ಹೊಸದಿಗಂತ ವರದಿ ಮಡಿಕೇರಿ:
ಮಳೆ ಹಾಗೂ ಪ್ರವಾಹದಿಂದ ಆಗಿರುವ ಹಾನಿಯ ಬಗ್ಗೆ ಬುಧವಾರ ಮುಖ್ಯಮಂತ್ರಿಗಳು ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದು, ಅದರ ಬಳಿಕ ಸರಕಾರದಿಂದ ಪರಿಹಾರ ಒದಗಿಸಲಾಗುತ್ತದೆ.ಜನರ ಭಾವನೆಗಳಿಗೆ ಸ್ಪಂದಿಸಿ ಸರಕಾರ ಕೆಲಸ ಮಾಡಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಬೋಸರಾಜು ಅವರು ಭರವಸೆ ನೀಡಿದರು.
ಮಂಗಳವಾರ ಹಾರಂಗಿ ಜಲಾಶಯಕ್ಕೆ ಭೇಟಿ ನೀಡಿದ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬುಧವಾರ ಸಂಜೆ ನಾಲ್ಕು ಗಂಟೆಗೆ ಜಿಲ್ಲಾಧಿಕಾರಿ, ಜಿ.ಪಂ. ಸಿಇಓ, ಉಸ್ತುವಾರಿ ಸಚಿವರೊಂದಿಗೆ ಮುಖ್ಯಮಂತ್ರಿಯವರು ವಿಡಿಯೋ ಕಾನ್ಪರೆನ್ಸ್ ಮೂಲಕ ಸಭೆ ನಡೆಸಿ ಮಳೆ, ಪ್ರವಾಹ ಹಾನಿ ಮಾಹಿತಿ ಪಡೆಯಲಿದ್ದಾರೆ ಎಂದರು.
ಮಳೆಗಾಲದಲ್ಲಿ ಭಾರೀ ಮಳೆಯಿಂದ ಉಂಟಾಗುವ ವಿಕೋಪಕ್ಕೆ ಶಾಶ್ವತ ಪರಿಹಾರದ ಬಗ್ಗೆಯೂ ತಜ್ಞರ ಸಮಿತಿ ಸೂಕ್ತ ವರದಿ ನೀಡಲಿದೆ. ಈ ವರದಿಯಾನುಸಾರ ಸರ್ಕಾರ ಶೀಘ್ರ ಕ್ರಮಕೈಗೊಳ್ಳಲಿದೆ ಎಂದು ಅವರು ನುಡಿದರು.
ಕುಶಾಲನಗರದ ಮಳೆಹಾನಿ ಪೀಡಿತ ಬಡಾವಣೆಗಳ ನಾಗರಿಕರು, ಜಿಲ್ಲೆಯ ಕಾಫಿ ಬೆಳೆಗಾರರು ಕೂಡಾ ಮಳೆಯಿಂದ ಉಂಟಾಗುತ್ತಿರುವ ಸಮಸ್ಯೆ ಬಗ್ಗೆ ನನ್ನೊಂದಿಗೆ ಚರ್ಚಿಸಿದ್ದು, ಎಲ್ಲದರ ಬಗ್ಗೆ ಅಧಿಕಾರಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಿ ಸಮಸ್ಯೆಗೆ ಪರಿಹಾರ ಕಲ್ಪಿಸುವುದಾಗಿ ಸಚಿವ ಬೋಸರಾಜ್ ಭರವಸೆಯಿತ್ತರು.
ಸರಕಾರದಲ್ಲಿ ಎಲ್ಲವೂ ಸರಿಯಾಗಿದೆ: ಸಿಂಗಾಪುರದಲ್ಲಿ ಸಭೆ ನಡೆಸಿ ರಾಜ್ಯದ ಕಾಂಗ್ರೆಸ್ ಸರ್ಕಾರ ಉರುಳಿಸಲು ನಡೆದಿರುವ ಸಭೆಯ ಬಗ್ಗೆ ನನಗೆ ಮಾಹಿತಿಯಿಲ್ಲ. ಆದರೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿರುವುದನ್ನು ಕೆಲವರಿಗೆ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಹತಾಶರಾಗಿ ಕಾಂಗ್ರೆಸ್ ವಿರುದ್ದ ಬೇಕಾಬಿಟ್ಟಿ ಹೇಳಿಕೆ ನೀಡುವ ಪ್ರಯತ್ನ ನಡೆದಿದೆ. ಹೀಗಾಗಿಯೇ ಕಾಂಗ್ರೆಸ್ ವಿರುದ್ಧ ವದಂತಿಗಳನ್ನು ಹಬ್ಬಿಸುತ್ತಿದ್ದಾರೆ. ಸರಕಾರದಲ್ಲಿ ಯಾವುದೇ ಗೊಂದಲ-ಭಿನ್ನಾಭಿಪ್ರಾಯಗಳಿಲ್ಲ. ಎಲ್ಲವೂ ಸರಿಯಾಗಿದೆ ಎಂದು ಪತ್ರಕರ್ತರ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು.
ಕಾಂಗ್ರೆಸ್’ನ ಶಾಸಕರು, ಸಚಿವರಲ್ಲೂ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಗುರುವಾರ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂಥರ್ ಗೌಡ ಅವರು ಇದೇ ಸಂದರ್ಭ ಹೇಳಿದರು.