ರೈತರಿಗೆ ಸಕಾಲದಲ್ಲಿ ಬೆಳೆ ಹಾನಿ ಪರಿಹಾರ ತಲುಪಿಸಿ: ಅಧಿಕಾರಿಗಳಿಗೆ ಸಚಿವ ಶಂಕರ ಪಾಟೀಲ ಸೂಚನೆ

ಹೊಸದಿಗಂತ ವರದಿ, ಬೀದರ್
ಮಳೆಯಿಂದ ಬೆಳೆ ಕಳೆದುಕೊಂಡ ರೈತರಿಗೆ ಜಿಲ್ಲೆಯ ಎಲ್ಲಾ ತಾಲ್ಲೂಕಿನ ರೈತರಿಗೆ ಕಾಲಮಿತಿಯಲ್ಲಿ ಪರಿಹಾರ ದೊರಕಿಸಿಕೊಡುವಂತೆ ಕೈಮಗ್ಗ ಮತ್ತು ಜವಳಿ ಇಲಾಖೆ, ಕಬ್ಬು ಅಭಿವೃದ್ಧಿ ಸಕ್ಕರೆ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಶಂಕರ ಬ.ಪಾಟೀಲ ಮುನೇನಕೊಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬೆಳೆ ಹಾನಿ ಪರಿಹಾರ ಶೀಘ್ರವಾಗಿ ನೀಡುವಂತೆ ಈಗಾಗಲೇ ಕೃಷಿ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದ್ದು, ಇನ್ಸೂರೆನ್ಸ್ ಕಂಪನಿಯವರಿಗೆ ಬೆಳೆ ಹಾನಿ ವರದಿಯನ್ನು ನೀಡಿ ಬೆಳೆ ಹಾನಿಯಾದ ರೈತರಿಗೆ ಶೀಘ್ರ ಪರಿಹಾರ ಕೈಸೇರಬೇಕು. ವಿಮಾ ಕಂಪನಿಯವರು ರೈತರಿಗೆ ಸರಿಯಾದ ಪರಿಹಾರ ನೀಡುತ್ತಿಲ್ಲವೆಂಬ ಹಲವಾರು ದೂರುಗಳು ರೈತರಿಂದ ನಮಗೆ ಬರುತ್ತಿವೆ. ಈ ಕುರಿತು ಕೃಷಿ ಇಲಾಖೆ ಅಧಿಕಾರಿಗಳು ಗಮನ ಹರಿಸಬೇಕೆಂದು ಹೇಳಿದರು.
ಜಿಲ್ಲೆಯಲ್ಲಿ ರಸಗೊಬ್ಬರ ಹಾಗೂ ಇತರೆ ಮಾಹಿತಿಯನ್ನು ಈ ಭಾಗದ ಜನಪ್ರತಿನಿಧಿಗಳ ಗಮನಕ್ಕೆ ತರಬೇಕು ಎಂದ ಅವರು, ಜಿಲ್ಲೆಯಲ್ಲಿ ಯಾವುದೇ ರಸಗೊಬ್ಬರದ ಕೊರತೆ ಇದೆಯೇ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರನ್ನು ಪ್ರಶ್ನಿಸಿದಾಗ, ಇನ್ನು 760 ಮೆಟ್ರಿಕ್ ಟನ್ ಸ್ಟಾಕ್ ಇದೆ ಎಂದು ಸಚಿವರ ಗಮನಕ್ಕೆ ತಂದರು.
ಶಾಸಕ ಈಶ್ವರ ಖಂಡ್ರೆ ಮಾತನಾಡಿ, ಬೆಳೆ ಹಾನಿಯಾದ ಸಂದರ್ಭದಲ್ಲಿ ಯುನಿರ್ವಸಲ್ ಜನರಲ್ ಇನ್ಸೂರೆನ್ಸ್ ಕಂಪನಿಯ ಟೋಲ್ ಫ್ರೀ ನಂಬರ್ ಮತ್ತು ವೆಬ್‍ಸೈಟ್ ಸರಿಯಾಗಿ ಕಾರ್ಯನಿರ್ವಹಿಸಿರಲಿಲ್ಲ. ಹೀಗಾಗಿ ರೈತರಿಗೆ ಸಕಾಲದಲ್ಲಿ ಅರ್ಜಿ ಸಲ್ಲಿಸಲು ಸಾಧ್ಯವಾಗಲಿಲ್ಲ. ಅದನ್ನೇ ಬಂಡವಾಳ ಮಾಡಿಕೊಂಡ ಕಂಪನಿ ಬೆಳೆ ನಷ್ಟ ಪರಿಹಾರ ನೀಡಲು ವಿಳಂಬ ಮಾಡುತ್ತವೆ ಎಂದು ಹೇಳಿದರು.
ಕೇಂದ್ರ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಮಾತನಾಡಿ, ಯುನಿರ್ವಸಲ್ ಜನರಲ್ ಇನ್ಸುರೆನ್ಸ್ ಕಂಪನಿ ನಿಯಮ ಬದ್ಧವಾಗಿಯೇ ವಿಮಾ ಕಂತು ಪಡೆದು ರೈತರಿಗೆ ಬೆಳೆ ಪರಿಹಾರ ಪಾವತಿಸಿದೆ. 2016 ರಿಂದ 2022ರ ವರೆಗೆ ರೈತರಿಂದ 78 ಕೋಟಿ ರೂ. ವಿಮೆ ಪಡೆದು 461 ಕೋಟಿ ರೂ. ಪಾವತಿಸಿದೆ ಎಂದು ಹೇಳಿದರು.
ಜಿಲ್ಲಾಧಿಕಾರಿಗಳಾದ ಗೋವಿಂದ ರೆಡ್ಡಿ ಮಾತನಾಡಿ, ಜಿಲ್ಲೆಯ ಅಭಿವೃದ್ಧಿಗೆ ಬೀದರ್ ಉತ್ಸವ ಪೂರಕವಾಗಿದ್ದರಿಂದ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳ ಒತ್ತಾಸೆ ಮೇರೆಗೆ ಮುಂಬರುವ ದಿನಗಳಲ್ಲಿ ಬೀದರ ಉತ್ಸವ ಆಚರಣೆ‌ ಮಾಡುವುದರ ಕುರಿತು ಕೆಡಿಪಿ ಸಭೆಯಲ್ಲಿ ಎಲ್ಲರ ಗಮನಕ್ಕೆ ತಂದರು.
ಈ ಸಭೆಯಲ್ಲಿ ವಿಧಾನ ಪರಿಷತ್ ಸಭಾಪತಿಗಳಾದ ರಘುನಾಥರಾವ ಮಲ್ಕಾಪೂರೆ, ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಡಾ.ಶೈಲೇಂದ್ರ ಕೆ.ಬೆಲ್ದಾಳೆ, ಹುಮನಾಬಾದ ಶಾಸಕರಾದ ರಾಜಶೇಖರ ಬಿ.ಪಾಟೀಲ, ಭಾಲ್ಕಿ ಶಾಸಕರಾದ ಈಶ್ವರ ಬಿ.ಖಂಡ್ರೆ, ವಿಧಾನ ಪರಿಷತ್ ಸದಸ್ಯರಾದ ಅರವಿಂದಕುಮಾರ ಅರಳಿ, ಭೀಮರಾವ ಪಾಟೀಲ, ಕರ್ನಾಟಕ ರಾಜ್ಯ ಹಜ್ ಸಮಿತಿ ಅಧ್ಯಕ್ಷರಾದ ರವೂಫುದ್ಧಿನ್ ಕಚೇರಿವಾಲೆ, ಬಿದರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಬಾಬುವಾಲಿ, ಬೀದರ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಎಂ, ಬೀದರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡೆಕ್ಕ ಕಿಶೋರ್ ಬಾಬು, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ರತೇಂದ್ರನಾಥ ಸುಗೂರ್, ಜಿಲ್ಲಾ ಆರೋಗ್ಯಾಧಿಕಾರಿ ರತಿಕಾಂತ ಸ್ವಾಮಿ, ಬ್ರಿಮ್ಸ್ ನಿರ್ದೇಶಕರಾದ ಶಿವಕುಮಾರ ಶೆಟಕಾರ, ಅಬಕಾರಿ ಇಲಾಖೆಯ ಮಂಜುನಾಥ ಸೇರಿದಂತೆ ಇತರೇ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!