‘ತಮಿಳಿನಿಂದ ಕನ್ನಡ ಹುಟ್ಟಿತು’ ಹೇಳಿಕೆ: ನಟ ಕಮಲ್ ಹಾಸನ್ ವಿರುದ್ಧ ಕನ್ನಡಪರ ಸಂಘಟನೆಗಳ ಕಿಡಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ತಮಿಳಿನಿಂದ ಕನ್ನಡ ಹುಟ್ಟಿತು ಎಂದು ನಟ ಕಮಲ್ ಹಾಸನ್ ಅವರು ಹೇಳಿದ್ದು, ಹೇಳಿಕೆ ಸಂಬಂಧ ಬಿಜೆಪಿ ಹಾಗೂ ಕನ್ನಡಪರ ಸಂಘಟನೆಗಳು ತೀವ್ರವಾಗಿ ಕಿಡಿಕಾರುತ್ತಿವೆ. ಅಲ್ಲದೆ, ನಟ ಕ್ಷಮೆಯಾಚಿಸಬೇಕೆಂದು ಆಗ್ರಹಿಸುತ್ತಿವೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಕಮಲ್ ಹಾಸನ್ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ.

ಮಾತೃಭಾಷೆಯನ್ನು ಪ್ರೀತಿಸಬೇಕು, ಆದರೆ, ಅದರ ಹೆಸರಿನಲ್ಲಿ ದುರಭಿಮಾನ ಮೆರೆಯುವುದು ಸಂಸ್ಕೃತಿ ಹೀನ ನಡವಳಿಕೆಯಾಗುತ್ತದೆ. ಅದರಲ್ಲೂ ಕಲಾವಿದರಿಗೆ ಪ್ರತಿಯೊಂದು ಭಾಷೆಯನ್ನೂ ಗೌರವಿಸುವ ಸಂಸ್ಕಾರ ಇರಬೇಕು. ಕನ್ನಡವೂ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ನಟಿಸಿರುವ ನಟ ಕಮಲ್ ಹಾಸನ್ ತಮ್ಮ ತಮಿಳು ಭಾಷೆಯನ್ನು ವೈಭವಿಕರಿಸುವ ಮತ್ತಿನಲ್ಲಿ ನಟ ಶಿವರಾಜ್ ಕುಮಾರ್ ಅವರನ್ನೂ ಕುಳ್ಳಿರಿಸಿಕೊಂಡು ಕನ್ನಡವನ್ನು ಅವಮಾನಿಸಿರುವುದು ಉದ್ಧಟತನ ಹಾಗೂ ದುರಹಂಕಾರದ ಪರಮಾವಧಿಯಾಗಿದೆ ಎಂದು ಕಿಡಿಕಾರಿದ್ದಾರೆ.

ಭಾರತವೂ ಸೇರಿದಂತೆ ವಿಶ್ವದ ಹತ್ತು -ಹಲವು ಕಡೆಗಳಲ್ಲಿ ಕನ್ನಡದ ಹೆಗ್ಗುರುತು ಶತಾಶತಮಾನಗಳಿಂದಲೂ ಪಡಿಮೂಡಿದೆ. ಜಗತ್ತಿನ ಭಾಷೆಗಳಲ್ಲಿ ಕನ್ನಡಕ್ಕೆ ಸರ್ವ ಶ್ರೇಷ್ಠ ಮಾನ್ಯತೆ ಇದೆ ಎಂಬ ಕನಿಷ್ಠ ತಿಳಿವಳಿಕೆ ಕಮಲ್ ಹಾಸನ್ ರಂತಹ ಸಂಕುಚಿತ ವ್ಯಕ್ತಿತ್ವವಿರುವ ದುರಾಭಿಮಾನಿ ವ್ಯಕ್ತಿಗಳಿಗೆ ತಿಳಿದಿರಲಿ. ಕನ್ನಡವನ್ನು ಅವಹೇಳನ ಮಾಡುವ ಮುನ್ನ ಕನ್ನಡ ಚಿತ್ರಗಳಲ್ಲೂ ನಟಿಸಿರುವ ಕಮಲ್ ಹಾಸನ್ ಕನ್ನಡ, ಕನ್ನಡಿಗರ ಋಣ ತಮ್ಮ ಮೇಲಿದೆ ಎಂಬ ಔದಾರ್ಯತೆಯನ್ನು ಮರೆತಿದ್ದು ಅವರ ಉಪಕಾರ ಸ್ಮರಣೆಯಿಲ್ಲದ ವ್ಯಕ್ತಿತ್ವವನ್ನು ಅನಾವರಣಗೊಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!