ಹೊಸದಿಗಂತ ವರದಿ, ಮಡಿಕೇರಿ:
ಗ್ರಾಮಗಳಲ್ಲಿ ಸಾರ್ವಜನಿಕ ಸ್ಮಶಾನ ಭೂಮಿ ಇಲ್ಲದಿದ್ದರೆ ಒಂದು ತಿಂಗಳೊಳಗೆ ಪರಿಶೀಲಿಸಿ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅನುಸೂಚಿತ ಜಾತಿ ಮತ್ತು ಪಂಗಡಗಳ ದೌರ್ಜನ್ಯ ನಿಯಂತ್ರಣ ಜಿಲ್ಲಾ ಜಾಗೃತಿ ಸಮಿತಿ, ಎಸ್ಸಿಎಸ್ಪಿ ಕಾರ್ಯಕ್ರಮದ ಮಾಸಿಕ ಪ್ರಗತಿ ಪರಿಶೀಲನಾ ಹಾಗೂ ಮ್ಯಾನ್ಯುವಲ್ ಸ್ಕಾವೆಂಜರ್ಸ್’ಗಳ ಜಿಲ್ಲಾ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಡಿಕೇರಿ ತಾಲೂಕಿನ ಹಾಕತ್ತೂರು ಗ್ರಾಮದಲ್ಲಿನ ಸರ್ವೇ ನಂಬರ್ 96/6 ರಲ್ಲಿ 0.30 ಸೆಂಟ್ ಜಾಗದ ಆರ್‍ಟಿಸಿಯಲ್ಲಿರುವ ಪೈಸಾರಿ ಜಾಗವನ್ನು ಸಾರ್ವಜನಿಕ ಸ್ಮಶಾನ ಎಂದು ದಾಖಲಿಸಿ ಆರ್‍ಟಿಸಿಯನ್ನು ಗ್ರಾ.ಪಂ.ಗೆ ಹಸ್ತಾಂತರಿಸಿ ಸ್ಮಶಾನ ಭೂಮಿಗೆ ಅವಶ್ಯವಿರುವ ಮೂಲಭೂತ ಸೌಕರ್ಯಗಳನ್ನು ಗ್ರಾ.ಪಂ.ನ ನರೇಗಾ ಕಾರ್ಯಕ್ರಮದಡಿ ಅಭಿವೃದ್ಧಿಪಡಿಸಲು ಜಿಲ್ಲಾಧಿಕಾರಿ ಅವರು ಸೂಚಿಸಿದರು.
ವೀರಾಜಪೇಟೆ ತಾಲೂಕಿನ ಕಾರೆಕಾಡು ಎಂಬಲ್ಲಿ 9 ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಶೌಚಾಲಯ ನಿರ್ಮಿಸುವ ಸಂಬಂಧ ಒಂದು ವಾರದೊಳಗೆ ವರದಿಯನ್ನು ಸಲ್ಲಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
ಜಿಲ್ಲಾ ಕೇಂದ್ರದಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಸಂಬಂಧಿಸಿದಂತೆ ಗುರುತಿಸಿರುವ ನಿವೇಶನವನ್ನು ಪರಿಶೀಲನೆ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಅವರು ತಿಳಿಸಿದರು.
ವೈಯಕ್ತಿಕ ಫಲಾನುಭವಿಗಳು ಯೋಜನೆಯ ಉಪಯೋಗ ಪಡೆಯದೇ ಹೋದಲ್ಲಿ ಯೋಜನೆಯನ್ನು ಸಮುದಾಯಗಳು ಪಡೆಯುವಂತಾಗಲು ಅಗತ್ಯ ಮಾಹಿತಿ ನೀಡಬೇಕು ಮತ್ತು ಆರ್ಥಿಕ ಮತ್ತು ಭೌತಿಕ ಗುರಿ ಸಾಧಿಸಬೇಕೆಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಸ್ಪಷ್ಟ ನಿರ್ದೇಶನ ನೀಡಿದರು.
ಸದಸ್ಯರಾದ ಪಳನಿ ಪ್ರಕಾಶ ಅವರು ಮಾತನಾಡಿ ಬಡವರ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಮಾಡಿ ಎಪಿಎಲ್ ಕಾರ್ಡ್‌ಗಳನ್ನು ನೀಡಲಾಗಿದೆ. ಇದನ್ನು ಪರಿಶೀಲಿಸಿ ಬಿಪಿಎಲ್ ಕಾರ್ಡ್‌ಗಳನ್ನು ಒದಗಿಸಬೇಕೆಂದು ಮನವಿ ಮಾಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಬಿಪಿಎಲ್ ಬದಲಾಗಿ ತಪ್ಪಾಗಿ ಎಪಿಎಲ್ ಕಾರ್ಡ್ ನೀಡಿದವರಿಗೆ ಪರಿಶೀಲಿಸಿ ಬಿಪಿಎಲ್ ಕಾರ್ಡ್‌ಗಳನ್ನು ಒದಗಿಸಲು ಕ್ರಮಕೈಗೊಳ್ಳಲಾಗುವುದು ಎಂದರು.
ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮಾತನಾಡಿ ಪೌರ ಕಾರ್ಮಿಕರ ಗೃಹ ಭಾಗ್ಯ ಯೋಜನೆಯಡಿ ನಿವೃತ್ತಿ ಅಂಚಿನಲ್ಲಿರುವ ಪೌರ ಕಾರ್ಮಿಕರಿಗೆ ಆದ್ಯತೆ ಮೇಲೆ ಮನೆಯನ್ನು ಶೀಘ್ರದಲ್ಲಿ ನಿರ್ಮಿಸುವಂತೆ ಪೌರಾಯುಕ್ತರಿಗೆ ಸೂಚಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ.ಅಯ್ಯಪ್ಪ, ಉಪ ವಿಭಾಗಾಧಿಕಾರಿ ಯತೀಶ್ ಉಲ್ಲಾಳ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ವೆಂಕಟೇಶ್, ಲೋಕೋಪಯೋಗಿ ಇಲಾಖೆ ಇಇ ನಾಗರಾಜು, ಭೂದಾಖಲೆಗಳ ಉಪ ನಿರ್ದೇಶಕ ಶ್ರೀನಿವಾಸ, ಐಟಿಡಿಪಿ ಇಲಾಖಾ ಅಧಿಕಾರಿ ಹೊನ್ನೇಗೌಡ, ತಹಶೀಲ್ದಾರರಾದ ಗೋವಿಂದರಾಜು, ಯೋಗಾನಂದ, ಪ್ರಕಾಶ್, ಪೌರಾಯುಕ್ತ ಎಸ್.ವಿ.ರಾಮದಾಸ್, ಸಮಿತಿ ಸದಸ್ಯರಾದ ಮುತ್ತಪ್ಪ, ಸುಕುಮಾರ್ ಇದ್ದರು.