ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಪ್ರಮುಖ ಸಮಸ್ಯೆಗಳ ಬಗ್ಗೆ ದೀರ್ಘ ಮತ್ತು ಸಮಗ್ರ ಚರ್ಚೆ ನಡೆಸಲು ಸಾಧ್ಯವಾಗಬೇಕೆಂಬ ಉದ್ದೇಶದಿಂದ ವಿಧಾನಮಂಡಲದ ಚಳಿಗಾಲದ ಅಧಿವೇಶನವನ್ನು ಇನ್ನೂ ಒಂದು ವಾರ ವಿಸ್ತರಿಸಬೇಕೆಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು ಸ್ಪೀಕರ್ ಯು.ಟಿ. ಖಾದರ್ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.
ಡಿಸೆಂಬರ್ 8 ರಿಂದ 19 ರವರೆಗೆ ಬೆಳಗಾವಿಯಲ್ಲಿ ಅಧಿವೇಶನ ನಡೆಸಲು ನಿರ್ಧರಿಸಲಾಗಿದ್ದರೂ, ಕಾರಣಾಂತರಗಳಿಂದ ಎರಡು ದಿನ ಅಧಿವೇಶನ ಮೊಟಕುಗೊಂಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಪ್ರಸ್ತುತ ಜ್ವಲಂತ ಸಮಸ್ಯೆಗಳ ಕುರಿತು ಚರ್ಚೆ ಪೂರ್ಣಗೊಳ್ಳಬೇಕಿದ್ದು, ಅಧಿವೇಶನವನ್ನು ಒಂದು ವಾರ ವಿಸ್ತರಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.
ಅಧಿವೇಶನದ ಅವಧಿಯಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಶಾಸಕರು ಪ್ರಸ್ತಾಪಿಸಿದ ಹಲವು ಗಂಭೀರ ವಿಷಯಗಳಿಗೆ ಮುಖ್ಯಮಂತ್ರಿಗಳು ಮತ್ತು ಸಂಬಂಧಪಟ್ಟ ಸಚಿವರು ಇನ್ನೂ ಉತ್ತರ ನೀಡಬೇಕಿದೆ ಎಂದು ಆರ್. ಅಶೋಕ್ ತಿಳಿಸಿದ್ದಾರೆ. ಇದರ ಜೊತೆಗೆ, ರಾಜ್ಯದಲ್ಲಿ ಕುಸಿದಿರುವ ಕಾನೂನು ಸುವ್ಯವಸ್ಥೆ ಮತ್ತು ಸರ್ಕಾರದ ವಿವಿಧ ಇಲಾಖೆಗಳಲ್ಲಿ ಅನುದಾನ ಬಳಕೆಯ ಕಳಪೆ ಸಾಧನೆ ಸೇರಿದಂತೆ ಅನೇಕ ಮಹತ್ವದ ವಿಚಾರಗಳ ಬಗ್ಗೆ ಶಾಸಕರು ಚರ್ಚಿಸಲು ಸಾಕಷ್ಟು ಸಮಯಾವಕಾಶದ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ.
ಪಡಿತರ ಚೀಟಿ ವಿತರಣೆಯ ವಿಚಾರದಲ್ಲಿ ಸರ್ಕಾರವು ಸಂಪೂರ್ಣ ನಿರ್ಲಕ್ಷ್ಯ ವಹಿಸಿದೆ ಎಂದು ಅಶೋಕ್ ಟೀಕಿಸಿದ್ದಾರೆ. ಇಡೀ ರಾಜ್ಯದಲ್ಲಿ 3.22 ಲಕ್ಷಕ್ಕೂ ಅಧಿಕ ಪಡಿತರ ಚೀಟಿ ಅರ್ಜಿಗಳು ಬಾಕಿ ಉಳಿದಿವೆ. ಈ ಪೈಕಿ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳು ಹಾಗೂ ಬೆಂಗಳೂರಿನಿಂದಲೇ ಅಧಿಕ ಅರ್ಜಿಗಳು ಸಲ್ಲಿಕೆಯಾಗಿವೆ. ಇಂತಹ ಗಂಭೀರ ಸಮಸ್ಯೆಗಳ ಬಗ್ಗೆ ಸಮಗ್ರ ಚರ್ಚೆ ನಡೆದು, ತಕ್ಷಣವೇ ಪರಿಹಾರ ಕಂಡುಕೊಳ್ಳಬೇಕಿದೆ.
ಈ ಎಲ್ಲ ಕಾರಣಗಳಿಂದ ಅಧಿವೇಶನವನ್ನು ತಕ್ಷಣವೇ ಒಂದು ವಾರ ವಿಸ್ತರಿಸುವ ಬಗ್ಗೆ ತೀರ್ಮಾನ ಕೈಗೊಳ್ಳಬೇಕೆಂದು ಆರ್. ಅಶೋಕ್ ಅವರು ಸ್ಪೀಕರ್ ಅವರಿಗೆ ಮನವಿ ಮಾಡಿದ್ದಾರೆ.

