ಹೊಸದಿಗಂತ ಡಿಜಿಟಲ್ ಡೆಸ್ಕ್:
ಪರಪ್ಪನ ಅಗ್ರಹಾರ ಕೈದಿಗಳಿಗೆ ನಿಯಮ ಮೀರಿ ವಿಶೇಷ ಸವಲತ್ತು ನೀಡಿರುವ ವಿಚಾರವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಈ ಸಂಬಂಧ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಮಿತಿ ರಚಿಸಲು ಮುಂದಾಗಿದೆ.
ಗೃಹ ಸಚಿವ ಜಿ.ಪರಮೇಶ್ವರ್ ಇಂದು ಜೈಲಿನ ಅಧಿಕಾರಿಗಳೊಂದಿಗೆ ಸಭೆ ಕರೆದಿದ್ದು, ಸಭೆಯಲ್ಲಿ ಮಹತ್ವದ ನಿರ್ಣಯ ಕೈಗೊಳ್ಳುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
ಪ್ರಕರಣ ಸಂಬಂಧ ನಿನ್ನೆ ಪ್ರತಿಕ್ರಿಯೆ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ಐಷಾರಾಮಿ ಸವಲತ್ತುಗಳು ದೊರಕುತ್ತಿರುವ ವಿಷಯ ನಮ್ಮ ಸರ್ಕಾರದ ಗಮನಕ್ಕೆ ಬಂದಿದೆ. ಸಂಬಂಧಪಟ್ಟ ಅಧಿಕಾರಿಗಳು ರಜೆಯ ಮೇಲೆ ತೆರಳಿದ್ದರು. ಗೃಹ ಸಚಿವರು ಈ ಬಗ್ಗೆ ಸಭೆ ಕರೆದಿದ್ದಾರೆ. ತಪ್ಪು ಮಾಡಿದವರ ಮೇಲೆ ಗಂಭೀರ ಕ್ರಮ ಕೈಗೊಳ್ಳಲಾಗುವುದು ಹಾಗೂ ಇನ್ನೂ ಮುಂದೆ ಇಂಥದ್ದು ನಡೆಯದಂತೆ ಕಟ್ಟುನಿಟ್ಟಿನ ಕ್ರಮ ವಹಿಸಲಾಗುವುದು ಎಂದು ಹೇಳಿದ್ದರು.
ಗೃಹ ಸಚಿವ ಪರಮೇಶ್ವರ್ ಅವರು ಮಾತನಾಡಿ, ಮಂಗಳೂರು, ಬೆಳಗಾವಿ ಮತ್ತು ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಹಲವಾರು ಜೈಲು ಅಧಿಕಾರಿಗಳನ್ನು ಕೈದಿಗಳಿಗೆ ವಿಶೇಷ ಸವಲತ್ತು ನೀಡಿದ್ದಕ್ಕಾಗಿ ಅಮಾನತುಗೊಳಿಸಲಾಗಿದೆ, ಆದಾಗ್ಯೂ, ಬೆಂಗಳೂರಿನಲ್ಲಿ ಇಂತಹ ಘಟನೆಗಳು ಪದೇ ಪದೇ ನಡೆಯುತ್ತಿವೆ. ಬಿ. ದಯಾನಂದ ಅವರನ್ನು ಕಾರಾಗೃಹದ ಮುಖ್ಯಸ್ಥರನ್ನಾಗಿ ನೇಮಿಸಲಾಗಿದ್ದು, ಅವರು ನಿನ್ನೆ ರಜೆಯಲ್ಲಿದ್ದರು.
ನಾನು ಅವರೊಂದಿಗೆ ಮಾತನಾಡಿದ್ದೇನೆ. ಕಾರಾಗೃಹದಲ್ಲಿ ಪದೇ ಪದೇ ಇಂತಹ ಘಟನೆಗಳು ನಡೆಯುತ್ತಲೇ ಇದೆ. ಯಾರೇ ಜವಾಬ್ದಾರರಾಗಿದ್ದರೂ, ಅದು ಸೂಪರಿಂಟೆಂಡೆಂಟ್ ಆಗಿರಲಿ ಅಥವಾ ಕೆಳ ಹಂತದ ಸಿಬ್ಬಂದಿಯಾಗಿರಲಿ ಅವರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು, ಈ ಬಗ್ಗೆ ವರದಿಯನ್ನು ಸಲ್ಲಿಸಬೇಕು ಎಂದು ಹೇಳಿದರು.

