ಹೆಚ್‍ಎಎಲ್ ಘಟಕಕ್ಕೆ ಪ್ರಧಾನಿ ಮೋದಿ ಭೇಟಿ: ಜಿಲ್ಲಾಧಿಕಾರಿಗಳಿಂದ ಸ್ಥಳ ಪರಿಶೀಲನೆ!

ಹೊಸದಿಗಂತ ವರದಿ,ತುಮಕೂರು:

ಗುಬ್ಬಿ ತಾಲ್ಲೂಕು ಬಿದರೆಹಳ್ಳ ಕಾವಲ್‍ನಲ್ಲಿ ನೂತನವಾಗಿ ನಿರ್ಮಿಸಿರುವ ಹೆಚ್‍ಎಎಲ್ ಘಟಕ ಉದ್ಘಾಟನೆಗಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಫೆಬ್ರವರಿ ಮಾಹೆಯಲ್ಲಿ ಬರುವ ನಿರೀಕ್ಷೆ ಇರುವುದರಿಂದ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪೂರ್ ವಾಡ್ ಹಾಗೂ ಇನ್ನಿತರೆ ಅಧಿಕಾರಿಗಳೊಂದಿಗೆ ಮಂಗಳವಾರ ಸ್ಥಳ ಪರಿಶೀಲನೆ ನಡೆಸಿದರು.
ಹೆಚ್‍ಎಎಲ್ ಆವರಣದಲ್ಲಿ ಫೆಬ್ರವರಿ ಮಾಹೆಯಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಗಣ್ಯವ್ಯಕ್ತಿಗಳು ಹಾಗೂ ಸಾರ್ವಜನಿಕರು ಸೇರಿದಂತೆ ಸುಮಾರು 50ಸಾವಿರಕ್ಕೂ ಹೆಚ್ಚು ಜನ ಬರುವ ನಿರೀಕ್ಷೆ ಇರುವುದರಿಂದ ವಾಹನ ನಿಲುಗಡೆಗಾಗಿ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಮಾಡುವ ಬಗ್ಗೆ ಅವರು ಚರ್ಚಿಸಿದರು. ಹೆಚ್‍ಎಎಲ್ ಘಟಕದ ಪ್ರವೇಶದ್ವಾರದ ಮುಂದಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅಡ್ಡಿಯಾಗದಂತೆ ಪಾರ್ಕಿಂಗ್ ವ್ಯವಸ್ಥೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಕಾರ್ಯಕ್ರಮ ಸ್ಥಳಕ್ಕೆ ಗಣ್ಯವ್ಯಕ್ತಿಗಳು, ಸಾರ್ವಜನಿಕರಿಗೆ ಪ್ರತ್ಯೇಕ ಪ್ರವೇಶ ಹಾಗೂ ನಿರ್ಗಮನಕ್ಕೆ ವ್ಯವಸ್ಥೆ ಕಲ್ಪಿಸಬೇಕು. ಉಳಿದಂತೆ ಹೆಲಿಪ್ಯಾಡ್, ವೇದಿಕೆ ಸಜ್ಜು, ಆಸನ ವ್ಯವಸ್ಥೆ, ಭದ್ರತಾ ವ್ಯವಸ್ಥೆ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು. ಕಾರ್ಯಕ್ರಮದಲ್ಲಿ ಯಾವುದೇ ಲೋಪದೋಷವಾಗದಂತೆ ಯಶಸ್ವಿಯಾಗಿ ನಡೆಯುವಂತೆ ಕಾರ್ಯನಿರ್ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಶಾಸಕ ಜಿ.ಬಿ.ಜ್ಯೋತಿಗಣೇಶ್, ಉಪವಿಭಾಗಾಧಿಕಾರಿ ಜಿ.ಆರ್. ನಟರಾಜ್, ಪ್ರಾದೇಶಿಕ ಸಾರಿಗೆ ಅಧಿಕಾರಿ ರಾಜು, ಉಪ ಅರಣ್ಯ ಸಂರಕ್ಷಣಾಧಿಕಾರಿ ಅನುಪಮ, ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಶಾಂತ್ ಕೂಡ್ಲಿಗಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ: ಮಂಜುನಾಥ್, ತಹಶೀಲ್ದಾರ್ ಆರತಿ, ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು, ಹೆಚ್‍ಎಎಲ್ ಘಟಕದ ಮುಖ್ಯಸ್ಥರು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!