ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾವೇರಿ ನದಿ ನೀರಿನ ವಿಚಾರವಾಗಿ ಬೆಂಗಳೂರಿನಲ್ಲಿರುವ ರಾಜಭವನ ಮುತ್ತಿಗೆ ಹಾಕಿ, ಪ್ರತಿಭಟನೆ ನಡೆಸಲು ಕನ್ನಡ ಪರ ಸಂಘಟನೆಗಳು ಸಜ್ಜಾಗಿವೆ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ.
ಇಂದು ವಾಟಾಳ್ ನಾಗರಾಜ್ ಹಾಗೂ ಇತರ ಕನ್ನಡಪರ ಹೋರಾಟಗಾರರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ತಮಿಳುನಾಡಿಗೆ ಬಿಡುತ್ತಿರುವ ಕಾವೇರಿ ನೀರನ್ನು ಕೂಡಲೇ ನಿಲ್ಲಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹಿಸಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದಂತೆ ಕರ್ನಾಟಕ ತಮಿಳುನಾಡಿಗೆ 3000 ಕ್ಯೂಸೆಕ್ ಕಾವೇರಿ ನೀರು ಬಿಡುತ್ತಿದು, ಅಕ್ಟೋಬರ್ 15ರವರೆಗೆ ಈ ಆದೇಶ ಜಾರಿಯಲ್ಲಿರಲಿದೆ. ಇಂದು ಮತ್ತೆ ಪ್ರಾಧಿಕಾರ ಸಭೆ ಸೇರಲಿರುವ ಕಾರಣ ಕನ್ನಡಪರ ಸಂಘಟನೆಗಳು ಪ್ರತಿಭಟನೆಗೆ ಮುಂದಾಗಿವೆ.
ನಿನ್ನೆ ಬೆಂಗಳೂರು ಗ್ರಾಮಾಂತರ ಹೊಸಕೋಟೆಯಲ್ಲಿ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿದ ಕೆಲ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕ ಮತ್ತು ತಮಿಳುನಾಡು ಸರ್ಕಾರಗಳ ನಡುವಿನ ಹಗ್ಗಜಗ್ಗಾಟ ಮುಂದುವರಿದಿದ್ದು, ರಾಜ್ಯದಲ್ಲಿನ ಜನರಿಗೆ ಕುಡಿಯಲು ನೀರಿಲ್ಲದಿರುವಾಗ ತಮಿಳುನಾಡಿಗೆ ನೀರು ಹರಿಸುತ್ತಿರುವುದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.