ಹೊಸದಿಗಂತ ಡಿಜಿಟಲ್ ಡೆಸ್ಕ್:
ಮದ್ದೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನಾ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ನಾಯಕ ಮತ್ತು ಎಂಎಲ್‌ಸಿ ಸಿ.ಟಿ. ರವಿ ವಿರುದ್ಧ ಪ್ರಕರಣ ದಾಖಲಾಗಿದೆ.
ಮದ್ದೂರು ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ನೀಡಿದ ದೂರಿನನ್ವಯ ಸಿಟಿ ರವಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ. ದೂರು ಹಿನ್ನೆಲೆಯಲ್ಲಿ ಅನ್ಯ ಸಮುದಾಯಗಳ ಮಧ್ಯೆ ದ್ವೇಷ ಉಂಟು ಮಾಡುವ ಮತ್ತು ಸೌಹಾರ್ದತಾ ಭಾವನೆಗಳಿಗೆ ಭಾದಕವಾಗುವಂತೆ ವೈರತ್ವ, ದ್ವ್ವ್ಷೇಷ ಉಂಟಾಗುವಂತೆ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಡಿ ಪ್ರಕರಣ ದಾಖಲಾಗಿದೆ.
ಪೊಲೀಸ್ ಅಧಿಕಾರಿಯೊಬ್ಬರ ದೂರಿನ ಆಧಾರದ ಮೇಲೆ, ಸಿಟಿ ರವಿ ವಿರುದ್ಧ ಮದ್ದೂರು ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 196 (1) (ಧರ್ಮ, ಜನಾಂಗ, ಜನ್ಮಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು ಮತ್ತು ಸಾಮರಸ್ಯವನ್ನು ಕಾಪಾಡಿಕೊಳ್ಳಲು ಹಾನಿಕರವಾದ ಕೃತ್ಯಗಳನ್ನು ಎಸಗುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.