ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭಾ ಚುನಾವಣೆ ದಿನಾಂಕ ಘೋಷಣೆಗೆ ಕೆಲ ದಿನಗಳು ಮಾತ್ರ ಬಾಕಿ ಉಳಿದಿದ್ದು, ರಾಜಕೀಯ ಪಕ್ಷಗಳಿಂದ ಭರ್ಜರಿಯಾಗಿ ತಯಾರಿ ನಡೆಯುತ್ತಿದೆ.
ಇದರ ನಡುವೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸುತ್ತಿದೆ. ರಾಯ್‌ಬರೇಲಿ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧಿಸುವು ಸಾಧ್ಯತೆ ದಟ್ಟವಾಗಿದೆ.
ಗಾಂಧಿ ಕುಟುಂಬಕ್ಕೆ ರಾಯ್‌ಬರೇಲಿ ಸಂಜೀವಿನಿ ಕ್ಷೇತ್ರವಾಗಿದೆ. ಸೋನಿಯಾ ಗಾಂಧಿ 5 ಬಾರಿ ಇದೇ ಕ್ಷೇತ್ರದಿಂದ ಗೆದ್ದಿದ್ದಾರೆ. ಇದೀಗ ತೆರವಾಗಿರುವ ಈ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲು ತಯಾರಿ ನಡೆಸಿದ್ದಾರೆ.
ಇತ್ತ ರಾಹುಲ್ ಗಾಂಧಿ ಈ ಬಾರಿಯೂ ಎರಡು ಕ್ಷೇತ್ರದಿಂದ ಸ್ಪರ್ಧಿಸಲು ಸಜ್ಜಾಗಿದ್ದಾರೆ. ಉತ್ತರ ಪ್ರದೇಶದ ಅಮೆಥಿ ಹಾಗೂ ಕೇರಳ ವಯನಾಡಿನಿಂದ ರಾಹುಲ್ ಗಾಂಧಿ ಸ್ಪರ್ಧಿಸುವ ಸಾಧ್ಯತೆ ದಟ್ಟವಾಗಿದೆ. 2019ರ ಚುನಾವಣೆಯಲ್ಲಿ ಈ ಎರಡೂ ಕ್ಷೇತ್ರದಿಂದ ರಾಹುಲ್ ಗಾಂಧಿ ಸ್ಪರ್ಧಿಸಿದ್ದರು. ಆದರೆ ಅಮೆಥಿಯಲ್ಲಿ ಬಿಜೆಪಿ ನಾಯಕಿ ಸ್ಮೃತಿ ಇರಾನಿ ವಿರುದ್ಧ ಸೋಲು ಕಂಡಿದ್ದರು. ಆದರೆ ಮುಸ್ಲಿಮ್ ಪ್ರಾಬಲ್ಯದ ವಯನಾಡಿನಲ್ಲಿ ಅಭೂತಪೂರ್ವ ಗೆಲುವು ದಾಖಲಿಸಿದ್ದರು.
ಮಾರ್ಚ್7 ರಂದು ಕರೆದಿರುವ ಕಾಂಗ್ರೆಸ್ ಸಭೆಯಲ್ಲಿ ಈ ಕುರಿತು ಅಧಿಕೃತ ಘೋಷಣೆಯಾಗುವ ಸಾಧ್ಯತೆ ಇದೆ. ಇದೇ ವೇಳೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ.