ಹೊಸದಿಗಂತ ಡಿಜಿಟಲ್ ಡೆಸ್ಕ್:
ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್‌ಐ) ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮರುಪರೀಕ್ಷೆಗೆ ಆದೇಶಿಸಿತ್ತು. ಈ ನಿರ್ಧಾರವನ್ನು ಹೈಕೋರ್ಟ್ ಇಂದು ಎತ್ತಿ ಹಿಡಿದಿದೆ.
ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ನಡೆದ ಹಿನ್ನೆಲೆಯಲ್ಲಿ ಮರುಪರೀಕ್ಷೆ ನಡೆಸಲು ಹಿಂದಿನ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಈ ಆದೇಶವನ್ನು ರದ್ದುಪಡಿಸಿ ಎಂದು ಆಯ್ಕೆಯಾಗಿದ್ದ ಹಲವು ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗಳ ಕುರಿತು ತೀರ್ಪನ್ನು ಇಂದು ಹೈಕೋರ್ಟ್ ಪ್ರಕಟಿಸಿದ್ದು, ಸ್ವತಂತ್ರ ಸಂಸ್ಥೆಯಿಂದ ಪಿಎಸ್‌ಐ ಹುದ್ದೆಗಳಿಗೆ ಮರು ಪರೀಕ್ಷೆ ನಡೆಸಲು ಹೈಕೋರ್ಟ್ ಆದೇಶ ಹೊರಡಿಸಿದೆ.
ಸರ್ಕಾರದ ಆದೇಶ ರದ್ದು ಕೋರಿ ಎನ್.ವಿ.ಚಂದನ್ ಸೇರಿದಂತೆ ಪಿಎಸ್ಐ ಆಯ್ಕೆ ಪಟ್ಟಿಯಲ್ಲಿದ್ದ 100ಕ್ಕೂ ಹೆಚ್ಚು ಅಭ್ಯರ್ಥಿಗಳು ಸಲ್ಲಿಸಿರುವ ತಕರಾರು ಅರ್ಜಿಗಳ ವಿಚಾರಣೆಯನ್ನು 2023ರ ಅ.26ರಂದು ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಲಾಗಿತ್ತು. ನ್ಯಾಯಮೂರ್ತಿಗಳಾದ ಪಿ.ಎಸ್.ದಿನೇಶ್ ಕುಮಾರ್ ಅವರ ನೇತೃತ್ವದ ವಿಭಾಗೀಯ ಪೀಠ ಇಂದು ಮಧ್ಯಾಹ್ನ ತೀರ್ಪು ನೀಡಿದೆ.
ರಾಜ್ಯ ಸರ್ಕಾರವು ಸ್ವತಂತ್ರ ಸಂಸ್ಥೆಯಿಂದ ಹೊಸದಾಗಿ ಲಿಖಿತ ಪರೀಕ್ಷೆ ನಡೆಸಬಹುದು. ಪಾರದರ್ಶಕವಾಗಿ ಪರೀಕ್ಷೆ ನಡೆಸುವುದನ್ನು ಸರ್ಕಾರ ಖಾತರಿಪಡಿಸಬೇಕು ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ಹೇಳಿದೆ.