March 5, 2026
Thursday, March 5, 2026
spot_img

ಪಶ್ಚಿಮ ಬಂಗಾಳಕ್ಕೆ ಆರ್.ಎನ್. ರವಿ ನೂತನ ರಾಜ್ಯಪಾಲ: ಕೇಂದ್ರ ಸರಕಾರದ ವಿರುದ್ಧ ದೀದಿ ಗರಂ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ. ಆನಂದ ಬೋಸ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ತಮಿಳುನಾಡಿನ ರಾಜ್ಯಪಾಲ ಆರ್.ಎನ್. ರವಿ ಅವರನ್ನು ಆ ಸ್ಥಾನಕ್ಕೆ ವರ್ಗಾವಣೆ ಮಾಡಿದೆ.

ಈ ಮಕುರಿತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಎಕ್ಸ್‌ನಲ್ಲಿ ತಿಳಿಸಿದ್ದು, ಗೃಹ ಸಚಿವ ಅಮಿತ್ ಶಾ ಅವರು ಆರ್.ಎನ್. ರವಿ ಅವರನ್ನು ಪಶ್ಚಿಮ ಬಂಗಾಳದ ರಾಜ್ಯಪಾಲರನ್ನಾಗಿ ನೇಮಿಸಲಿದ್ದಾರೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರ ರಾಜೀನಾಮೆಯ ಹಠಾತ್ ಸುದ್ದಿ ಕೇಳಿ ನಾನು ಆಘಾತಕ್ಕೊಳಗಾಗಿದ್ದೇನೆ ಮತ್ತು ತೀವ್ರ ಕಳವಳಗೊಂಡಿದ್ದೇನೆ. ಈ ಕ್ಷಣಕ್ಕೆ ಅವರ ರಾಜೀನಾಮೆಯ ಹಿಂದಿನ ಕಾರಣಗಳು ನನಗೆ ತಿಳಿದಿಲ್ಲ. ಆದಾಗ್ಯೂ ಸಂದರ್ಭಗಳನ್ನು ಗಮನಿಸಿದರೆ ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ಮೊದಲು ಕೆಲವು ರಾಜಕೀಯ ಹಿತಾಸಕ್ತಿಗಳಿಗಾಗಿ ರಾಜ್ಯಪಾಲರು ಕೇಂದ್ರ ಗೃಹ ಸಚಿವರಿಂದ ಕೆಲವು ಒತ್ತಡಕ್ಕೆ ಒಳಗಾಗಿದ್ದರೆ ನನಗೆ ಆಶ್ಚರ್ಯವಾಗುವುದಿಲ್ಲ ಎಂದಿದ್ದಾರೆ.

ಇದರ ಬೆನ್ನಲ್ಲೇ ಆರ್.ಎನ್. ರವಿ ಅವರನ್ನು ಪಶ್ಚಿಮ ಬಂಗಾಳದ ರಾಜ್ಯಪಾಲರನ್ನಾಗಿ ನೇಮಿಸಲಾಗುತ್ತಿದೆ ಎಂದು ಕೇಂದ್ರ ಗೃಹ ಸಚಿವರು ನನಗೆ ತಿಳಿಸಿದ್ದಾರೆ. ಇಂತಹ ಕ್ರಮಗಳು ಭಾರತದ ಸಂವಿಧಾನದ ಉದ್ದೇಶವನ್ನು ಹಾಳುಮಾಡುತ್ತವೆ ಮತ್ತು ನಮ್ಮ ಫೆಡರಲ್ ರಚನೆಯ ಅಡಿಪಾಯದ ಮೇಲೆಯೇ ದಾಳಿ ಮಾಡುತ್ತವೆ. ಕೇಂದ್ರವು ಒಕ್ಕೂಟ ವ್ಯವಸ್ಥೆಯ ತತ್ವಗಳನ್ನು ಗೌರವಿಸಬೇಕು ಮತ್ತು ರಾಜ್ಯಗಳ ಘನತೆಯನ್ನು ಕುಗ್ಗಿಸುವ ಏಕಪಕ್ಷೀಯ ನಿರ್ಧಾರಗಳನ್ನು ತೆಗೆದುಕೊಳ್ಳುವುದನ್ನು ತಡೆಯಬೇಕು ಎಂದು ಮಮತಾ ಬ್ಯಾನರ್ಜಿ ಅಸಮಾಧಾನ ಹೊರಹಾಕಿದ್ದಾರೆ.

ಮಣಿಪುರದ ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಅವರು ತಮಿಳುನಾಡಿನ ಉಸ್ತುವಾರಿ ವಹಿಸಲಿದ್ದಾರೆ. ಈ ಬದಲಾವಣೆಯ ಬಗ್ಗೆ ಕೇಂದ್ರ ಸರ್ಕಾರವು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರಿಗೆ ತಿಳಿಸಿದೆ ಎಂದು ಮೂಲಗಳು ತಿಳಿಸಿವೆ.

ಇತ್ತ ಲಡಾಖ್‌ನ ಲೆಫ್ಟಿನೆಂಟ್ ಗವರ್ನರ್ ಕವಿಂದರ್ ಗುಪ್ತಾ ಅವರು ಗುರುವಾರ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಗುಪ್ತಾ ಅವರನ್ನು ಜುಲೈ 2025 ರಲ್ಲಿ ಲಡಾಖ್‌ನ ಮೂರನೇ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಿಸಲಾಗಿತ್ತು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !