ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದ ರಾಯಗಡ ಜಿಲ್ಲೆಯ ಖಲಾಪುರ ತೆಹಸಿಲ್‌ನ ಇರ್ಶಾಲವಾಡಿ ಗ್ರಾಮದಲ್ಲಿ ಬುಧವಾರ ಮಧ್ಯರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಭೂಕುಸಿತ ಸಂಭವಿಸಿದ್ದು, ಘಟನೆಯಲ್ಲಿ ಈವರೆಗಿನ ಸಾವಿನ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. 119 ಮಂದಿಗಾಗಿ ತೀವ್ರ ಶೋಧ ಮುಂದುವರಿದಿದೆ.
ಭಾರಿ ಮಳೆಯ ನಡುವೆಯೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯಿಂದ (ಎನ್‌ಡಿಆರ್‌ಎಫ್) ರಕ್ಷಣಾ ಮತ್ತು ಶೋಧ ಕಾರ್ಯಾಚರಣೆ ಇಂದು ಬೆಳಗ್ಗೆಯಿಂದ ಪುನರಾರಂಭವಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಗ್ರಾಮದ ಒಟ್ಟು 228 ನಿವಾಸಿಗಳ ಪೈಕಿ ಇದುವರೆಗೆ 16 ಮಂದಿಯ ಮೃತದೇಹ ಪತ್ತೆಯಾಗಿದ್ದು, 27ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ. 93 ಮಂದಿಯನ್ನು ಪತ್ತೆ ಹಚ್ಚಲಾಗಿದೆ. ಒಟ್ಟು 119 ಗ್ರಾಮಸ್ಥರು ನಾಪತ್ತೆಯಾಗಿದ್ದಾರೆ. ಇವರಲ್ಲಿ ಮದುವೆ ಸೇರಿದಂತೆ ತೋಟದ ಕೆಲಸಕ್ಕಾಗಿ ಗ್ರಾಮದಿಂದ ಹೊರಗೆ ಹೋದವರು ಸೇರಿದ್ದಾರೆ. ಗ್ರಾಮದಲ್ಲಿರುವ ಸುಮಾರು 50 ಮನೆಗಳ ಪೈಕಿ 17 ಮನೆಗಳು ಭೂಕುಸಿತದಿಂದ ನೆಲಸಮವಾಗಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಘಟನಾ ಸ್ಥಳಕ್ಕೆ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ.