ಮೇ 8-11ರವರೆಗೆ ಕೊಡಗಿನಾದ್ಯಂತ ನಿಷೇಧಾಜ್ಞೆ ಜಾರಿ: ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ

ಹೊಸ ದಿಗಂತ ವರದಿ, ಮಡಿಕೇರಿ:

ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಮತದಾನವು ಮೇ 10 ರಂದು ಕೊಡಗು ಜಿಲ್ಲೆಯಾದ್ಯಂತ ಎಲ್ಲಾ ಮತಗಟ್ಟೆಗಳಲ್ಲಿ ನಡೆಯಲಿದೆ. ಜಿಲ್ಲೆಯಲ್ಲಿ ಪಾರದರ್ಶಕ, ಸುಗಮ ಮತ್ತು ಶಾಂತಿಯುತವಾಗಿ ಮತದಾನ ನಡೆಸುವ ಸಂಬಂಧ ಮತ್ತು ಈ ಅವಧಿಯಲ್ಲಿ ಜಿಲ್ಲೆಯಾದ್ಯಂತ ಶಾಂತಿಯುತ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಮೇ 8 ರ ಸಂಜೆ 6 ಗಂಟೆಯಿಂದ ಮೇ 11 ರ ಸಂಜೆ 6 ಗಂಟೆಯವರೆಗೆ ಕೊಡಗು ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಬಿ.ಸಿ.ಸತೀಶ ಆದೇಶಿಸಿದ್ದಾರೆ.

ಈ ಅವಧಿಯಲ್ಲಿ ರಾಜಕೀಯ ಪಕ್ಷಗಳ ಅಭ್ಯರ್ಥಿ/ ಕಾರ್ಯಕರ್ತರು ಮನೆ ಮನೆಗೆ ತೆರಳಿ ಪಕ್ಷದ ಪರ ಮತಯಾಚನೆ ನಡೆಸುವುದನ್ನು ಹೊರತುಪಡಿಸಿ, ಉಳಿದಂತೆ ಯಾವುದೇ ರಾಜಕೀಯ ಸಭೆ-ಸಮಾರಂಭ ನಡೆಸುವುದು, ಪಟಾಕಿ ಸಿಡಿಸುವುದು, ಮೆರವಣಿಗೆ ಇನ್ನಿತರೆ ಕಾರ್ಯಕ್ರಮ ನಡೆಸುವುದು, ಛಾಯಾಗ್ರಹಣ, ದೂರದರ್ಶನ ಅಥವಾ ಇತರ ರೀತಿಯ ಉಪಕರಣಗಳ ಮೂಲಕ ಯಾವುದೇ ಚುನಾವಣಾ ವಿಷಯವನ್ನು ಸಾರ್ವಜನಿಕರಿಗೆ ಪ್ರದರ್ಶಿಸುವುದನ್ನು ನಿಷೇಧಿಸಿದೆ.

ಮಾರಕ ಆಯುಧಗಳನ್ನು ಹೊಂದಿರುವುದು ಅಥವಾ ಹಿಡಿದು ಓಡಾಡುವುದು, ಐದಕ್ಕಿಂತ ಹೆಚ್ಚಿಗೆ ಜನ ಗುಂಪು ಸೇರುವುದು/ ಸಂಚರಿಸುವುದು ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಎಲ್ಲಾ ಮತಗಟ್ಟೆಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯ ಸ್ಥಳ ನಿರ್ಬಂಧಿತ ಪ್ರದೇಶವಾಗಿದ್ದು, ಈ ಪ್ರದೇಶದಲ್ಲಿ ಖಾಸಗಿ ವಾಹನಗಳ ನಿಲುಗಡೆ, ಧ್ವನಿ ವರ್ಧಕ ಬಳಕೆ ಮುಂತಾದವುಗಳನ್ನು ನಿಷೇಧಿಸಿದೆ
ಹಾಗೂ ಮತಗಟ್ಟೆಯ 100 ಮೀಟರ್ ವ್ಯಾಪ್ತಿಯಲ್ಲಿ ಪಕ್ಷದ ಪ್ರಚಾರ, ಮತದಾರರ ಓಲೈಕೆ ಮುಂತಾದವುಗಳನ್ನು ಮಾಡುವಂತಿಲ್ಲ.
ಮತದಾನದ ದಿನವಾದ ಮೇ 10 ರಂದು ಜಿಲ್ಲೆಯಾದ್ಯಂತ ಎಲ್ಲಾ ಸಂತೆ-ಜಾತ್ರೆಗಳನ್ನು ನಿಷೇಧಿಸಿದೆ.

ಈ ಆದೇಶವು ಸರ್ಕಾರಿ ಕರ್ತವ್ಯದ ನಿಮಿತ್ತ ಹಾಗೂ ಮತಗಟ್ಟೆಗಳ ಭದ್ರತಾ ವ್ಯವಸ್ಥೆಗಾಗಿ ನಿಯೋಜಿಸಲ್ಪಟ್ಟ ಅಧಿಕಾರಿ ಮತ್ತು ಸಿಬ್ಬಂದಿಗಳು ಆಯುಧ/ ಬಂದೂಕುಗಳನ್ನು ಹೊಂದಿರುವುದಕ್ಕೆ ಹಾಗೂ ಬಳಸುವುದಕ್ಕೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!