ಹೊಸದಿಗಂತ ವರದಿ ಚಿತ್ರದುರ್ಗ:
ಹುಬ್ಬಳ್ಳಿಯಲ್ಲಿ ಶ್ರೀಕಾಂತ ಪೂಜಾರಿ ಬಂಧಿಸಿ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ದ ಭಾರತೀಯ ಜನತಾ ಪಾರ್ಟಿ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು. ನಗರದ ಒನಕ್ಕೆ ಓಬವ್ವ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಘೋಷಣೆಗಳನ್ನು ಕೂಗಿದರು. ಹಿಂದೂ ವಿರೋಧಿ, ರೈತ ವಿರೋಧಿ, ಶ್ರೀರಾಮನ ವಿರೋಧಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಪ್ರತಿಭಟನಾಕಾರರು ಹರಿಹಾಯ್ದರು.
ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿ, 31 ವರ್ಷದ ಹಿಂದಿನ ಕೇಸನ್ನು ಕೆದಕಿ ಶ್ರೀಕಾಂತ್ ಪೂಜಾರಿ ಹಾಗೂ ಹಿಂದೂ ಕಾರ್ಯಕರ್ತರನ್ನು ಬಂಧಿಸಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಮುಸ್ಲೀಮರನ್ನು ಓಲೈಸಿಕೊಳ್ಳುವುದಕ್ಕಾಗಿ ಹಿಂದೂ ವಿರೋಧಿ ಅನುಸರಿಸುತ್ತಿದೆ. ಅಯೋಧ್ಯೆಯಲ್ಲಿ ನಡೆದ ಕರಸೇವೆಯಲ್ಲಿ ಜಿಲ್ಲೆಯಿಂದ ಐದುನೂರು ಕಾರ್ಯಕರ್ತರು ಭಾಗವಹಿಸಿದ್ದರು. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ತಾಕತ್ತಿದ್ದರೆ ಅವರೆಲ್ಲರನ್ನು ಬಂಧಿಸಲಿ ಎಂದು ಸವಾಲು ಹಾಕಿದರು.
1980 ರಲ್ಲಿ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗ ಅಯೋಧ್ಯೆಯಲ್ಲಿ ರಾಮ ಮಂದಿರ ಕಟ್ಟುವುದಾಗಿ ದೇಶದ ಜನತೆಗೆ ವಚನ ನೀಡಿತ್ತು. ಅದರಂತೆ ಎಲ್.ಕೆ.ಅಡ್ವಾಣಿ, ಮುರಳಿ ಮನೋಹರ್ ಜೋಶಿ ನೇತೃತ್ವದಲ್ಲಿ ರಥಯಾತ್ರೆ ಕೂಡ ದೇಶದೆಲ್ಲೆಡೆ ಸಂಚರಿಸಿದ್ದನ್ನು ಜನ ಮರೆತಿಲ್ಲ. ನಮ್ಮ ಪಕ್ಷ ಕೊಟ್ಟ ಮಾತಿನಂತೆ ರಾಮ ಮಂದಿರ ಕಟ್ಟುತ್ತಿದೆ. ಇಡೀ ಜಗತ್ತು ರಾಮಮಂದಿರದ ಕಡೆ ನೋಡುತ್ತಿರುವ ಇಂತಹ ಪರಿಸ್ಥಿತಿಯಲ್ಲಿ ಹುಬ್ಬಳ್ಳಿಯಲ್ಲಿ ಹಿಂದೂ ಕಾರ್ಯಕರ್ತರನ್ನು ಬಂಧಿಸುವ ಅಗತ್ಯವಾದರೂ ಕಾಂಗ್ರೆಸ್ ಸರ್ಕಾರಕ್ಕೆ ಏನಿತ್ತು? ಎಂದು ಪ್ರಶ್ನಿಸಿದರು.
ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲಾ ಹಿಂದೂಗಳ ಮೇಲೆ ದೌರ್ಜನ್ಯ ನಡೆಯುತ್ತಿರುತ್ತದೆ. ಸಾಮರಸ್ಯ ಹಾಳು ಮಾಡುವ ಕೆಲಸಕ್ಕೆ ಕೈಹಾಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದೂಗಳ ಭಾವನೆಗೆ ಧಕ್ಕೆ ತರುತ್ತಿದ್ದಾರೆ. ಶ್ರೀಕಾಂತ ಪೂಜಾರಿಯನ್ನು ಕೂಡಲೆ ಬಿಡುಗಡೆಗೊಳಿಸಿ ಅವರ ಮೇಲೆ ದಾಖಲಿಸಿರುವ ಕೇಸನ್ನು ವಜಾ ಮಾಡದಿದ್ದರೆ ಪ್ರತಿ ತಾಲ್ಲೂಕು ಹಾಗೂ ಮಂಡಲ, ಶಕ್ತಿ ಕೇಂದ್ರಗಳಲ್ಲಿ ಹೋರಾಟ ನಡೆಸಲಾಗುವುದೆಂದು ಎ.ಮುರಳಿ ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.