ಹೊಸದಿಗಂತ ಡಿಜಿಟಲ್ ಡೆಸ್ಕ್:
ಪೊಲೀಸ್ ಸಬ್ ಇನ್‌ಸ್ಪೆಕ್ಟರ್ (ಪಿಎಸ್‌ಐ) ನೇಮಕಾತಿ ಹಗರಣದ 35ನೇ ಆರೋಪಿ ಐಪಿಎಸ್ ಅಧಿಕಾರಿ ಅಮೃತ್ ಪೌಲ್ ಅವರಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.
ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುವ ಅಮೃತ್ ಪೌಲ್ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ನಡೆಸಿದ ನ್ಯಾಯಮೂರ್ತಿ ಪಿ ಎಂ ನವಾಜ್ ಅವರಿದ್ದ ಪೀಠ ಈ ಆದೇಶ ನೀಡಿದೆ.
ಅರ್ಜಿದಾರರು ಜಾಮೀನು ಸಿಕ್ಕ ಬಳಿಕ ತನಿಖೆಗೆ ಸಹಕರಿಸಬೇಕು. ಸಾಕ್ಷ್ಯಗಳ ನಾಶಕ್ಕೆ ಮುಂದಾಗಬಾರದು. ತನಿಖಾಧಿಕಾರಿಗಳ ಮೇಲೆ ಪ್ರಭಾವ ಬೀರಬಾರದು. ಹೊರ ದೇಶಕ್ಕೆ ಪ್ರಯಾಣ ಮಾಡಬಾರದು. ಐದು ಲಕ್ಷ ರೂ.ಗಳ ಬಾಂಡ್ ಮತ್ತು ಇಬ್ಬರ ಶ್ಯೂರಿಟಿ ನೀಡಬೇಕು ಎಂದು ನ್ಯಾಯಪೀಠ ಷರತ್ತುಗಳನ್ನು ವಿಧಿಸಿದೆ.
ಈ ಹಿಂದೆ ಅರ್ಜಿಯ ವಿಚಾರಣೆ ವೇಳೆ ಸರ್ಕಾರದ ಪರ ವಕೀಲರಾಗಿದ್ದ ಪ್ರಸನ್ನ ಕುಮಾರ್ ವಾದ ಮಂಡಿಸಿ, ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಐಪಿಎಸ್ ಅಧಿಕಾರಿ ಅಮೃತ್ ಪೌಲ್ ಉತ್ತರ ಪತ್ರಿಕೆಗಳನ್ನು ತಿದ್ದಲು ಕಾರಣರಾಗಿದ್ದರು. ಅಲ್ಲದೆ, ಹಗರಣ ನಡೆದ ವೇಳೆ ಅಮೃತ್ ಪೌಲ್ ನೇಮಕಾತಿ ವಿಭಾಗದ ಎಡಿಜಿಪಿ ಆಗಿದ್ದರು. ಆ ಸಮಯದಲ್ಲಿ ಅವರು ಸುಳ್ಳು ದಾಖಲೆಗಳ ಮೂಲಕ ಕಚೇರಿಗೆ ವೈದ್ಯಕೀಯ ರಜೆ ಹಾಕುವ ಮೂಲಕ ಹಗರಣ ನಡೆಯಲು ಕಾರಣವಾಗಿದ್ದರು.