಸಚಿವ ಡಾ.ಕೆ.ಸುಧಾಕರ್

ಹೊಸ ದಿಗಂತ ವರದಿ, ಚಿತ್ರದುರ್ಗ:

ರಾಜ್ಯದ 250 ಪ್ರಾಥಮಿಕ ಆರೋಗ್ಯ ಚಿಕಿತ್ಸಾ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಕ್ರಮಕೈಗೊಳ್ಳಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಆಡಳಿತ ವೈದ್ಯಾಧಿಕಾರಿಗಳು ಸಾರ್ವಜನಿಕ ಆಸ್ಪತ್ರೆ ಹಿರಿಯೂರು ಇವರುಗಳ ಸಂಯುಕ್ತಾಶ್ರಯಲ್ಲಿ ಹಿರಿಯೂರು ತಾಲ್ಲೂಕಿನ ಆದಿವಾಲ ಗ್ರಾಮದಲ್ಲಿ ಬುಧವಾರ ರಾಷ್ಟ್ರೀಯ ಆರೋಗ್ಯ ಮಿಷನ್ ಅಡಿಯಲ್ಲಿ 25 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ 100 ಹಾಸಿಗೆ ಸಾಮರ್ಥ್ಯದ ಹಿರಿಯೂರು ಸಾರ್ವಜನಿಕ ಆಸ್ಪತ್ರೆಯ ನೂತನ ಕಟ್ಟಡ ನಿರ್ಮಾಣದ ಶಂಕುಸ್ಥಾಪನೆ ಸಾಮಾರಂಭ ನೆರವೇರಿಸಿ ಅವರು ಮಾತನಾಡಿದರು.
ಕನಿಷ್ಟ 40 ಸಾವಿರ ಜನಸಂಖ್ಯೆಗೆ ಒಂದು ಪ್ರಾಥಮಿಕ ಆರೋಗ್ಯ ಕೇಂದ್ರ ಕಾರ್ಯ ನಿರ್ವಹಿಸುತ್ತಿದ್ದು, ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಿ ಎರಡು ಅಥವಾ ಮೂವರು ವೈದ್ಯರನ್ನು ನಿಯೋಜನೆ ಮಾಡಲಾಗುವುದು ಎಂದು ಹೇಳಿದರು.
ಚಿತ್ರದುರ್ಗದಲ್ಲಿ 81 ವೈದ್ಯರಿದ್ದು, ಅದರಲ್ಲಿ 78 ವೈದ್ಯರು ಕಾರ್ಯನಿರ್ವಹಿಸುತ್ತಿದ್ದು, 3 ವೈದ್ಯರ ಹುದ್ದೆಗಳು ಖಾಲಿಯಿವೆ. 94 ತಜ್ಞ ವೈದ್ಯರಿದ್ದು, 69 ಮಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಇನ್ನು 25 ಹುದ್ದೆಗಳು ಖಾಲಿಯಿವೆ. 16 ದಂತ ವೈದ್ಯರ ಪೈಕಿ 15 ಮಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ವೈದ್ಯಕೀಯ ಸಿಬ್ಬಂದಿಯನ್ನು ನೇಮಿಸಲಾಗುವುದು ಎಂದರು.
ಪಾಶ್ಚಿಮಾತ್ಯ ದೇಶಗಳಲ್ಲಿ ಸಾಂಕ್ರಾಮಿಕ ರೋಗಕ್ಕೆ ಸಾವು-ನೋವು ಹಾಗೂ ಔಷಧಿ ಸಮಸ್ಯೆ ಎದುರಾಗಿದೆ. ನಮ್ಮ ದೇಶ 135 ಕೋಟಿ ಜನಸಂಖ್ಯೆ ಹೊಂದಿದ್ದರೂ ಎಲ್ಲರಿಗೂ ಲಸಿಕೆ ನೀಡಿಕೆಯಲ್ಲಿ ಪ್ರಪಂಚಸದಲ್ಲಿಯೇ ಮುಂದಿದ್ದು ಕೋವಿಡ್ ನಿಯಂತ್ರಣದಲ್ಲಿ ಯಶಸ್ಸನ್ನು ಸಾಧಿಸಲಾಗಿದೆ. ದೇಶ ಸ್ವಂತ ಲಸಿಕೆಯನ್ನು ಕಂಡು ಹಿಡಿದು ಬೇರೆ ದೇಶಕ್ಕೂ ಕೂಡ ಲಸಿಕೆಯನ್ನು ನೀಡಿದ್ದೇವೆ ಎಂದು ಹೇಳಿದರು.
ಕೋವಿಡ್‌ನಿಂದ ರಕ್ಷಣೆ ಪಡೆಯಲು ಲಸಿಕೆ ಬಹಳ ಮುಖ್ಯವಾಗಿದೆ. 60 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಮೂರನೇ (ಬೂಸ್ಟರ್) ಲಸಿಕೆಯನ್ನು ಕಡ್ಡಾಯವಾಗಿ ತೆಗೆದುಕೊಳ್ಳಬೇಕು. ಓಮಿಕ್ರಾನ್ ತೀವ್ರವಾಗಿ ಹರಡುತ್ತಿದೆ ಆದರೆ ಅದರ ತೀವ್ರತೆ ಮಾತ್ರ ಕಡಿಮೆ ಇದೆ, ಆಗಂತ ನಾವು ಮೈಮರೆಯುವಂತಿಲ್ಲ. ಕೋವಿಡ್ ನಿಯಂತ್ರಣಕ್ಕೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಕೋವಿಡ್ ನಿಯಮಗಳನ್ನು ಪಾಲಿಸಿದರೆ ಮಾತ್ರ ಕೋವಿಡ್‌ನಿಂದ ಸುರಕ್ಷಿತವಾಗಿರಬಹುದು ಎಂದು ಸಲಹೆ ನೀಡಿದರು.
ಕೇಂದ್ರ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಮಾತನಾಡಿ, ಹಿರಿಯೂರಿನಲ್ಲಿ ೧೦೦ ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಗೆ ಬೇಡಿಕೆಯಿಟ್ಟಾಗ ನಮ್ಮ ಸರ್ಕಾರ ವಿಶೇಷವಾಗಿ ಈ ಕಟ್ಟಡ ನಿರ್ಮಾಣಕ್ಕೆ ರೂ. ೨೫ ಕೋಟಿ ಅನುದಾನ ನೀಡಿ ಮಂಜೂರಾತಿ ನೀಡಿದೆ ಎಂದರು.
ಕೋವಿಡ್ ಮೂರನೇ ಅಲೆಯು ಫೆಬ್ರವರಿ ಮಾಹೆಯಲ್ಲಿ ಹೆಚ್ಚಳವಾಗುವ ಸಾಧ್ಯತೆ ಇರುವುದರಿಂದ ಈಗಾಗಲೇ ಜಿಲ್ಲೆಯ ಆರು ತಾಲ್ಲೂಕುಗಳಲ್ಲಿ ಆಕ್ಸಿಜನ್ ಪ್ಲಾಂಟ್‌ಗಳನ್ನು ಪ್ರಾರಂಭ ಮಾಡಲಾಗಿದೆ. ಆಕ್ಸಿಜನ್ ಯಾವುದೇ ಕೊರತೆಯಾಗದಂತೆ ಕ್ರಮಕೈಗೊಳ್ಳಲಾಗಿದೆ. ಸಮಾಜದ ನಾಗರಿಕರ ಆರೋಗ್ಯ ರಕ್ಷಣೆ ಮಾಡುವುದು ಜನಪ್ರತಿನಿಧಿಗಳ ಜವಾಬ್ದಾರಿಯಾಗಿದೆ ಎಂದರು.
ಸಾರಿಗೆ ಮತ್ತು ಪರಿಶಿಷ್ಠ ಪಂಗಡ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಮಾತನಾಡಿ, ಕೋವಿಡ್-19ರ ಮೊದಲ ಮತ್ತು ಎರಡನೇ ಅಲೆಯ ಅನುಭವ ಪಡೆದ ಅಧಿಕಾರಿಗಳು ಮೂರನೇ ಅಲೆಗೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಅರ್ಹರಿಗೆ ಲಸಿಕೆ ನೀಡುವಲ್ಲಿ ಆಶಾ ಕಾರ್ಯಕರ್ತೆಯರು, ವೈದ್ಯರು ಮತ್ತು ಸಿಬ್ಬಂದಿ ವರ್ಗದವರು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಲಸಿಕೆ ನೀಡುವಲ್ಲಿ ಕೆಲಸ ಮಾಡಿದ್ದಾರೆ ಎಂದು ಹೇಳಿದರು.
ಭದ್ರಾ ಮೇಲ್ದಂಡೆ ಯೋಜನೆಯಿಂದ ವಾಣಿವಿಲಾಸ ಸಾಗರಕ್ಕೆ ನೀರನ್ನು ತರಲಾಗಿದ್ದು, ವಾಣಿವಿಲಾಸ ಸಾಗರದಲ್ಲಿ ಇಂದು ೧೨೫ ಅಡಿ ನೀರು ಸಂಗ್ರಹವಿದೆ. ಇದರಿಂದ ಈ ಭಾಗದ ಬರಪೀಡಿತ ರೈತರ ಜಮೀನುಗಳಿಗೆ ನೀರನ್ನು ನೀಡಲಾಗಿದೆ. ಸುಮಾರು 1.50 ಲಕ್ಷ ಬೋರ್‌ವೆಲ್‌ಗಳು ರಿಚಾರ್ಜ್ ಆಗಿದ್ದು, ಸುಮಾರು 50,000 ಹೆಕ್ಟೇರ್ ಭೂ ಪ್ರದೇಶಕ್ಕೆ ನೀರಾವರಿ ಸೌಲಭ್ಯವನ್ನು ನೀಡಲಾಗಿದೆ ಎಂದರು.
ಮೂರನೇ ಅಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಆ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಬೇಕಾಗಿರುವಂತಹ ಹಾಸಿಗೆ, ಆಕ್ಸಿಜನ್ ಘಟಕ, ವೈದ್ಯರು, ನರ್ಸ್, ಔಷಧಿಗಳು, ಆಸ್ಪತ್ರೆಗಳು ಎಲ್ಲವನ್ನೂ ಸಹ ಬಲಪಡಿಸಲಾಗಿದೆ ಎಂದು ಹೇಳಿದರು. ಪ್ರಧಾನಿ ಮೋದಿ ಅವರು ದೇಶದ ಎಲ್ಲರಿಗೂ ಉತ್ತಮ ಆರೋಗ್ಯ ಸಿಗಬೇಕು ಎಂಬ ದೃಷ್ಠಿಯಿಂದ ಆಯುಷ್ಮಾನ್ ಭಾರತ್ ಅಡಿಯಲ್ಲಿ ಎಲ್ಲರಿಗೂ ಉಚಿತ ಆರೋಗ್ಯ ಸೇವೆಯನ್ನು ನೀಡಲಾಗುತ್ತಿದೆ ಎಂದರು.
ಹಿರಿಯೂರು ಶಾಸಕರಾದ ಪೂರ್ಣಿಮಾ ಕೆ.ಶ್ರೀನಿವಾಸ್ ಮಾತನಾಡಿ, ಹಿರಿಯೂರು ಕ್ಷೇತ್ರದಲ್ಲಿ ನೀರಾವರಿ, ಆರೋಗ್ಯ ಮತ್ತು ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡಿ ಕಾರ್ಯನಿರ್ವಹಿಸಲಾಗುತ್ತಿದೆ ಎಂದರು. ಇದೇ ಸಂದರ್ಭದಲ್ಲಿ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಮುನ್ನೆಚ್ಛರಿಕಾ ಕೋವಿಡ್-19ರ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ಹಿರಿಯೂರು ನಗರಸಭೆ ಅಧ್ಯಕ್ಷ ಶಂಶುನ್ನಿಸಾ, ಉಪಾಧ್ಯಕ್ಷ ಬಿ.ಎನ್.ಪ್ರಕಾಶ್, ಆದಿವಾಲ ಗ್ರಾ.ಪಂ. ಅಧ್ಯಕ್ಷ ಎನ್.ರಘುನಾಯ್ಕ್, ಉಪಾಧ್ಯಕ್ಷ ಎನ್.ಆರ್.ರಂಗನಾಥ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ನಿರ್ದೇಶಕ ಶ್ರೀನಿವಾಸ್, ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಹೆಚ್.ಜೆ.ಬಸವರಾಜಪ್ಪ, ಮುಖಂಡರಾದ ಡಿ.ಟಿ.ಶ್ರೀನಿವಾಸ್ ಸೇರಿದಂತೆ ಮತ್ತಿತರರು ಹಾಜರಿದ್ದರು. ಡಿಹೆಚ್‌ಒ ಡಾ.ಆರ್.ರಂಗನಾಥ್ ಸ್ವಾಗತಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss