ಹೊಸದಿಗಂತ ವರದಿ ಯಾದಗಿರಿ:
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ವಿರೋಧ ಪಕ್ಷದ ನಾಯಕರ ವಿರುದ್ಧ ಕೈಗೊಂಡಿರುವ ಕ್ರಮವನ್ನು ಸಚಿವ ಎಂ.ಬಿ. ಪಾಟೀಲ್ ತೀವ್ರವಾಗಿ ಖಂಡಿಸಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,ರಾಹುಲ್ ಗಾಂಧಿ ಅವರನ್ನು ಬಂಧಿಸಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ. ಸಂವಿಧಾನದ ಮೌಲ್ಯಗಳಿಗೆ ಗೌರವ ಇಲ್ಲದಂತಾಗಿದೆ. ರಾಜಕೀಯ ದ್ವೇಷದಿಂದ ವಿರೋಧ ಪಕ್ಷದ ನಾಯಕರನ್ನು ಗುರಿಯಾಗಿಸುವುದು ಸರಿಯಲ್ಲ ಎಂದು ಹೇಳಿದರು.
ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳ ಕುರಿತು ಪ್ರತಿಕ್ರಿಯಿಸಿದ ಅವರು, ಲಕ್ಷಾಂತರ ವಿದ್ಯಾರ್ಥಿಗಳು ಮಾನಸಿಕ ಒತ್ತಡಕ್ಕೆ ಒಳಗಾಗಿದ್ದು, ಕೆಲವರು ಪ್ರಾಣ ಕಳೆದುಕೊಂಡಿರುವುದು ನೋವಿನ ಸಂಗತಿ ಎಂದರು. ಇಂತಹ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಸಂಬಂಧಪಟ್ಟ ಸಚಿವರನ್ನು ವಜಾಗೊಳಿಸಿ, ಶಿಕ್ಷಣ ತಜ್ಞರು ಹಾಗೂ ವಿದ್ಯಾರ್ಥಿಗಳೊಂದಿಗೆ ಚರ್ಚಿಸಿ ಪರೀಕ್ಷಾ ವ್ಯವಸ್ಥೆಯನ್ನು ಸುಧಾರಿಸಬೇಕಿತ್ತು. ಆದರೆ ಸರ್ಕಾರ ಆ ದಿಸೆಯಲ್ಲಿ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.
ಕರ್ನಾಟಕದ ಸಿಇಟಿ ಪರೀಕ್ಷಾ ವ್ಯವಸ್ಥೆಯನ್ನು ಉದಾಹರಣೆಯಾಗಿ ಉಲ್ಲೇಖಿಸಿದ ಅವರು, ತಂತ್ರಜ್ಞಾನ ಹಾಗೂ ಕೃತಕ ಬುದ್ಧಿಮತ್ತೆ (AI) ಬಳಸಿ ಪಾರದರ್ಶಕ ಮತ್ತು ಸುರಕ್ಷಿತ ಪರೀಕ್ಷಾ ವ್ಯವಸ್ಥೆ ರೂಪಿಸಬಹುದಾಗಿದೆ. ಆದರೆ ಕೇಂದ್ರ ಸರ್ಕಾರ ಅದಕ್ಕೆ ಆದ್ಯತೆ ನೀಡಿಲ್ಲ ಎಂದು ಟೀಕಿಸಿದರು.
ಕೇಂದ್ರ ಸರ್ಕಾರ ಉದ್ಯೋಗ ಸೃಷ್ಟಿ, ಬೆಲೆ ಏರಿಕೆ ನಿಯಂತ್ರಣ ಹಾಗೂ ಆರ್ಥಿಕ ನೀತಿಗಳ ವಿಷಯದಲ್ಲಿ ವಿಫಲವಾಗಿದೆ. ನೋಟು ಅಮಾನ್ಯೀಕರಣದಿಂದ ಸಣ್ಣ ವ್ಯಾಪಾರಿಗಳು ಮತ್ತು ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದರು. ಹಿಂದಿನ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ ದೇಶದ ಆರ್ಥಿಕ ವ್ಯವಸ್ಥೆ ಬಲಿಷ್ಠವಾಗಿತ್ತು. ಈಗಿನ ನೀತಿಗಳಿಂದ ಅದು ದುರ್ಬಲಗೊಂಡಿದೆ ಎಂದು ಎಂ.ಬಿ. ಪಾಟೀಲ್ ಆರೋಪಿಸಿದರು.



