ಚುನಾವಣೆಯಲ್ಲಿ ರಾಹುಲ್ ಗಾಂಧಿ, ಪ್ರಿಯಾಂಕಗಾಂಧಿ ಜಾದೂ ನಡೆಯಲ್ಲ: ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಬ್ರಿಜೇಶ್ ಪಾಠಕ್

ಹೊಸ ದಿಗಂತ ವರದಿ, ಮೈಸೂರು:

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನ ರಾಹುಲ್‌ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಅವರ ಜಾದೂ ನಡೆಯುವುದಿಲ್ಲ ಎಂದು ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಬ್ರಿಜೇಶ್ ಪಾಠಕ್ ಹೇಳಿದರು.

ಮಂಗಳವಾರ ಮೈಸೂರಿನ ವಾಣಿವಿಲಾಸ ರಸ್ತೆಯಲ್ಲಿರುವ ಬಿಜೆಪಿ ಮೈಸೂರು ವಿಭಾಗ ಮಾಧ್ಯಮ ಕೇಂದ್ರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ನವರು ಸುಳ್ಳು ಭರವಸೆ ಗಳನ್ನು ಜನರಿಗೆ ನೀಡಿ, ಮರಳು ಮಾಡಿ ಅಧಿಕಾರಕ್ಕೆ ಬರುವ ಪ್ರಯತ್ನ ನಡೆಸುತ್ತಿದ್ದಾರೆ.
ಕರ್ನಾಟಕದ ಜನರು ಇದಕ್ಕೆ ಅವಕಾಶ ನೀಡಬಾರದು. ಜೆಡಿಎಸ್ -ಕಾಂಗ್ರೆಸ್ ಒಂದೇ ನಾಣ್ಯದ ಎರಡು ಮುಖವಿದ್ದಂತೆ, ಒಳ ಒಪ್ಪಂದ ಮಾಡಿಕೊಂಡಿರುತ್ತಾರೆ. ಹಾಗಾಗಿ ಜೆಡಿಎಸ್ ಗೆ ಮತ ನೀಡಿದರೆ, ಕಾಂಗ್ರೆಸ್ ಗೆ ನೀಡಿದಂತೆ. ಜೆಡಿಎಸ್ ನ್ನು ಜನರು ತಿರಸ್ಕರಿಸಬೇಕು.150ಕ್ಕೂ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಗೆಲ್ಲಿಸುವ ಮೂಲಕ ಪ್ರಚಂಡ ಬಹುಮತದೊಂದಿಗೆ ಬಿಜೆಪಿ ಸರ್ಕಾರ ವನ್ನು ಅಧಿಕಾರಕ್ಕೆ ತರಬೇಕು ಎಂದು ಹೇಳಿದರು.

ಉತ್ತರ ಪ್ರದೇಶದ ಚುನಾವಣೆಯಲ್ಲಿ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿಯವರು ಪ್ರಚಾರ ನಡೆಸಿದರೂ, ಅಲ್ಲಿ ಅವರ ಯಾವುದೇ ಜಾದೂ ನಡೆಯಲಿಲ್ಲ, ಕಾಂಗ್ರೆಸ್ ಅಧಿಕಾರಕ್ಕೆ ಬರಲಿಲ್ಲ, ಅದೇ ರೀತಿ ಕರ್ನಾಟಕ ರಾಜ್ಯದ ಚುನಾವಣೆಯಲ್ಲಿ ಅವರು ಬಂದು ಪ್ರಚಾರ ನಡೆಸಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ ಎಂದರು.

ಸಂಸದ ಪ್ರತಾಪ್ ಸಿಂಹ, ಶಾಸಕ ಎಲ್.ನಾಗೇಂದ್ರ, ಮೈಸೂರು ಮಹಾನಗರ ಪಾಲಿಕೆಯ ಮೇಯರ್ ಶಿವಕುಮಾರ್, ಬಿಜೆಪ ನಗರ ಕಾರ್ಯಾಧ್ಯಕ್ಷ ಹೆಚ್.ಜಿ.ಗಿರಿಧರ್, ಜಿಲ್ಲಾ ಸಹ ವಕ್ತಾರ ಡಾ.ಕೆ.ವಸಂತ್ ಕುಮಾರ್, ಮೈಸೂರು ವಿಭಾಗ ಮಾಧ್ಯಮ ಕೇಂದ್ರದ ಸಂಯೋಜಕ ನಾಗೇಶ್, ಜಿಲ್ಲಾ ಮಾಧ್ಯಮ ಸಂಚಾಲಕ ಮಹೇಶ್ ರಾಜೇ ಅರಸ್, ಸಹ ವಕ್ತಾರ ಕೇಬಲ್ ಮಹೇಶ್, ಸಹ ಸಂಚಾಲಕ ಪ್ರದೀಪ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!