ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಹಿನ್ನಡೆಯಾಗಿದ್ದು, ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಕರ್ನಾಟಕಕ್ಕೆ ಆದೇಶ ನೀಡಿದ ಬೆನ್ನಲ್ಲೇ ರಾಜ್ಯದಲ್ಲಿ ಕಾವೇರಿ ಕಿಚ್ಚು ಹೆಚ್ಚಾಗಿದೆ. ರಾಜ್ಯಾದ್ಯಂತ ಕನ್ನಡ ಪರ ಸಂಘಟನೆಗಳು, ರೈತರು ಪ್ರತಿಭಟನೆ ನಡೆಸುತ್ತಿದ್ದು, ಸುಪ್ರೀಂ ತೀರ್ಪಿನ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.
ಮಂಡ್ಯದಲ್ಲಿ ಮಹಿಳೆಯರಾದಿಯಾಗಿ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ರಾಜ್ಯದ ಪಾಲಿಗೆ ಸುಪ್ರೀಂಕೋರ್ಟ್ ಬರೆದ ಮರಣ ಶಾಸನ ಇದಾಗಿದೆ ಎಂದು ಕಣ್ಣೀರಿಡುತ್ತಿದ್ದಾರೆ. ಇತ್ತ ಮೈಸೂರಿನ ಅರಮನೆ ಬಳಿಯೂ ಕನ್ನಡ ಪರ ಸಂಘಟನೆಗಳು ಘೋಷಣೆಗಳನ್ನು ಕೂಗುತ್ತಿದ್ದಾರೆ. ಇದೆಲ್ಲವೂ ರಾಜ್ಯ ಸರಕಾರದ ವೈಫಲ್ಯ. ನ್ಯಾಯಾಲಯದ ಮುಂದೆ ಸಮರ್ಥ ವಾದ ಮಂಡಿಸುವಲ್ಲಿ ಕರ್ನಾಟಕ ವಿಫಲವಾಗಿದೆ ಎಂದು ಆಕ್ರೋಶ ಹೊರಹಾಕಿದರು.
ಇನ್ನೂ ಬೆಂಗಳೂರಿನಲ್ಲಿ ಸುಪ್ರೀಂ ತೀರ್ಪು ಬಂತೆಂದು ತಮಿಳುನಾಡಿಗೆ ನೀರು ಬಿಡದಂತೆ ಕರವೇ ಕಾರ್ಯಕರ್ತರು ರಾಜ್ಯ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಕರವೇ ಅಧ್ಯಕ್ಷ ನಾರಾಯಣ ಗೌಡ ನೇತೃತ್ವದಲ್ಲಿ ವಿಧಾನಸೌಧ ಮುತ್ತಿಗೆಗೆ ಮುಂದಾದರು. ಬಿಗಿ ಭದ್ರತೆ ಕೈಗೊಳ್ಳಲಾಗಿದ್ದು, ರ್ಯಾಲಿ ಹೊರಟ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಧಾನಸೌಧದ ಸುತ್ತಮುತ್ತ ಬ್ಯಾರಿಕೇಡ್ ಹಾಕಿ ಹೆಚ್ಚುವರಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ.
ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ನಡೆದಿದ್ದು, ಕರ್ನಾಟಕವು ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ 5,000 ಕ್ಯೂಸೆಕ್ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ. ಈ ಮೂಲಕ ಕಾವೇರಿ ನಿಯಂತ್ರಣ ಆಯೋಗ ಮತ್ತು ಕಾವೇರಿ ನಿರ್ವಹಣಾ ಪ್ರಾಧಿಕಾರದ ಆದೇಶ ಎತ್ತಿಹಿಡಿದಿದೆ.