ಹೊಸದಿಗಂತ ಡಿಜಿಟಲ್ ಡೆಸ್ಕ್:
ನೀಟ್ ಪರೀಕ್ಷೆಗಳ ಫಲಿತಾಂಶ ಪ್ರಕಟಿಸುವಂತೆ ರಾಷ್ಟ್ರೀಯ ಪರೀಕ್ಷಾ ಮಂಡಳಿ(NTA)ಗೆ ಸುಪ್ರೀಂ ಕೋರ್ಟ್ ಸೂಚಿಸಿದೆ.ನೀಟ್-ಯುಜಿ 2024 ಅಕ್ರಮಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ವಿದ್ಯಾರ್ಥಿಗಳ ಗುರುತು ಬಹಿರಂಗ ಪಡಿಸದಂತೆ ಖಡಕ್ ಸೂಚನೆ ನೀಡಿದೆ. ಅಲ್ಲದೇ ವಿಚಾರಣೆಯನ್ನು ಸೋಮವಾರಕ್ಕೆ ಅಂದರೆ ಜು.22ಕ್ಕೆ ಮುಂದೂಡಿದೆ.
ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆ.ಬಿ.ಪರ್ದಿವ್ಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ನ್ಯಾಯಪೀಠವು , ನೀಟ್-ಯುಜಿ 2024ಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆಯನ್ನು ಗುರುವಾರ ನಡೆಸಿತು.
ನೀವು ಡಮ್ಮಿ ರೋಲ್ ಸಂಖ್ಯೆಗಳ ಮೂಲಕ ಫಲಿತಾಂಶ ಪ್ರಕಟಿಸಬಹುದು. ಇದರಿಂದ ಯಾವುದೇ ವಿದ್ಯಾರ್ಥಿಯ ಗುರುತನ್ನು ಬಹಿರಂಗವಾಗುವುದಿಲ್ಲ. ಪ್ರತಿ ಕೇಂದ್ರಕ್ಕೆ ಸಂಬಂಧಿಸಿದಂತೆ ಪ್ರತ್ಯೇಕವಾಗಿ ಫಲಿತಾಂಶವನ್ನು ಪ್ರಕಟಿಸಬೇಕು. ಶುಕ್ರವಾರ ಸಂಜೆ 5 ಗಂಟೆಯೊಳಗೆ ಬಿಡುಗಡೆ ಮಾಡಲಿ. ಅಲ್ಲದೇ ಕೇಂದ್ರವಾರು ಮತ್ತು ನಗರವಾರು ಫಲಿತಾಂಶ ಪ್ರಕಟಿಸುವಂತೆ ಸೂಚಿಸಲಾಗುತ್ತಿದೆ ಎಂದು ಸಿಜೆಐ ಹೇಳಿದರು.
ಈ ಪ್ರಕರಣ ಎನ್‌ಟಿಎಗೆ ಚ್ಯುತಿ ತರುವ ಉದ್ದೇಶದಿಂದ ಮಾಡಿರುವುದಲ್ಲ. ಬದಲಾಗಿ ಇದು ಹಣಕ್ಕಾಗಿ ಮಾಡಿರುವ ಹಗರಣ. ಇನ್ನು ಮರು ಪರೀಕ್ಷೆ ಬಗ್ಗೆ ಪ್ರಸ್ತಾಪಿಸಿದ ಕೋರ್ಟ್ ಅಕ್ರಮ ಇಡೀ ಪರೀಕ್ಷೆಯ ಮೇಲೆ ಪರಿಣಾಮ ಬೀರಿದೆ ಎಂದು ದೃಢಪಟ್ಟರೆ ಮಾತ್ರ ಮರು ಪರೀಕ್ಷೆ (Re-NEET) ಮಾಡಬಹುದು ಎಂದು ಹೇಳಿದೆ.
ಇಡೀ ಪರೀಕ್ಷೆಯ ಪಾವಿತ್ರ್ಯಕ್ಕೆ ಧಕ್ಕೆಯಾಗಿದೆ ಎಂದು ದೃಢವಾದರೆ ಮಾತ್ರ ಮರುಪರೀಕ್ಷೆ ನಡೆಸಬಹುದು ಎಂದು ಡಿ.ವೈ.ಚಂದ್ರಚೂಡ್ ತಿಳಿಸಿದರು. ನಡೆಯುತ್ತಿರುವ ತನಿಖೆಯ ವಿಷಯದ ಬಗ್ಗೆ ನ್ಯಾಯಪೀಠ ವಿವಾದ ಬಗ್ಗೆ ಸಿಬಿಐ ತನಿಖೆ ನಡೆಯುತ್ತಿದೆ. ಸಿಬಿಐ ನಮಗೆ ಹೇಳಿದ್ದನ್ನೆಲ್ಲ ಬಹಿರಂಗಪಡಿಸಿದರೆ, ಅದು ತನಿಖೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ಅವರು ಹೇಳಿದರು.
ಪ್ರಶ್ನೆ ಪತ್ರಿಕೆ ಸೋರಿಕೆಯು ತುಂಬಾ ವ್ಯವಸ್ಥಿತವಾಗಿದೆ ಮತ್ತು ಪರೀಕ್ಷೆಯನ್ನು ರದ್ದುಗೊಳಿಸಬೇಕಾದ ರೀತಿಯಲ್ಲಿ ದೇಶಾದ್ಯಂತ ಪರೀಕ್ಷೆಯ ಮೇಲೆ ಪರಿಣಾಮ ಬೀರಿದೆ ಎನ್ನುವುದನ್ನು ಸಾಬೀತುಪಡಿಸಿ. ಒಂದುವೇಳೆ ನಾವು ಮರು ಪರೀಕ್ಷೆಗೆ ಒಪ್ಪದಿದ್ದರೆ ಬೇರೆ ಯಾವ ತನಿಖೆಯ ಅಗತ್ಯವಿದೆ ಎಂದು ತಿಳಿಯಲು ಬಯಸುತ್ತೇವೆ ಎಂದು ನ್ಯಾಯಪೀಠ ತಿಳಿಸಿದೆ.
ಒಂದು ಲಕ್ಷ ವಿದ್ಯಾರ್ಥಿಗಳು ಮರುಪರೀಕ್ಷೆ ಬಯಸುತ್ತಾರೆ ಅಥವಾ ಪ್ರವೇಶ ಪಡೆದಿಲ್ಲ ಎಂಬ ಕಾರಣಕ್ಕೆ ಮರು ಪರೀಕ್ಷೆಗೆ ಆದೇಶಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ ಸಿಜೆಐ ಡಿ.ವೈ.ಚಂದ್ರಚೂಡ್, ಪರೀಕ್ಷೆಯ ಪಾವಿತ್ರ್ಯಕ್ಕೆ ಧಕ್ಕೆಯಾದರೆ ಮಾತ್ರ ಇದು ಸಾಧ್ಯ ಎಂದು ಹೇಳಿದರು.