ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ: 15ಕ್ಕೂ ಅಧಿಕ ಬಿಜೆಪಿ ಕಾರ್ಯಕರ್ತರ ವಿರುದ್ದ ಮೊಕದ್ದಮೆ

ಹೊಸದಿಗಂತ ವರದಿ, ಮಡಿಕೇರಿ:
ಕೊಡಗು ಜಿಲ್ಲೆಗೆ ಭೇಟಿ ನೀಡಿದ್ದ ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರನ್ನು ತಡೆದು ಪ್ರತಿಭಟನೆ ನಡೆಸಿದ ಪ್ರಕರಣಕ್ಕೆ‌ ಕುಶಾಲನಗರ ಪೊಲೀಸರು 15ಕ್ಕೂ ಅಧಿಕ ಮಂದಿ ಬಿಜೆಪಿ ಕಾರ್ಯಕರ್ತರ ವಿರುದ್ದ ಮೊಕದ್ದಮೆ ದಾಖಲಿಸಿದ್ದಾರೆ. ಅಲ್ಲದೆ 11ಮಂದಿಯನ್ನು ವಶಕ್ಕೆ ಪಡೆದು ರಾತ್ರಿಯೇ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ಅವರನ್ನು ಬಿಡುಗಡೆ ಮಾಡಲಾಗಿದೆ‌.
ಕಾರ್ಯಕರ್ತರ ಬಂಧನದ ವಿಷಯ ತಿಳಿಯುತ್ತಿದ್ದಂತೆ ಶಾಸಕರಾದ ಅಪ್ಪಚ್ಚುರಂಜನ್ ಹಾಗೂ ಕೆ.ಜಿ.ಬೋಪಯ್ಯ ಅವರು ಕುಶಾಲನಗರಕ್ಕೆ ಭೇಟಿ ನೀಡಿ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದರು.
ಕೊಡಗಿನ ಮಳೆಹಾನಿ ಪ್ರದೇಶಗಳ ವೀಕ್ಷಣೆ ನಡೆಸಿ ಗುರುವಾರ ಸಂಜೆ ಮಡಿಕೇರಿಯಿಂದ ಕುಶಾಲನಗರ ಕಡೆಗೆ ಹೋಗುತ್ತಿದ್ದ ಸಂದರ್ಭ ಗುಡ್ಡೆಹೊಸೂರಿನಲ್ಲಿ ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಕಾರು ತಡೆದು ಪ್ರತಿಭಟನೆ ನಡೆಸಿದ್ದರು. ಕೆಲವರು ಕಾರಿಗೆ ಮೊಟ್ಟೆ ಎಸೆದ ಪ್ರಸಂಗವೂ ನಡೆದಿತ್ತು.
ಈ ಸಂದರ್ಭ ಪೊಲೀಸರು ಪ್ರತಿಭಟನಾಕಾರರನ್ನು ಚದುರಿಸಲು ಲಘು ಲಾಠಿ ಚಾರ್ಜ್ ಮಾಡಿದ್ದರಲ್ಲದೆ, ಕೆಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಪ್ರತಿಭಟನಾಕಾರರು ಏಕಾಏಕಿ ರಸ್ತೆಗೆ ಇಳಿದು ಸಾವರ್ಕರ್ ಭಾವಚಿತ್ರ ಹಾಗೂ ಕಪ್ಪು ಬಾವುಟದೊಂದಿಗೆ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿದ್ದರು. ಪೊಲೀಸ್ ಬಂದೋಬಸ್ತ್ ಕಲ್ಪಿಸಿದ್ದರೂ ಪ್ರತಿಭಟನಾಕಾರರನ್ನು ಹತೋಟಿಗೆ ತರಲು ಪೊಲೀಸರು ಹರಸಾಹಸ ಪಡಬೇಕಾಯಿತು.
ಪೊಲೀಸರ ವೈಫಲ್ಯ:
ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ಕೊಡಗು ಜಿಲ್ಲಾ ಪೊಲೀಸರು ಯಾವುದೇ ಮುನ್ನೆಚ್ಚರಿಕೆ ವಹಿಸಿಲ್ಲ. ಪ್ರತಿಭಟನಾಕಾರರನ್ನು ಮುನ್ನೆಚ್ಚರಿಕಾ ಕ್ರಮವಾಗಿ ಬಂಧಿಸಬೇಕಿತ್ತು. ಆದರೆ ಆರ್‌ಎಸ್‌ಎಸ್ ಜೊತೆ ಪೊಲೀಸರು ನೇರವಾಗಿ ಶಾಮಿಲಾಗಿದ್ದಾರೆ ಎಂದು ಆರೋಪಿಸಿದ್ದಾರೆ.
ಆ.26ರಂದು ಮತ್ತೆ ಕೊಡಗಿಗೆ:
ತಮ್ಮ ವಿರುದ್ಧ ನಡೆದ ಪ್ರತಿಭಟನೆಗಳ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಆ.26 ರಂದು ಎಸ್‌ಪಿ ಕಚೇರಿ ಎದುರು ಪ್ರತಿಭಟನೆ ನಡೆಸಲು ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.
ಸೋಮವಾರಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸ್ ವೈಫಲ್ಯದಿಂದ ಈ ರೀತಿಯ ಪ್ರತಿಭಟನೆಗಳು ನಡೆದಿವೆ. ಬಿಜೆಪಿಯೊಂದಿಗೆ ಪೊಲೀಸರೂ ಶಾಮೀಲಾಗಿದ್ದಾರೆ. ಪೊಲೀಸರ ವೈಫಲ್ಯ ಖಂಡಿಸಿ ಆ.26 ರಂದು ಮಡಿಕೇರಿಯಲ್ಲಿ ಎಸ್‌ಪಿ ಕಚೇರಿ ಎದುರು ಕಾಂಗ್ರೆಸ್ ಪ್ರತಿಭಟನೆ ನಡೆಸಲಿದ್ದು, ತಾನೂ ಇದರಲ್ಲಿ ಭಾಗಿಯಾಗುವುದಾಗಿ ತಿಳಿಸಿದರು.
ಪ್ರತಿಭಟನೆಯ ಬಿಸಿ:
ಸಿದ್ದರಾಮಯ್ಯ ಅವರು ಸೋಮವಾರಪೇಟೆಯಲ್ಲೂ ಪ್ರತಿಭಟನೆಯ ಬಿಸಿ ಎದುರಿಸಬೇಕಾಯಿತು. ಬಿಜೆಪಿ ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರು ಜೂನಿಯರ್ ಕಾಲೇಜು ಬಳಿ ಪ್ರತಿಭಟನೆ ನಡೆಸಿ ಘೋಷಣೆಗಳನ್ನು ಕೂಗಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!