ರಾಹುಲ್-ಸೂರ್ಯಕುಮಾರ್ ಯಾದವ್ ಅರ್ಧಶತಕ: ಜಿಂಬಾಬ್ವೆಗೆ 187 ರನ್ ಟಾರ್ಗೆಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕೆ ಎಲ್ ರಾಹುಲ್ ಹಾಗೂ ಸೂರ್ಯಕುಮಾರ್ ಯಾದವ್ ಆಕರ್ಷಕ ಅರ್ಧಶತಕಗಳ ನೆರವಿನಿಂದ ಟೀಂ ಇಂಡಿಯಾ 20 ಓವರ್‌ಗಳಲ್ಲಿ 5 ವಿಕೆಟ್‌ ಕಳೆದುಕೊಂಡು 186 ರನ್‌ ಕಲೆಹಾಕಿದೆ.

ಈಗಾಗಲೇ ಸೆಮೀಸ್ ಹಾದಿಯನ್ನು ಖಚಿತಪಡಿಸಿಕೊಂಡಿರುವ ಟೀಂ ಇಂಡಿಯಾ ಜಿಂಬಾಬ್ವೆ ವಿರುದ್ಧ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡರು. ರೋಹಿತ್ ಶರ್ಮಾ ಕೇವಲ 15 ರನ್ ಬಾರಿಸಿ ವಿಕೆಟ್ ಒಪ್ಪಿಸುವ ಮೂಲಕ ಮತ್ತೊಮ್ಮೆ ವಿಫಲವಾದರು. ಇದಾದ ಬಳಿಕ ಎರಡನೇ ವಿಕೆಟ್‌ಗೆ ವಿರಾಟ್ ಕೊಹ್ಲಿ ಹಾಗೂ ಕೆ ಎಲ್ ರಾಹುಲ್‌ 60 ರನ್‌ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ವಿರಾಟ್ ಕೊಹ್ಲಿ 25 ಎಸೆತಗಳಲ್ಲಿ 2 ಬೌಂಡರಿ ಸಹಿತ 26 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.
ಕೆ.ಎಲ್. ರಾಹುಲ್ ಇದೀಗ ಮತ್ತೊಂದು ಅರ್ಧಶತಕ ಸಿಡಿಸಿ ತಂಡಕ್ಕೆ ಆಸರೆಯಾಗಿದ್ದಾರೆ. ಕೇವಲ 35 ಎಸೆತಗಳನ್ನು ಎದುರಿಸಿ 3 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ ಆಕರ್ಷಕ 51 ರನ್ ಬಾರಿಸಿದರು.

ದಿನೇಶ್ ಕಾರ್ತಿಕ್ ಬದಲಿಗೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆದಿದ್ದ ರಿಷಭ್ ಪಂತ್, ಸಿಕ್ಕ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಲು ವಿಫಲರಾದರು. ಪಂತ್ ಕೇವಲ 5 ಎಸೆತಗಳನ್ನು ಎದುರಿಸಿ ಕೇವಲ 3 ರನ್‌ ಬಾರಿಸಿ ಸೀನ್ ವಿಲಿಯಮ್ಸ್‌ಗೆ ವಿಕೆಟ್ ಒಪ್ಪಿಸಿದರು.

ಒಂದು ಹಂತದಲ್ಲಿ 101 ರನ್‌ಗಳಿಗೆ 4 ವಿಕೆಟ್ ಕಳೆದುಕೊಂಡಿದ್ದಾಗ 5ನೇ ವಿಕೆಟ್‌ ಸೂರ್ಯಕುಮಾರ್ ಯಾದವ್ ಹಾಗೂ ಹಾರ್ದಿಕ್ ಪಾಂಡ್ಯ 65 ರನ್‌ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು.

ಹಾರ್ದಿಕ್ ಪಾಂಡ್ಯ 18 ಎಸೆತಗಳಲ್ಲಿ 18 ರನ್ ಬಾರಿಸಿ ವಿಕೆಟ್ ಒಪ್ಪಿಸಿದರೆ, ಮತ್ತೊಂದು ತುದಿಯಲ್ಲಿ ಸ್ಪೋಟಕ ಬ್ಯಾಟಿಂಗ್ ನಡೆಸಿದ 23 ಎಸೆತಗಳಲ್ಲಿ ಆಕರ್ಷಕ ಅರ್ಧಶತಕ ಸಿಡಿಸಿ ಸಂಭ್ರಮಿಸಿದರು. ಸೂರ್ಯಕುಮಾರ್ ಯಾದವ್ 25 ಎಸೆತಗಳಲ್ಲಿ 6 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ ಅಜೇಯ 61 ರನ್ ಬಾರಿಸುವ ಮೂಲಕ ತಂಡದ ಮೊತ್ತವನ್ನು 185ರ ಗಡಿದಾಟಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!